ADVERTISEMENT

ಕ್ವಾರಂಟೈನ್ ಮಾಡುವಲ್ಲಿ ತಾರತಮ್ಯ

ಮಸ್ಕಿ: ತಾಲ್ಲೂಕು ಆಡಳಿತದ ವಿರುದ್ಧ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 2 ಜೂನ್ 2020, 16:42 IST
Last Updated 2 ಜೂನ್ 2020, 16:42 IST

ಮಸ್ಕಿ: ಕೊರೊನಾ ಸೋಂಕಿತ ಪುರಸಭೆ ಸದಸ್ಯರ (ಪಿ–3074) ಪ್ರಥಮ ಮತ್ತು ದ್ವಿತೀಯ ಸಂಪರ್ಕದಲ್ಲಿ ಇದ್ದವರಲ್ಲಿ ಕೆಲವರನ್ನು ಸರ್ಕಾರಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಿ ಸೋಂಕಿತ ವ್ಯಕ್ತಿಯ ಕುಟುಂಬದವರನ್ನು ಹೋಂ ಕ್ವಾರಂಟೈನ್ ಮಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಸೋಮವಾರ ಕ್ವಾರಂಟೈನ್ ಕೇಂದ್ರಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಜತೆ ಮಾತನಾಡಿದ ಕ್ವಾರಂಟೈನ್‌ಗೆ ಒಳಗಾದ ಯುವಕರು, ಸೋಂಕಿತ ವ್ಯಕ್ತಿಯ ಪ್ರಥಮ ಹಾಗೂ ದ್ವಿತೀಯ ಸಂಪರ್ಕದಲ್ಲಿ 40 ಕ್ಕೂ ಹೆಚ್ಚು ಜನರಿದ್ದಾರೆ. ಆದರೆ, ಎಲ್ಲರನ್ನೂ ಬಿಟ್ಟು ನಮ್ಮನ್ನು ಮಾತ್ರ ಸರ್ಕಾರಿ ಕ್ವಾರಂಟೈನ್ ಮಾಡಲಾಗಿದೆ. ಉಳಿದವರನ್ನು ಹೋಂ ಕ್ವಾರಂಟೈನ್ ಮಾಡುವ ಮೂಲಕ ತಾಲ್ಲೂಕು ಆಡಳಿತ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದರು.

ಬಾಲಕರ ವಸತಿ ಶಾಲೆಯ ಕ್ವಾರಂಟೈನ್‌ ಕೇಂದ್ರಕ್ಕೆ ರಾತ್ರಿ ಕರೆ ತಂದಿದ್ದಾರೆ. ವಿದ್ಯುತ್, ಕುಡಿಯಲು ನೀರು ಇಲ್ಲ. ಇವುಗಳನ್ನು ಕೇಳಿದರೆ ನಮ್ಮ ವಿರುದ್ಧ ಪ್ರಕರಣ ದಾಖಲು ಮಾಡುವುದಾಗಿ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದರು.

ADVERTISEMENT

ಒಂದು ಹಂತದಲ್ಲಿ ಕ್ವಾರಂಟೈನ್‌ಗೆ ಒಳಗಾದ ಯುವಕರು ಹಾಗೂ ತಹಶೀಲ್ದಾರ್ ಬಲರಾಮ ಕಟ್ಟಿಮನಿ ನಡುವೆ ಮಾತಿನ ಚಕಮಕಿ ನಡೆಯಿತು.

ಕೊರೊನಾ ಸೋಂಕಿತ ವ್ಯಕ್ತಿಯ ಮೆಡಿಕಲ್ ಸ್ಟೋರ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗಳು ಪ್ರಥಮ ಸಂಪರ್ಕದಲ್ಲಿದ್ದಾರೆ. ಅವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ದ್ವಿತೀಯ ಸಂರ್ಪಕದಲ್ಲಿದ್ದ ನಮ್ಮನ್ನು ಸರ್ಕಾರಿ ಕ್ವಾರಂಟೈನ್ ಮಾಡಲಾಗಿದೆ ಎಂದು ಯುವಕರು ಆರೋಪಿಸಿದ್ದಾರೆ.

ತಹಶೀಲ್ದಾರ್ ಬಲರಾಮ ಕಟ್ಟಿಮನಿ ಪ್ರತಿಕ್ರಿಯಿಸಿ, ಪಿ– 3074 ವ್ಯಕ್ತಿಯ ಮನೆಯವರನ್ನು ಮತ್ತು ಪ್ರಥಮ ಸಂಪರ್ಕ ಹೊಂದಿದ ಕೆಲವರನ್ನು ಹೋಂ ಕ್ವಾರಂಟೈನ್ ಮಾಡಲು ಸಹಾಯಕ ಆಯುಕ್ತರು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳು ಸೂಚಿಸಿದ್ದರಿಂದ ಅವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.