
ಮಸ್ಕಿ: ಟೆಂಡರ್ ಪಡೆದು ಕಾಮಗಾರಿ ಆರಂಭಿಸದ ಗುತ್ತಿಗೆದಾರರನ್ನು ಯಾವುದೇ ಮುಲಾಜಿಲ್ಲದೇ ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಎಚ್ಚರಿಸಿದರು.
ತಾಲ್ಲೂಕಿನ ಬಳಗಾನೂರು ಪಟ್ಟಣದಲ್ಲಿ ಭಾನುವಾರ ಏತ ನೀರಾವರಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಸಣ್ಣ ನೀರಾವರಿ ಯೋಜನೆಗಳಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ರಾಜ್ಯಾದ್ಯಂತ 8 ಸಾವಿರಕ್ಕೂ ಹೆಚ್ಚು ಚೆಕ್ ಡ್ಯಾಂಗಳ ನಿರ್ಮಾಣ ಕೈಗೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಈ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ ಎಂದರು.
ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸೇರಿದಂತೆ ವಿವಿಧ ಕಾಮಗಾರಿಗಳಲ್ಲಿ ಗುಣಮಟ್ಟದ ಕೆಲಸ ಕಡ್ಡಾಯ. ಅಧಿಕಾರಿಗಳು ಹೊಂದಾಣಿಕೆ ಮಾಡಿಕೊಂಡು ಕಳಪೆ ಕೆಲಸಕ್ಕೆ ಅವಕಾಶ ನೀಡಬಾರದು ಎಂದು ಸಚಿವರು ತಾಕೀತು ಮಾಡಿದರು.
ರಾಜ್ಯದಲ್ಲಿ 13 ಸಾವಿರ ರೈತರ ಜಮೀನಿಗೆ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಯೋಜನೆ ಅಡಿಯಲ್ಲಿ ಬೋರ್‌ವೆಲ್ ಮೂಲಕ ನೀರಿನ ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದೆ. ₹ 1500 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶೀಘ್ರವೇ ಮುಖ್ಯಮಂತ್ರಿಗಳು ರಾಯಚೂರಿನಲ್ಲಿ ಚಾಲನೆ ನೀಡಲಿದ್ದಾರೆ. ಮುಂದಿನ ಜೂನ್ ವೇಳೆಗೆ ತುಂಗಭದ್ರಾ ಜಲಾಶಯದ ಗೇಟ್‌ಗಳ ಅಳವಡಿಕೆ ಪೂರ್ಣಗೊಳ್ಳಲಿದ್ದು, ರೈತರು ಆತಂಕಪಡಬೇಕಾಗಿಲ್ಲ ಎಂದು ಭರವಸೆ ನೀಡಿದರು.
₹ 5 ಕೋಟಿ ವೆಚ್ಚದಲ್ಲಿ ತಾಲ್ಲೂಕಿನ ಮಟ್ಟೂರಲ್ಲಿ ಬ್ರಿಡ್ಜ್–ಬ್ಯಾರೇಜ್‌ಗೆ ಹಾಗೂ ಕಡದರಾಳ ಗ್ರಾಮದಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಚಿವರು ಚಾಲನೆ ನೀಡಿದರು. ಸಂಸದ ರಾಜಶೇಖರ ಹಿಟ್ನಾಳ, ಶಾಸಕ ಆರ್. ಬಸನಗೌಡ ತುರ್ವಿಹಾಳ ಸೇರಿದಂತೆ ಅನೇಕ ಮುಖಂಡರು, ಅಧಿಕಾರಿಗಳು ಇದ್ದರು.
ಕೊನೆ ಕ್ಷಣದಲ್ಲಿ ಸಂಸದ ಹಿಟ್ನಾಳ ಭಾಗಿ ಮಸ್ಕಿಯಲ್ಲಿ ಸಚಿವರಿಗೆ ಅದ್ದೂರಿ ಸ್ವಾಗತ
ನಿರುದ್ಯೋಗದಿಂದ ಬಳಲುತ್ತಿರುವ ವಿರೋಧ ಪಕ್ಷಗಳು ಸತ್ಯಾಂಶಗಳಿಲ್ಲದೆ ಸರ್ಕಾರವನ್ನು ಟೀಕಿಸುತ್ತಿವೆ. ಮುಂದಿನ ಚುನಾವಣೆಯಲ್ಲಿ ಜನರೇ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ
- ಎನ್.ಎಸ್. ಬೋಸರಾಜು ಸಣ್ಣ ನೀರಾವರಿ ಸಚಿವ
‘5(ಎ) ಉಪ ಕಾಲುವೆ: ತಿಂಗಳಾಂತ್ಯದಲ್ಲಿ ಟೆಂಡರ್’ ಮಸ್ಕಿ: ನಾರಾಯಣಪೂರ ಬಲದಂಡೆಯ 5(ಎ) ಉಪ ಕಾಲುವೆ ನಿರ್ಮಾಣಕ್ಕೆ ಸರ್ಕಾರ ಸಾವಿರ ಕೋಟಿ ಅನುದಾನ ನೀಡಿದ್ದು ಈ ತಿಂಗಳಾಂತ್ಯದಲ್ಲಿ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಶಾಸಕ ಹಾಗೂ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಹೇಳಿದರು. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕ್ಷೇತ್ರದ ಅಭಿವೃದ್ಧಿಯಾಗಿಲ್ಲ. ನಾನು ಶಾಸಕನಾದ ಮೇಲೆ ಅಭಿವೃದ್ದಿ ವೇಗ ಪಡೆದುಕೊಂಡಿದೆ. ಬರುವ ದಿನಗಳಲ್ಲಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಿ ಮತದಾರರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದರು. ಸಚಿವ ಎನ್.ಎಸ್. ಬೋಸರಾಜ ಅವರು ಪಕ್ಷಾತೀತವಾಗಿ ಎಲ್ಲಾ ಕ್ಷೇತ್ರಗಳಿಗೆ ಅನುದಾನ ನೀಡುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.