ADVERTISEMENT

ವಿಮಾನ ನಿಲ್ದಾಣಕ್ಕೆ ಡಿಪಿಆರ್ ಸಿದ್ಧಪಡಿಸಿ: ಲಕ್ಷ್ಮಣ ಸವದಿ ಸೂಚನೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 15:51 IST
Last Updated 17 ಸೆಪ್ಟೆಂಬರ್ 2020, 15:51 IST
ರಾಯಚೂರಿನ ಯರಮರಸ್‌ ಬಳಿ ವಿಮಾನ ನಿಲ್ದಾಣಕ್ಕೆ ಕಾಯ್ದಿರಿಸಿದ ಜಾಗಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಗುರುವಾರ ಭೇಟಿ ನೀಡಿದರು
ರಾಯಚೂರಿನ ಯರಮರಸ್‌ ಬಳಿ ವಿಮಾನ ನಿಲ್ದಾಣಕ್ಕೆ ಕಾಯ್ದಿರಿಸಿದ ಜಾಗಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಗುರುವಾರ ಭೇಟಿ ನೀಡಿದರು   

ರಾಯಚೂರು: ನಗರದ ಯರಮರಸ್ ಸರ್ಕಿಟ್‌ ಹೌಸ್ ಹತ್ತಿರದಲ್ಲಿ ವಿಮಾನ ನಿಲ್ದಾಣಕ್ಕೆಂದು ಈ ಹಿಂದೆಯೇ ಮೀಸಲಾಗಿಟ್ಟಿದ್ದ 422 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ವಿಸ್ತೃತ ಯೋಜನೆಯನ್ನು ಸಿದ್ದಪಡಿಸಬೇಕು, ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಉಪಮುಖ್ಯಮಂತ್ರಿ ಸಚಿವ ಲಕ್ಷ್ಮಣ ಸವದಿ ಆರ್.ವೆಂಕಟೇಶ ಕುಮಾರ್ ಸೂಚಿಸಿದರು.

ನಗರದ ಯರಮರಸ್‌ ಹತ್ತಿರದಲ್ಲಿರುವ ವಿಮಾನ ನಿಲ್ದಾಣದ ಸ್ಥಳವನ್ನು ಪರಿಶೀಲಿಸಿದ ಬಳಿಕ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ವಿಮಾನನಿಲ್ದಾಣ ನಿರ್ಮಾಣಕ್ಕೆ ₹200 ಕೋಟಿ ಅಗತ್ಯವಿದೆ, ಈಗಾಗಲೇ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯಿಂದ ₹40 ಕೋಟಿಗಳಿಗೂ ಹೆಚ್ಚಿನ ಅನುದಾನವನ್ನು ಜಿಲ್ಲೆಯ ಶಾಸಕರು ನೀಡುತ್ತಿದ್ದಾರೆ, ಉಳಿದ ಅನುದಾನವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಭರಿಸಲು ಕ್ರಮಕೈಗೊಳ್ಳಲಾಗುವುದು, ಈ ದಿಸೆಯಲ್ಲಿ ಜಿಲ್ಲಾಧಿಕಾರಿಯವರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪೂರಕ ಸಿದ್ದತೆಗಳನ್ನು ಆರಂಭಿಸಬೇಕು, ಡಿಸಿ ಖಾತೆಯಲ್ಲಿ ಇರುವ ಅನುದಾನದಲ್ಲಿಯೇ ಮೊದಲಿಗೆ ಕಾಮಗಾರಿ ಪ್ರಾರಂಭಿಸುವಂತೆ ತಿಳಿಸಿದರು.

ADVERTISEMENT

ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ರಾಯಚೂರು ವಿಮಾನ ನಿಲ್ದಾಣ ನಿರ್ಮಾಣ, ಎದುರಾಗುತ್ತಿರುವ ತಾಂತ್ರಿಕ
ಸಮಸ್ಯೆಗಳು, ಅನುದಾನ ಬಿಡುಗಡೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿ ಜಿಲ್ಲೆಯ ಅಭಿವೃದ್ದಿ ಶಕೆಯಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.

ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ಮಾತನಾಡಿ, ಯರಮರಸ್ ಬಳಿ ವಿಮಾನ ನಿಲ್ದಾಣಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ ಇಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗಾಗಿ ಸ್ಥಳ ಪರಿಶೀಲಿಸಲು ಆಗಮಿಸಿದ್ದ ಕೇಂದ್ರದ ಏರ್ ಟ್ರಾಫಿಕ್ ಅಧಿಕಾರಿಗಳು, ವಿಮಾನ ನಿಲ್ದಾಣ ನಿರ್ಮಾಣಕ್ಕೆ ವೈಟಿಪಿಎಸ್ ಚಿಮಣಿಗಳು ಅಡ್ಡಿ ಪಡಿಸಲಿವೆ, ಮುಖ್ಯವಾಗಿ ಎರಡು ಟವರ್‌ಗಳು ಅಡ್ಡಬರುತ್ತಿವೆ, ಅದರಿಂದ ಸಮಸ್ಯೆ ಆಗಲಿದೆ ಎಂದು ತಿಳಿಸಿದರು.

ಸಮಸ್ಯೆ ಏನೆ ಬರಲಿ, ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ತಿರ್ಮಾನ ತೆಗೆದುಕೊಳ್ಳಲಾಗುತ್ತದೆ. ಮೊದಲಿಗೆ ಜಿಲ್ಲಾಡಳಿತದಲ್ಲಿರುವ ಅನುದಾನದಲ್ಲಿ ಕಾಮಗಾರಿ ಆರಂಭಿಸುವಂತೆ ಸಚಿವರು ಜಿಲ್ಲಾಧಿಕಾರಿಗೆ ಸೂಚಿಸಿದರು.

ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಶಿವರಾಜ್ ಪಾಟೀಲ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಶಿವನಗೌಡ ನಾಯಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೈ.ಗೋಪಾಲ ರೆಡ್ಡಿ, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ, ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ್, ಸಹಾಯಕ ಆಯುಕ್ತ ಸಂತೋಷ್ ಕಾಮಗೌಡ, ತಹಶೀಲ್ದಾರ್ ಡಾ. ಹಂಪಣ್ಣ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.