ADVERTISEMENT

ಎಚ್ಚರಿಕೆಯಿಂದ ಕಾರ್ಯನಿರ್ವಹಿಸಲು ನಿರ್ದೇಶನ

ಜಿಲ್ಲಾ ಮಟ್ಟದಲ್ಲಿ ರಚಿತವಾಗಿರುವ ಹಲವು ಸಮಿತಿ ಸದಸ್ಯರಿಗೆ ತರಬೇತಿ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2020, 13:59 IST
Last Updated 9 ಏಪ್ರಿಲ್ 2020, 13:59 IST
ರಾಯಚೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್‌–19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಜಿಲ್ಲಾ ಮಟ್ಟದಲ್ಲಿ ರಚಿತವಾಗಿರುವ ಹಲವು ಸಮಿತಿ ಸದಸ್ಯರಿಗೆ ಗುರುವಾರ ಹಮ್ಮಿಕೊಂಡಿದ್ದ ತರಬೇತಿಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ ಉದ್ಘಾಟಿಸಿದರು
ರಾಯಚೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್‌–19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಜಿಲ್ಲಾ ಮಟ್ಟದಲ್ಲಿ ರಚಿತವಾಗಿರುವ ಹಲವು ಸಮಿತಿ ಸದಸ್ಯರಿಗೆ ಗುರುವಾರ ಹಮ್ಮಿಕೊಂಡಿದ್ದ ತರಬೇತಿಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ ಉದ್ಘಾಟಿಸಿದರು   

ರಾಯಚೂರು: ಮಹಾಮಾರಿ ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ವಿವಿಧ ಸಮಿತಿಗಳ ಸದಸ್ಯರು ಮತ್ತು ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ್ ಅವರು ನಿರ್ದೇಶನ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್‌–19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಜಿಲ್ಲಾ ಮಟ್ಟದಲ್ಲಿ ರಚಿತವಾಗಿರುವ ಹಲವು ಸಮಿತಿ ಸದಸ್ಯರಿಗೆ ಗುರುವಾರ ಹಮ್ಮಿಕೊಂಡಿದ್ದ ತರಬೇತಿ ಉದ್ಘಾಟಿಸಿ ಮಾತನಾಡಿದರು.

ವಿವಿಧ ಇಲಾಖೆಯ ಅಧಿಕಾರಿಗಳು ಒಗ್ಗಟ್ಟು ಮತ್ತು ಪ್ರಾಮಾಣಿಕವಾಗಿ ತಮಗೆ ವಹಿಸಿರುವ ಕೆಲಸವನ್ನು ಜವಬ್ದಾರಿಯುತವಾಗಿ ನಿರ್ವಹಿಸಿದ್ದಾರೆ. ಅದೃಷ್ಟವಶಾತ್ ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಪಾಸಿಟಿವ್ ಪ್ರಕರಣಗಳು ಕಂಡುಬಂದಿಲ್ಲ. ರಾಜ್ಯ ಸರ್ಕಾರ ಮತ್ತು ಜಿಲ್ಲಾಧಿಕಾರಿ ನಿರ್ದೇಶವನ್ನು ಅಧಿಕಾರಿಗಳು ಚಾಚು ತಪ್ಪದೇ ಪಾಲಿಸಿದ್ದಾರೆ. ಈ ಕಾರಣ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ಜನರಲ್ಲಿ ಜಾಗೃತಿ ಮೂಡಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ADVERTISEMENT

ದೇಶದಲ್ಲಿ ಪ್ರತಿನಿತ್ಯ ಕೋರೊನಾ ವೈರಸ್‌ಗೆ ಬಲಿಯಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಜನರಲ್ಲಿ ಆತಂಕ ಮನೆಮಾಡಿದೆ. ಜಿಲ್ಲೆಯು ಆಂಧ್ರಪ್ರದೇಶ ಮತ್ತು ತೆಲಂಗಾಣದ ಗಡಿಭಾಗಕ್ಕೆ ಹೊಂದಿಕೊಂಡಿರುವ ಕಾರಣ ಈಗಾಗಲೇ ಆಯಾ ರಾಜ್ಯಗಳ ವ್ಯಾಪ್ತಿಯಲ್ಲಿ ಬರುವ ಗದ್ವಾಲ್, ಕರ್ನೂಲ್‌, ನಾರಾಯಣಪೇಟ್, ಮಹೆಬೂಬ್ ನಗರ ಜಿಲ್ಲೆಗಳಲ್ಲಿ ಸೋಂಕು ಹರಡಿರುವ ಕಾರಣ ಈ ಜಿಲ್ಲೆಗಳಿಂದ ಜಿಲ್ಲೆಯ ಒಳಗೆ ಮತ್ತು ಹೊರಗಡೆ ಯಾರು ಹೋಗುವುದನ್ನು ತಡೆಯಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಕೊರೊನಾ ಸಂಬಂಧಿಸಿ 18 ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಈ ಸಮಿತಿಗಳ ಸದಸ್ಯರು ಜನರಲ್ಲಿ ರೋಗದ ಬಗ್ಗೆ ಜಾಗೃತಿ ಮೂಡಿಸಿ ಮನೆಯಿಂದ ಹೊರಬಾರದಂತೆ ತಡೆಯುವ ಕೆಲಸ ಮಾಡುತ್ತಿದ್ದಾರೆ. ಲಾಕ್‌ಡೌನ್ ಹಿನ್ನೆಲೆ ಜನರಿಗೆ ಅಗತ್ಯ ವಸ್ತುಗಳು ಸಕಾಲಕ್ಕೆ ದೊರೆಯಲು ಅವಕಾಶ ಮಾಡಿಕೊಡಲಾಗಿದೆ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಎಚ್ಚರಿಕೆಯಿಂದ ಅಧಿಕಾರ ವರ್ಗ ಕಾರ್ಯನಿರ್ವಹಿಸಿ ಸೋಂಕು ಮುಕ್ತ ಜಿಲ್ಲೆಯನ್ನಾಗಿಸಬೇಕು ಎಂದು ಕರೆ ನೀಡಿದರು.

ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಸುರೇಂದ್ರ ಬಾಬು ಮಾತನಾಡಿ, ಪ್ರತಿಯೊಬ್ಬರೂ ಎಚ್ಚರಿಕೆಯಿಂದ ತಮ್ಮ ದೈನಂದಿನ ಕೆಲಸ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹರೀಶ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಹ್ಮದ್ ಯುಸೂಫ್, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ತಹಸೀಲ್ದಾರ್ ಡಾ. ಹಂಪಣ್ಣ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ, ಜಿಲ್ಲಾ ಪಂಚಾಯಿತಿ ಪಿ.ಡಿ. ಶರಣಬಸವ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.