ರಾಯಚೂರು: ‘ಕ್ರೈಸ್ತ ಸಮುದಾಯದ ಅರ್ಹ ಫಲಾನುಭವಿಗಳು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆಯಬೇಕು’ ಎಂದು ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರದಾರ್ ಹೇಳಿದರು.
‘ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿವಿಧ ಸೌಲಭ್ಯ ಯೋಜನೆಗಳ ಬಗ್ಗೆ ಕರಪತ್ರಗಳನ್ನು ಹಂಚಿ ಫಲಾನುಭವಿಗಳಿಗೆ ಮಾಹಿತಿ ನೀಡುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ’ ಎಂದು ನಗರದಲ್ಲಿ ಬುಧವಾರ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು.
‘ನಿಗಮದ ಕೈಪಿಡಿಯಲ್ಲಿ ಯೋಜನೆ ಕುರಿತು ಮಾಹಿತಿ ಒದಗಿಸಲಾಗಿದೆ. ಪ್ರತಿಯೊಬ್ಬರೂ ಕೈಪಿಡಿ ಓದಿ, ಆರ್ಥಿಕ, ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು. ಉನ್ನತ ಶಿಕ್ಷಣ ಪಡೆದು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ನಿಗಮದಿಂದ ವಿದ್ಯಾಭ್ಯಾಸಕ್ಕಾಗಿ ₹ 30 ಲಕ್ಷ ಸಹಾಯಧನ ನೀಡಲಾಗುತ್ತಿದೆ. ಶಿಕ್ಷಣ ಕ್ಷೇತ್ರಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶೇ 75ರಷ್ಟು ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ’ ಎಂದರು.
‘371 (ಜೆ) ಜಾರಿ ಮುಂಚೆ ಈ ಭಾಗದಲ್ಲಿ ವೈದ್ಯರ ಸಂಖ್ಯೆ ಕಡಿಮೆ ಇತ್ತು. 371 (ಜೆ) ಜಾರಿಯಾದ ನಂತರ ವೈದ್ಯರು, ಎಂಜಿನಿಯರ್‌ಗಳ ಸಂಖ್ಯೆ ಹೆಚ್ಚಳವಾಗಿದೆ. ಇದಕ್ಕೆ ಮುಖ್ಯ ಕಾರಣ ಮಲ್ಲಿಕಾರ್ಜುನ ಖರ್ಗೆ ಅವರು’ ಎಂದು ಹೇಳಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಂಗಮೇಶ ಮಾತನಾಡಿ, ‘ಜಿಲ್ಲೆಯ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಊಟ, ಉಪಾಹಾರ ನೀಡಲಾಗುತ್ತಿದೆ. ಕೆಲ ವಸತಿ ಶಾಲೆಯಲ್ಲಿ ಕಾಟ್‌ಗಳ ಕೊರತೆ ಇದೆ. ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಶೀಘ್ರ ಸಮಸ್ಯೆ ನಿವಾರಣೆಯಾಗಲಿದೆ’ ಎಂದು ತಿಳಿಸಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ರಾಯಚೂರು ತಾಲ್ಲೂಕು ವಿಸ್ತರಣಾಧಿಕಾರಿ ನರಸಿಂಹ ನಾಯಕ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.