ADVERTISEMENT

ಶಿಶು ಪಾಲನಾ ಕೇಂದ್ರಗಳು ಕಾರ್ಯಾರಂಭ

ನರೇಗಾ ಕೂಲಿಕಾರ್ಮಿಕರ 3ವರ್ಷದ ಒಳಗಿನ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ, ಆರೈಕೆ

Pavitra Bhat
Published 29 ನವೆಂಬರ್ 2023, 5:04 IST
Last Updated 29 ನವೆಂಬರ್ 2023, 5:04 IST
ಹಿರೇಕೊಟ್ನೇಕಲ್ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಆರಂಭಿಸಿರುವ ಶಿಶು ಪಾಲನಾ ಕೇಂದ್ರ
ಹಿರೇಕೊಟ್ನೇಕಲ್ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಆರಂಭಿಸಿರುವ ಶಿಶು ಪಾಲನಾ ಕೇಂದ್ರ   

ಮಾನ್ವಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ತಾಲ್ಲೂಕಿನ ಒಟ್ಟು 17 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ‘ಕೂಸಿನ ಮನೆ’ ಶೀರ್ಷಿಕೆ ಅಡಿಯಲ್ಲಿ ಶಿಶು ಪಾಲನಾ ಕೇಂದ್ರಗಳ ಆರಂಭಕ್ಕೆ ಚಾಲನೆ ನೀಡಲಾಗಿದೆ.

ಮೊದಲ ಹಂತದಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ ತಲಾ ಒಂದರಂತೆ 17 ಶಿಶು ಪಾಲನಾ ಕೇಂದ್ರಗಳನ್ನು ಮಂಜೂರು ಮಾಡಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಉದ್ಯೋಗ ಕಾರ್ಡ್ ಹೊಂದಿರುವ ಕುಟುಂಬಗಳ 3 ವರ್ಷದೊಳಗಿನ ಮಕ್ಕಳಿಗೆ ಶಿಶು ಪಾಲನಾ ಕೇಂದ್ರದಲ್ಲಿ ಸುರಕ್ಷತೆ, ಶಾಲಾ ಪೂರ್ವ ಶಿಕ್ಷಣ, ಪೌಷ್ಟಿಕ ಆಹಾರ ಸೌಲಭ್ಯ ಒದಗಿಸಲು ನಿರ್ಧರಿಸಲಾಗಿದೆ. ಇದರಿಂದ ನರೇಗಾ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶ ಹಾಗೂ ನೆಮ್ಮದಿಯಿಂದ ಕೆಲಸ ಮಾಡಲು ಅವಕಾಶ ಕಲ್ಪಿಸುವ ಉದ್ದೇಶ ಹೊಂದಲಾಗಿದೆ.

ಗ್ರಾಮಗಳಲ್ಲಿರುವ ಸಮುದಾಯ ಭವನ, ಹಳೆಯ ಅಂಗನವಾಡಿ ಹಾಗೂ ಶಾಲಾ ಕಟ್ಟಡಗಳನ್ನು ದುರಸ್ತಿಗೊಳಿಸಿ ಶಿಶು ಪಾಲನಾ ಕೇಂದ್ರಗಳನ್ನು ತೆರೆಯಲಾಗಿದೆ. ಪ್ರತಿ ಕೇಂದ್ರಕ್ಕೆ 25 ಮಕ್ಕಳ ಪ್ರವೇಶಕ್ಕೆ ಅವಕಾಶ ಇದೆ. ತಾಲ್ಲೂಕಿನಲ್ಲಿ ಪ್ರಸ್ತುತ ಒಟ್ಟು 14 ಶಿಶುಪಾಲನಾ ಕೇಂದ್ರಗಳು ಕಾರ್ಯಾರಂಭ ಮಾಡಿದ್ದು, 3 ವರ್ಷದೊಳಗಿನ ಒಟ್ಟು 138 ಮಕ್ಕಳು ಪ್ರವೇಶ ಪಡೆದಿದ್ದಾರೆ.

ADVERTISEMENT

ಅರೋಲಿ ಹಾಗೂ ಸಂಗಾಪುರ ಗ್ರಾಮ ಪಂಚಾಯಿತಿಗಳಲ್ಲಿ ಶಿಶು ಪಾಲನಾ ಕೇಂದ್ರಗಳು ಸಿದ್ಧಗೊಂಡಿದ್ದು ಇನ್ನೂ ಕಾರ್ಯಾರಂಭ ಮಾಡಿಲ್ಲ. ಉಟಕನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೇಂದ್ರದ ಆರಂಭಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ವಿಫಲರಾಗಿದ್ದಾರೆ.

ಶಿಶು ಪಾಲನಾ ಕೇಂದ್ರದ ಮಕ್ಕಳ ನಿರ್ವಹಣೆಗೆ ಇಲಾಖೆಯ ನಿರ್ದೇಶನದಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನರೇಗಾ ಉದ್ಯೋಗ ಕಾರ್ಡ್ ಹೊಂದಿರುವ ಕನಿಷ್ಠ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಇರುವ 10 ಮಹಿಳೆಯರನ್ನು ಗುರುತಿಸಿ, ಅದರಲ್ಲಿ ಇಬ್ಬರನ್ನು ಕೇರ್ ಟೇಕರ್ಸ್‌ಗಳನ್ನಾಗಿ ರೊಟೇಶನ್ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ. ಕೇರ್ ಟೇಕರ್ಸ್‌ಗಳಿಗೆ ನರೇಗಾ ಯೋಜನೆ ಅಡಿಯಲ್ಲಿ ಕನಿಷ್ಠ 100 ದಿನಗಳಿಗೆ ನಿಗದಿಪಡಿಸಿದ ಕೂಲಿ ಹಣ ಪಾವತಿಗೆ ಕ್ರಮ ಕೈಗೊಳ್ಳಲಾಗಿದೆ. ಶಿಶು ಪಾಲನಾ ಕೇಂದ್ರಗಳ ಕೇರ್ ಟೇಕರ್ಸ್‌ಗಳಿಗೆ ತರಬೇತಿ, ಮಕ್ಕಳಿಗೆ ಕಲಿಕಾ ಸಾಮಗ್ರಿ ಹಾಗೂ ಪೌಷ್ಟಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಒಳಗೊಂಡಿರುವ ಸಮಿತಿಗಳು ಕಾರ್ಯನಿರ್ವಹಿಸಲಿವೆ ಎಂದು ತಿಳಿದು ಬಂದಿದೆ.

ಶಿಶು ಪಾಲನಾ ಕೇಂದ್ರಗಳಲ್ಲಿ ನರೇಗಾ ಕೂಲಿಕಾರ್ಮಿಕರ ಮಕ್ಕಳಿಗೆ ಸುರಕ್ಷತೆ ಶಾಲಾ ಪೂರ್ವ ಶಿಕ್ಷಣ ಪೌಷ್ಟಿಕ ಆಹಾರ ಒದಗಿಸಲಾಗುವುದು.

–ಖಾಲೀದ್ ಅಹ್ಮದ್ ತಾ.ಪಂ ಇಒ ಮಾನ್ವಿ

ಗ್ರಾಮೀಣ ಭಾಗದ ಕೂಲಿಕಾರ್ಮಿಕರ ಮಕ್ಕಳಿಗಾಗಿ ಶಿಶು ಪಾಲನಾ ಕೇಂದ್ರಗಳ ಆರಂಭ ಶ್ಲಾಘನೀಯ

–ಶರಣಕುಮಾರ ಮುದ್ದನಗುಡ್ಡಿ ಸಾಮಾಜಿಕ ಕಾರ್ಯಕರ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.