ADVERTISEMENT

ಮಾನ್ವಿ: ಶಾಲೆಗಳಿಗೆ ರಂಗು ತುಂಬಿದ ನರೇಗಾ

ಮಾನ್ವಿ: ಕಾಂಪೌಂಡ್, ಭೋಜನಾಲಯ, ಅಡುಗೆ ಕೋಣೆ, ಆಟದ ಮೈದಾನ ನಿರ್ಮಾಣ

ಬಸವರಾಜ ಬೋಗಾವತಿ
Published 15 ಜುಲೈ 2022, 19:30 IST
Last Updated 15 ಜುಲೈ 2022, 19:30 IST
ಮಾನ್ವಿ ತಾಲ್ಲೂಕಿನ ಚೀಕಲಪರ್ವಿ ಗ್ರಾಮದ ಸರ್ಕಾರಿ ಶಾಲೆಗೆ ನರೇಗಾ ಯೋಜನೆಯಡಿ ಕಾಂಪೌಂಡ್ ನಿರ್ಮಿಸಿರುವುದು
ಮಾನ್ವಿ ತಾಲ್ಲೂಕಿನ ಚೀಕಲಪರ್ವಿ ಗ್ರಾಮದ ಸರ್ಕಾರಿ ಶಾಲೆಗೆ ನರೇಗಾ ಯೋಜನೆಯಡಿ ಕಾಂಪೌಂಡ್ ನಿರ್ಮಿಸಿರುವುದು   

ಮಾನ್ವಿ: ತಾಲ್ಲೂಕಿನ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿಗಳು ಕೈಜೋಡಿಸಿರುವುದು ಸ್ಥಳೀಯರ ಸಂತಸಕ್ಕೆ ಕಾರಣವಾಗಿದೆ.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆ ಅಡಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಅಡುಗೆ ಕೋಣೆ, ಭೋಜನಾಲಯ, ಕಾಂಪೌಂಡ್ ಗೋಡೆ, ಶೌಚಾಲಯ, ಆಟದ ಮೈದಾನಗಳ ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವುದು ಗಮನಾರ್ಹ ಸಂಗತಿಯಾಗಿದೆ.

ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡುವುದರ ಜತೆಗೆ ಶಾಲೆಗಳನ್ನು ಅಭಿವೃದ್ಧಿಗೊಳಿಸುವ ಮೂಲಕ ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಮುಂದಾಗಿರುವ ಅಧಿಕಾರಿಗಳ ಕಾರ್ಯವೈಖರಿ ಪ್ರಶಂಸೆಗೆ ಕಾರಣವಾಗಿದೆ.

ADVERTISEMENT

ಚೀಕಲಪರ್ವಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನರೇಗಾ ಯೋಜನೆ ಅಡಿಯಲ್ಲಿ ಆಕರ್ಷಕ ಕಾಂಪೌಂಡ್ ಗೋಡೆ ನಿರ್ಮಿಸಲಾಗಿದೆ. ₹24 ಲಕ್ಷ ವೆಚ್ಚದಲ್ಲಿ ಶಾಲಾ ಕಾಂಪೌಂಡ್ ನಿರ್ಮಿಸಲಾಗಿದ್ದು, 180 ಜನ ಕೂಲಿಕಾರ್ಮಿಕರಿಗೆ ಸತತ 7 ದಿನ ಕೆಲಸ ನೀಡಲಾಗಿದೆ.

2020-21ನೇ ಸಾಲಿನಲ್ಲಿ ತಾಲ್ಲೂಕಿನ 17 ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲಿ 52 ಅಡುಗೆ ಕೋಣೆ ನಿರ್ಮಿಸಲಾಗಿದ್ದು, 08 ಕಾಮಗಾರಿಗಳು ಪ್ರಗತಿಯಲ್ಲಿವೆ. ಮದ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂರು ಶಾಲೆಗಳಿಗೆ ಕಾಂಪೌಂಡ್ ಗೋಡೆಗಳನ್ನು ನಿರ್ಮಿಸಿದ್ದು, ಬ್ಯಾಗವಾಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎರಡು ಶಾಲಾ ಕಾಂಪೌಂಡ್ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ.

2021-22 ನೇ ಸಾಲಿನಲ್ಲಿ 18 ಶಾಲೆಗಳಲ್ಲಿ ಭೋಜನಾಲಯಗಳ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, 8 ಕಾಮಗಾರಿಗಳು ಪೂರ್ಣಗೊಂಡಿವೆ. ಇನ್ನೂ 6 ಕಾಮಗಾರಿಗಳು ಪ್ರಗತಿಯಲ್ಲಿವೆ. ಇನ್ನೂ 4 ಕಾಮಗಾರಿಗಳು ಆರಂಭವಾಗಬೇಕಿದೆ. 14 ಶಾಲೆಗಳಲ್ಲಿ ಶೌಚಾಲಯಗಳ ವ್ಯವಸ್ಥೆ, 10 ಶಾಲೆಗಳಲ್ಲಿ ಆಟದ ಮೈದಾನ ಹಾಗೂ 16 ಶಾಲೆಗಳಲ್ಲಿ ಕಾಂಪೌಂಡ್ ಗೋಡೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ.

**

ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಕಲ್ಪಿಸಲು ನರೇಗಾ ಯೋಜನೆಯಡಿಯಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಆದ್ಯತೆ ನೀಡಲಾಗಿದೆ
ಅಣ್ಣಾರಾವ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ

ನರೇಗಾ ಯೋಜನೆಯಡಿಯಲ್ಲಿ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಂಡಿರುವುದು ಉತ್ತಮ ಕಾರ್ಯ
ಶರಣಕುಮಾರ ಮುದ್ದಂಗುಡ್ಡಿ, ಸಾಮಾಜಿಕ ಕಾರ್ಯಕರ್ತ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.