ಮಸ್ಕಿ: ಭೋವಿ (ವಡ್ಡರ್) ಗುರುಪೀಠದ ಸ್ವಾಮೀಜಿಗಳ ಪಟ್ಟಾಧಿಕಾರದ ರಜತಮಹೋತ್ಸವವು ಜು.20 ರಂದು ಚಿತ್ರದುರ್ಗದಲ್ಲಿ ನಡೆಯಲಿದೆ ಎಂದು ಭೋವಿ (ವಡ್ಡರ್) ಯುವಕ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವಿಕುಮಾರ ಚಿಗರಿ ತಿಳಿಸಿದ್ದಾರೆ.
ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಚಿವ ಶಿವರಾಜ ತಂಗಡಗಿ, ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಸಮಾಜದ ಮುಖಂಡರ ನೇತೃತ್ವದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದ್ದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಕೇಂದ್ರದ ಹಾಗೂ ರಾಜ್ಯದ ಸಚಿವರು, ವಿವಿಧ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ಐದು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ರಾಯಚೂರು ಜಿಲ್ಲೆಯಿಂದ ಹತ್ತು ಸಾವಿರ ಸಮಾಜದ ಜನರು ಪಾಲ್ಗೊಳ್ಳಲಿದ್ದಾರೆ. ಮಸ್ಕಿ ತಾಲ್ಲೂಕಿನಿಂದಲೇ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದರು.
ಭೋವಿ ಅಭಿವೃದ್ಧಿ ನಿಗಮಕ್ಕೆ ₹500 ಕೋಟಿ ಅನುದಾನ, ನಿಗಮಕ್ಕೆ ನಾಮನಿರ್ಧೇಶನ ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಲಾಗುವುದು. ಸಮಾಜಕ್ಕೆ ಕೊಡುಗೆ ನೀಡಿದವರನ್ನು ಸತ್ಕರಿಸಲಾಗುವುದು ಎಂದು ತಿಳಿಸಿದರು.
ಮುಖಂಡ ಶಿವರಾಜ ಬುಕ್ಕಣ್ಣ, ಪುರಸಭೆ ಸದಸ್ಯ ರಮೇಶ ಗುಡಿಸಲಿ, ಆಂಜನೇಯ ಆನೆಹೊಸೂರು, ಗ್ಯಾನಪ್ಪ, ಅಮರೇಶ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.