
ರಾಯಚೂರಿನ ಜಿಲ್ಲಾ ಪೊಲೀಸ್ ಮುಖ್ಯಾಲಯದ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಬಾಲನ್ಯಾಯ (ಪೋಷಣೆ ಮತ್ತು ರಕ್ಷಣೆ) ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ ಹಾಗೂ ಪೋಸ್ಕೊ ಕಾಯ್ದೆ ಕುರಿತ ದಿನದ ತರಬೇತಿ ಕಾರ್ಯಗಾರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಉದ್ಘಾಟಿಸಿದರು.
ರಾಯಚೂರು: ಮಕ್ಕಳು ದೇಶದ ಆಸ್ತಿ, ಅವರ ರಕ್ಷಣೆ, ಸುರಕ್ಷತೆ ಪ್ರತಿಯೊಬ್ಬರ ಹೊಣೆಯಾಗಿದೆ. ಮಕ್ಕಳ ಹಕ್ಕುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕಾಯ್ದೆಗಳನ್ನು ಅರಿತುಕೊಳ್ಳಬೇಕಿದೆ’ ಎಂದು ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ ಹೇಳಿದರು.
ಇಲ್ಲಿಯ ಜಿಲ್ಲಾ ಪೊಲೀಸ್ ಮುಖ್ಯಾಲಯದ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಬಾಲನ್ಯಾಯ (ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015, ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಪೋಸ್ಕೊ ಕಾಯ್ದೆ-2012 ಹಾಗೂ ದತ್ತು ನಿಯಾಮವಳಿಗಳು-2022ರ ಕುರಿತ ಒಂದು ದಿನದ ತರಬೇತಿ ಕಾರ್ಯಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಕಾನೂನುಗಳು ಮಾನವೀಯ ಮೌಲ್ಯಗಳಿಂದ ಕೂಡಿವೆ. ಡಾ.ಬಿ.ಆರ್.ಅಂಬೇಡ್ಕರ್ ಹೇಳುವಂತೆ ಕಾನೂನುಗಳ ಸಮರ್ಪಕ ಅನುಷ್ಠಾನವು ನಮ್ಮಲ್ಲಿನ ಇಚ್ಛಾಶಕ್ತಿಯನ್ನು ಅವಲಂಬಿಸಿದೆ’ ಎಂದು ತಿಳಿಸಿದರು.
‘ಬಾಲ್ಯ ವಿವಾಹ, ಭಿಕ್ಷಾಟನೆ, ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ಶೂನ್ಯಕ್ಕಿಳಿಯಬೇಕಿದೆ.
ಅಧಿಕಾರಿಗಳು ಮತ್ತು ಸಿಬ್ಬಂದಿ ಸಹಾಯವಾಣಿ ಕರೆಗಳು ಬಂದಾಗ ಮಾತ್ರ ಕಾರ್ಯಾಚರಣೆ ನಡೆಸಬಾರದು. ನಿತ್ಯ ಕಾರ್ಯಾಚರಣೆಯಲ್ಲಿ ತೊಡಗಿಕೊಳ್ಳಬೇಕು‘ ಎಂದು ಸೂಚಿಸಿದರು.
‘ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೇ ಮಕ್ಕಳ ರಕ್ಷಣೆಯ ಹೆಚ್ಚಿನ ಹೊಣೆ ಇದೆ ಎಂದು ಯಾರೂ ಭಾವಿಸಬಾರದು. ಮಕ್ಕಳ ರಕ್ಷಣೆಗೆ ಬೇರೆ ಬೇರೆ ಇಲಾಖೆಗಳು ಸಹ ಕೈಜೋಡಿಸಬೇಕು. ಮುಖ್ಯವಾಗಿ ಸಾರ್ವಜನಿಕರು ಸಹಕಾರ ನೀಡಬೇಕು‘ ಎಂದು ಮನವಿ ಮಾಡಿದರು.
ಸಂಪನ್ಮೂಲ ವ್ಯಕ್ತಿ ಬೆಂಗಳೂರಿನ ಸಿ.ಐ.ಡಿ. ಕಚೇರಿಯ ಪೊಲೀಸ್ ತರಬೇತುದಾರ ರೋಹಿತ ಸಿ.ಜೆ. ಮಾತನಾಡಿ, ‘ಭಿಕ್ಷಾಟನೆ ಮಾಡುತ್ತಿರುವ ಮಕ್ಕಳು, ಬಾಲ ಕಾರ್ಮಿಕ ಮಕ್ಕಳು, ಕಾಣೆಯಾದ ಮಕ್ಕಳು, ಒಂಟಿ ಮಕ್ಕಳು, ಮಾದಕ ವ್ಯಸನಿ, ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ, ಹಿಂಸೆ ಮತ್ತು ಅತ್ಯಾಚಾರ, ಶಿಕ್ಷಣ ವಂಚಿತ ಮಕ್ಕಳು ಕಂಡು ಬಂದಲ್ಲಿ ತಕ್ಷಣ 1098 ಅಥವಾ 112 ಗೆ ಕರೆ ಮಾಡಬಹುದು’ ಎಂದು ತಿಳಿಸಿದರು.
‘ಬಾಲನ್ಯಾಯ ಕಾಯ್ದೆ 2015ರ ಸೆಕ್ಷನ್ 81 ರನ್ವಯ ಮಕ್ಕಳನ್ನು ಮಾರಾಟ ಮಾಡಿದವರಿಗೂ ಹಾಗೂ ಮಕ್ಕಳನ್ನು ಕೊಂಡುಕೊಳ್ಳುವವರಿಗೆ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1 ಲಕ್ಷ ದಂಡವನ್ನು ವಿಧಿಸಬಹುದು. ಒಂದು ವೇಳೆ ಅಂತಹ ಪ್ರಕರಣಗಳಲ್ಲಿ ಆಸ್ಪತ್ರೆ ಸಿಬ್ಬಂದಿಯವರು ಶಾಮೀಲಾಗಿದ್ದಲ್ಲಿ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಲು ಅವಕಾಶ ಕಲ್ಪಿಸಲಾಗಿದೆ‘ ಎಂದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಹೇಳಿದರು. ನಂತರ ಪ್ರತಿಜ್ಞಾ ವಿಧಿ ಬೋಧಿಸಿದರು.
ದತ್ತು ಪ್ರಕ್ರಿಯೆ ಹಾಗೂ 1098 ಮಕ್ಕಳ ಸಹಾಯವಾಣಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು.
ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಜಿಲ್ಲಾ ಸದಸ್ಯೆ ಜಯ ಸುಧಾರಾಣಿ, 1ನೇ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ. ಕುಮಾರಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಯು. ನವೀನಕುಮಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಮರೇಶ, ಪೊಲೀಸ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ಕಾರ್ಯಾಗಾರ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.