ADVERTISEMENT

ರಾಯಚೂರು: ತನಿಖಾ ಸಂಸ್ಥೆಗಳ ದುರುಪಯೋಗ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2022, 14:47 IST
Last Updated 17 ಜೂನ್ 2022, 14:47 IST
ರಾಯಚೂರಿನ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ರಾಯಚೂರಿನ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.   

ರಾಯಚೂರು:ಕೇಂದ್ರದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡು ಕೇಂದ್ರ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯ ಸೇರಿ ಇತರೆ ಸಂಸ್ಥೆಗಳ ಸ್ವಾಯತ್ತತೆಗೆ ಧಕ್ಕೆ ತಂದಿದೆ ಹಾಗೂ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಶುಕ್ರವಾರ ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ಆನಂತರ ಹೆಚ್ಚುವರಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಯಾದ ಜಾರಿ ನಿರ್ದೇಶನಾಲಯ ದುರ್ಬಳಕೆ ಮಾಡಿಕೊಂಡು, ಕೃತಕವಾಗಿ ಸೃಷ್ಟಿಸಿದ ವಿಷಯದಲ್ಲಿ ತನಿಖೆಯನ್ನು ಕೈಗೆತ್ತಿಕೊಂಡು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ನೀಡಿ ಕಿರುಕುಳ ನೀಡುತ್ತಿದೆ ಎಂದು ದೂರಿದರು.

ADVERTISEMENT

ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ವಿರೋಧಿ ನೀತಿ ಮತ್ತು ದ್ವೇಷದ ರಾಜಕಾರಣದಿಂದಾಗಿ ಸಮಾಜದಲ್ಲಿ ಸಾಮರಸ್ಯ, ಸ್ವಾಸ್ತ್ಯಕ್ಕೆ ಧಕ್ಕೆ ಉಂಟಾಗಿದೆ. ಸರ್ಕಾರದ ನಿಲುವು ಖಂಡಿಸಿ ದೇಶದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರು ಸಹ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಜಾರಿ ನಿರ್ದೇಶನಾಲಯವು ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸುತ್ತಿರುವುದರ ಹಿಂದೆ ರಾಜಕೀಯ ದುರುದ್ದೇಶ ಅಡಗಿದೆ ಎಂದು ದೂರಿದರು.

ಬೆಲೆ ಏರಿಕೆಯ ಜನಸಾಮಾನ್ಯರು, ಮಧ್ಯಮ ವರ್ಗ ಸಂಕಷ್ಟಕ್ಕೆ ಗುರಿಯಾಗಿದೆ.ದೇಶದ ಆರ್ಥಿಕ ವ್ಯವಸ್ಥೆ ಕುಸಿದಿದೆ ಇಂತಹ ಸನ್ನಿವೇಶದಲ್ಲಿ ಪ್ರಗತಿ ಕುರಿತು ಚಿಂತನೆ ನಡೆಸಬೇಕಾದ ಕೇಂದ್ರ ಸರ್ಕಾರ ದ್ವೇಷದ ರಾಜಕೀಯವನ್ನು ನಡೆಸುತ್ತಿರುವುದು ಖಂಡನೀಯ. ಬಿಜೆಪಿಯ ಇಂತಹ ನೋಟಿಸ್‌, ಇಡಿ ಡ್ರಿಲ್‍ಗಳಿಗೆ ಕಾಂಗ್ರೆಸ್ ಹೆದರುವುದಿಲ್ಲ, ಅನ್ಯಾಯದ ವಿರುದ್ಧ ನಿರಂತರವಾಗಿ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಶಾಸಕ ಬಸನಗೌಡ ದದ್ದಲ್, ಮುಖಂಡರಾದ ಹಂಪಯ್ಯ, ಬಸವರಾಜ ಪಾಟೀಲ ಇಟಗಿ, ಹಂಪನಗೌಡ, ಜಯಣ್ಣ, ಬಸವರಾಜ ರೆಡ್ಡಿ, ಕೆ.ಶಾಂತಪ್ಪ,ರುದ್ರಪ್ಪ ಅಂಗಡಿ, ಅಬ್ದುಲ ಕರೀಂ, ಅಮರೇಗೌಡ ಹಂಚಿನಾಳ,ಪಕ್ಷದ ವಿವಿಧ ಬ್ಲಾಕ್‍ಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯರ್ಕತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.