ADVERTISEMENT

ರಾಯಚೂರು: ಸಾಲದ ಅರ್ಜಿ ಅಪ್‌ಲೋಡ್‌ಗೆ ಡಿಸಿ ಆರ್. ವೆಂಕಟೇಶಕುಮಾರ್ ಸೂಚನೆ

ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2020, 13:51 IST
Last Updated 28 ಆಗಸ್ಟ್ 2020, 13:51 IST
ರಾಯಚೂರು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಮತ್ತು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಗಳು ನಡೆದವು
ರಾಯಚೂರು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಮತ್ತು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಗಳು ನಡೆದವು   

ರಾಯಚೂರು: ಸರ್ಕಾರದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಸಫಾಯಿ ಕರ್ಮಚಾರಿಗಳು ಸಲ್ಲಿಸಿರುವ ಅರ್ಜಿಗಳನ್ನು ಒಂದೇ ದಿನದಲ್ಲಿ ಅಪ್‌ಲೋಡ್‌ ಮಾಡುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ಅವರು ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಿಗೆ ತಾಕೀತು ಮಾಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮೀಣ ಪ್ರದೇಶಗಳಲ್ಲಿರುವ ಸಫಾಯಿ ಕರ್ಮಚಾರಿಗಳು ಸ್ವಯಂ ಉದ್ಯೋಗ ಸೇರಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿರುವುದನ್ನು ನಿರ್ಲಕ್ಷ್ಯ ಮಾಡಬಾರದು. ತಂತ್ರಾಂಶದಲ್ಲಿ ನಮೋದಿಸಬೇಕು. ಸಫಾಯಿ ಕರ್ಮಚಾರಿಗಳು ತಮ್ಮ ವೃತ್ತಿಯನ್ನು ಕೈಬಿಟ್ಟು ಸಮಾಜದಲ್ಲಿ ಗೌರವಯುತ ಜೀವನ ನಡೆಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸ್ವಯಂ ಉದ್ಯೋಗಕ್ಕಾಗಿ ₹25 ಲಕ್ಷ ವರೆಗೆ ಸಾಲ ನೀಡಲಾಗುತ್ತದೆ ಎಂದರು.

ADVERTISEMENT

ರುದ್ರಭೂಮಿ ನಿರ್ಮಾಣ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದವವರು ಅತಿಹೆಚ್ಚು ವಾಸವಿರುವ ಗ್ರಾಮಗಳಲ್ಲಿ ಸ್ಮಶಾನ ಭೂಮಿಯನ್ನು ಆದ್ಯತೆಯ ಮೇರೆಗೆ ನಿರ್ಮಿಸಿ ಕೊಡಬೇಕು, ಅದಕ್ಕಾಗಿ ಸರ್ಕಾರಿ ಜಾಗವನ್ನು ಗುರುತಿಸಿ, ಅದು ಲಭ್ಯವಿಲ್ಲದಿದ್ದರೆ ಖಾಸಗಿಯವರಿಂದ ಖರೀದಿಲು ಸಂಬಂಧಿಸಿದ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದವರು ಅತಿಹೆಚ್ಚು ವಾಸವಿರುವ ಗ್ರಾಮಗಳಲ್ಲಿ ಸ್ಮಶಾನವನ್ನು ನಿರ್ಮಿಸಿಕೊಡಬೇಕು, ರುದ್ರಭೂಮಿ ನಿರ್ಮಿಸಿ ಅದರ ಸುತ್ತಮುತ್ತಲೂ ಬೇಲಿ ಹಾಕಿ ಹದ್ದು ಬಸ್ತಿನಲ್ಲಿಡಬೇಕು, ಕುಡಿಯುವ ನೀರಿನ ವ್ಯವಸ್ಥೆ, ಶೆಡ್ ನಿರ್ಮಾಣ ಮಾಡಿಕೊಡಬೇಕು, ಉದ್ಯೋಗ ಖಾತ್ರಿ ಯೋಜನೆಯಡಿ ಹಲವು ಸೌಲಭ್ಯಗಳನ್ನು ಒದಗಿಸಲು ಅನುದಾನ ಬಳಸಿಕೊಳ್ಳುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನರ ಮೇಲೆ ದಾಖಲಾದ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ 65ರ ಪೈಕಿ 55 ಪ್ರಕರಣಗಳಿಗೆ ಪರಿಹಾರ ಧನ ವಿತರಿಸಲಾಗಿದೆ. ದೌರ್ಜನ್ಯ ಪ್ರಕರಣಗಳಲ್ಲಿ ಮೃತಪಟ್ಟ ಮೂರು ಪ್ರಕರಣಗಳಲ್ಲಿ ಕೂಡಲೇ ಪರಿಹಾರ ನೀಡುವಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ, ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ, ಸಹಾಯಕ ಆಯುಕ್ತರಾದ ಸಂತೋಷ ಕಾಮಗೌಡ, ರಾಜಶೇಖರ್ ಡಂಬಳ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.