ADVERTISEMENT

ತರಗತಿ ನಡೆಸದೇ ವೇಳಾಪಟ್ಟಿ ಬಿಡುಗಡೆ: ಪದವಿ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2025, 6:44 IST
Last Updated 28 ಸೆಪ್ಟೆಂಬರ್ 2025, 6:44 IST
ರಾಯಚೂರಿನ ಸರ್ಕಾರಿ ಪದವಿ ಕಾಲೇಜಿನ ಎದುರು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು
ರಾಯಚೂರಿನ ಸರ್ಕಾರಿ ಪದವಿ ಕಾಲೇಜಿನ ಎದುರು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು   

ರಾಯಚೂರು: ರಾಜ್ಯದ ಎಲ್ಲ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಯಚೂರಿನ ಮಹಿಳಾ ಕಾಲೇಜು ಹಾಗೂ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದರು.

ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ತರಗತಿ ಬಹಿಷ್ಕಾರಕ್ಕೆ ಕರೆ ನೀಡಿದ್ದರಿಂದ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಬ್ಯಾನರ್‌ಗಳನ್ನು ಹಿಡಿದು ಘೋಷಣೆಗಳನ್ನು ಕೂಗಿ ಅತಿಥಿ ಉಪನ್ಯಾಸಕರ ನೇಮಕಕ್ಕಾಗಿ ಒತ್ತಾಯಿಸಿದರು.

ಎಐಡಿಎಸ್ಒ ಜಿಲ್ಲಾ ಘಟಕದ ಅಧ್ಯಕ್ಷ ಹಯ್ಯಳಪ್ಪ ಮಾತನಾಡಿ, ‘ಸರ್ಕಾರಿ ಪದವಿ ಕಾಲೇಜುಗಳಲ್ಲಿ ಈವರೆಗೆ ಒಂದೂ ತರಗತಿಯೂ ನಡೆದಿಲ್ಲ. ಖಾಸಗಿ ಪದವಿ ಕಾಲೇಜುಗಳು ಎರಡು ಘಟಕ ಪರೀಕ್ಷೆಗಳನ್ನು ಮುಗಿಸಿ, ಸೆಮಿಸ್ಟರ್ ಪರೀಕ್ಷೆಯ ತಯಾರಿಯಲ್ಲಿವೆ. ಇದರಿಂದಾಗಿ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಿಂದುಳಿಯುವಂತಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಎಐಡಿಎಸ್ಒ ರಾಜ್ಯ ಕಾರ್ಯಕಾರಿ ಸದಸ್ಯ ಕಲ್ಯಾಣಕುಮಾರ ಮಾತನಾಡಿ, ‘ಹೋರಾಟದ ಮುಂದಿನ ನಡೆಯಾಗಿ ತರಗತಿ ನಡೆಸದೆ ಪರೀಕ್ಷೆ ಬೇಡ ಎಂಬ ಘೋಷ ವಾಕ್ಯದೊಂದಿಗೆ ರಾಜ್ಯದಾದ್ಯಂತ ಸಂಘರ್ಷ ನಡೆಸಲು ವಿದ್ಯಾರ್ಥಿಗಳು ತರಗತಿ ಬಹಿಷ್ಕಾರದ ಸಂದರ್ಭದಲ್ಲಿ ತೀರ್ಮಾನಿಸಿದ್ದಾರೆ’ ಎಂದು ತಿಳಿಸಿದರು.

‘ಅತಿಥಿ ಉಪನ್ಯಾಸಕರಿಲ್ಲದೆ ಒಂದೂ ತರಗತಿ ನಡೆಯದಿದ್ದರೂ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿ ಮತ್ತು ಪರೀಕ್ಷಾ ಶುಲ್ಕದ ಸುತ್ತೋಲೆ ಹೊರಡಿಸಿರುವ ವಿವಿಗಳ ಧೋರಣೆ ಖಂಡನೀಯ. ಸರ್ಕಾರಿ ವಿವಿಗಳು ಖಾಸಗಿ ಪದವಿ ಕಾಲೇಜುಗಳಿಗೆ ಮಾತ್ರವೇ ಇರುವುದೇ ಎಂಬ ಪ್ರಶ್ನೆ ಮೂಡುತ್ತದೆ. ಆದ್ದರಿಂದ ನಮ್ಮ ಹೋರಾಟ ಮುಂದುವರಿಯುತ್ತದೆ’ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಎಐಡಿಎಸ್ಒ ಜಿಲ್ಲಾ  ಕಾರ್ಯದರ್ಶಿ ಬಸವರಾಜ, ಪ್ರಶಾಂತ, ಜಯಶ್ರೀ, ನಂದಗೋಪಾಲ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.