ADVERTISEMENT

ಮಾನ್ವಿ: ಬೆಳೆಹಾನಿ ಪರಿಹಾರ ವಿತರಣೆಗೆ ಒತ್ತಾಯ

ರೈತ ಸಂಘದ ಕಾರ್ಯಕರ್ತರಿಂದ ಧರಣಿ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2025, 6:06 IST
Last Updated 9 ಅಕ್ಟೋಬರ್ 2025, 6:06 IST
ಮಾನ್ವಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಧರಣಿ ನಡೆಸಿದರು
ಮಾನ್ವಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಧರಣಿ ನಡೆಸಿದರು   

ಮಾನ್ವಿ: ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳಿಗೆ ಪರಿಹಾರ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಕಾರ್ಯಕರ್ತರು ಬುಧವಾರ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು.

‘ಮಾನ್ವಿ ಮತ್ತು ಸಿರವಾರ ತಾಲ್ಲೂಕುಗಳಲ್ಲಿ ಅತಿವೃಷ್ಟಿಯಿಂದ ರೈತರ ವಿವಿಧ ಬೆಳೆಗಳಿಗೆ ಹಾನಿಯಾಗಿ ಹೆಚ್ಚಿನ ನಷ್ಟ ಉಂಟಾಗಿದ್ದು, ಕೂಡಲೇ ರಾಜ್ಯ ಸರ್ಕಾರ ಎಕರೆಗೆ ₹25 ಸಾವಿರ ಬೆಳೆ ನಷ್ಟ ಪರಿಹಾರ ನೀಡಬೇಕು. ಸಂಗಾಪುರ ಗ್ರಾಮದಲ್ಲಿ ವಾರಸುದಾರರ ಭೂಮಿಯನ್ನು ಅಕ್ರಮವಾಗಿ ಉಳುಮೆ ಮಾಡುತ್ತಿರುವ ವ್ಯಕ್ತಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಎಪಿಎಂಸಿ ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು’ ಎಂದು ಧರಣಿನಿರತರು ಆಗ್ರಹಿಸಿದರು.

‘ನಕಲಿ ಕ್ಲಿನಿಕ್‌ಗಳ ಮೂಲಕ ಚಿಕಿತ್ಸೆ ನೀಡುತ್ತಿರುವ ನಕಲಿ ವೈದ್ಯರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಅಧಿಕಾರಿಗಳಾದ ನಟರಾಜ ಮತ್ತು ಮಹಾಲಿಂಗಪ್ಪ ಇಂಗಳದಾಳ ಅವರನ್ನು ತನಿಖೆಗೆ ಒಳಪಡಿಸಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಕೆ.ವೈ.ಬಸವರಾಜ ನಾಯಕ, ತಾಲ್ಲೂಕು ಘಟಕದ ಅಧ್ಯಕ್ಷ ಹೊಳೆಪ್ಪ ಉಟಕನೂರು,ಇತರ ಪದಾಧಿಕಾರಿಗಳಾದ ವೀರೇಶ ನಾಯಕ ಕೊಟ್ನೆಕಲ್, ರವಿಕುಮಾರ, ಚಂದ್ರು ಜಗ್ಲಿ, ಶ್ರೀಧರ, ಶಿವಪ್ಪ ಹರಿಜನ, ಬಸವಲಿಂಗಪ್ಪ, ರವಿಕುಮಾರ, ಹನುಮಂತರಾಯ, ನಾಗರಾಜ, ಸುರೇಶ ಮತ್ತು ಇತರರು ಧರಣಿಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.