
ಸಿಂಧನೂರು: ಜ.3 ರಂದು ಸುಕ್ಷೇತ್ರ ಅಂಬಾಮಠದ ಅಂಬಾದೇವಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಾಲ್ಲೂಕಿನಲ್ಲಿ ₹ 400 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಹಂಪನಗೌಡ ಬಾದರ್ಲಿ ತಿಳಿಸಿದರು.
ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಶನಿವಾರ ಅವರು ಮಾತನಾಡಿದರು.
‘ಸಿಎಂ ಅವರೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಡಾ.ಶರಣಪ್ರಕಾಶ ಪಾಟೀಲ, ಸಚಿವ ಶಿವರಾಜ್ ತಂಗಡಗಿ, ಪ್ರಿಯಾಂಕ್ ಖರ್ಗೆ ಪಾಲ್ಗೊಳ್ಳುವರು. ತಾಲ್ಲೂಕಿನ 24 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಈಗಾಗಲೇ ಪ್ರಸ್ತಾವ ಕಳುಹಿಸಲಾಗಿದ್ದು, ಅನುಮೋದನೆ ಹಂತದಲ್ಲಿದೆ. ಅಂದು ಮುಖ್ಯಮಂತ್ರಿಗಳು ಪ್ರತಿ ಗ್ರಾಮಗಳ 5 ಜನರಿಗೆ ಹಕ್ಕುಪತ್ರಗಳನ್ನು ಸಾಂಕೇತಿಕವಾಗಿ ನೀಡಲಿದ್ದಾರೆ ಎಂದು ಹೇಳಿದರು.
ಈಗಾಗಲೇ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಜಿಲ್ಲಾಧಿಕಾರಿ ಪೂರ್ವ ಸಿದ್ಧತೆಗಳನ್ನು ವೀಕ್ಷಿಸಿದ್ದಾರೆ. ತಹಶೀಲ್ದಾರ್ ಮೇಲುಸ್ತುವಾರಿಯನ್ನು ವಹಿಸಿದ್ದು, ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು. ಭಕ್ತಿ-ಶಕ್ತಿ-ಪರಂಪರೆಯ ದಿವ್ಯ ಸಂಗಮ ಘೋಷವಾಕ್ಯದೊಂದಿಗೆ 5 ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಅವರು ವಿವರಿಸಿದರು.
15 ವಿಶೇಷ ಬಸ್ ವ್ಯವಸ್ಥೆ: ಜ.3 ರಂದೇ 15 ಹೊಸ ಬಸ್‌ಗಳನ್ನು ಲೋಕಾರ್ಪಣೆಗೊಳಿಸಲಾಗುತ್ತಿದೆ. ಕಾಲೇಜು ವಿದ್ಯಾರ್ಥಿಗಳನ್ನು ಕರೆ ತರಲು ಈ ಬಸ್‌ಗಳನ್ನು ಜಾತ್ರಾ ಮಹೋತ್ಸವಕ್ಕೆ ನಿಯೋಜಿಸಲಾಗುವುದು. ಈ ಬಗ್ಗೆ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೂ ಮಾತುಕತೆ ನಡೆಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಘೋಷಣೆಗೆ ಮನವಿ: ಜಾತ್ರೆ ಮುಗಿದ ನಂತರ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸಿಂಧನೂರನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕೆನ್ನುವ ಹಕ್ಕೊತ್ತಾಯದ ಕುರಿತು ವಿವಿಧ ಸಂಘಟನೆಗಳ, ಮುಖಂಡರ ಸಭೆಯನ್ನು ಕರೆಯಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಶಾಸಕರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.