ADVERTISEMENT

ರಸ್ತೆ ಸುರಕ್ಷತಾ ಕ್ರಮಗಳನ್ನು ಪಾಲನೆ ಮಾಡಿ: ಎಲ್.ಚಂದ್ರಶೇಖರ್‌

ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಡಿಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2022, 15:38 IST
Last Updated 23 ಸೆಪ್ಟೆಂಬರ್ 2022, 15:38 IST
ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ್‌ ನಾಯಕ ಅವರು ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ ಶುಕ್ರವಾರ ನಡೆಸಿದರು.
ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ್‌ ನಾಯಕ ಅವರು ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ ಶುಕ್ರವಾರ ನಡೆಸಿದರು.   

ರಾಯಚೂರು: ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಸುಪ್ರೀಂಕೋರ್ಟ್ ಹಲವು ನಿರ್ದೇಶನಗಳನ್ನು ನೀಡಿದ್ದು, ಅವುಗಳ ಪಾಲನೆಗೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ್‌ ನಾಯಕ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಾದ್ಯಂತ ರಸ್ತೆ ಸುರಕ್ಷತಾ ಕ್ರಮಗಳು ಹಾಗೂ ಸಾರ್ವಜನಿಕ ಮಾಹಿತಿ, ಜಾಗೃತಿ ಚಟುವಟಿಕೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಅನಗತ್ಯ ರಸ್ತೆ ಉಬ್ಬುಗಳನ್ನು ತೆಗೆಯುವುದು, ಅಪಾಯಕಾರಿ ಆಗಿರುವ ಹಾಗೂ ಹೆಚ್ಚು ಅಪಘಾತಗಳು ನಡೆದಿರುವ ಸ್ಥಳಗಳಲ್ಲಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು. ಡ್ರೈನೇಜ್‌ಗಳ ಅಳವಡಿಕೆ ಹಾಗೂ ರಸ್ತೆ ಸುರಕ್ಷತಾ ಕ್ರಮಗಳಿಗೆ ಅಗತ್ಯವಿರುವ ಅನುದಾನದ ಬಗ್ಗೆ ಪ್ರಸ್ತಾವನೆಗಳನ್ನು ಸಲ್ಲಿಸಬೇಕು ಎಂದು ಹೇಳಿದರು.

ADVERTISEMENT

ಸಮಿತಿಯು ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ಹಾಗೂ ಸುಗಮ ಸಂಚಾರದ ನಿಟ್ಟಿನಲ್ಲಿ ಪ್ರತಿ ತಿಂಗಳು ಸಭೆ ನಡೆಸಿ ಅಗತ್ಯವಿರುವ ಕ್ರಮ ಕೈಗೊಳ್ಳಬೇಕು. ಅಲ್ಲದೆ ಜಿಲ್ಲೆಯಲ್ಲಿ ನಡೆಯುವ ಅಪಘಾತಗಳನ್ನು ಪರಾಮರ್ಶಿಸಿ ಇದು ಯಾವ ಕಾರಣದಿಂದ ಅಪಘಾತವಾಗಿದೆ ಎಂಬ ಬಗ್ಗೆ ಎಲ್ಲಾ ಹಂತದಲ್ಲಿ ಅಧ್ಯಯನ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಮಾಹಿತಿ ನೀಡಿ: ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿಯ ಸಭೆಯನ್ನು ಪ್ರತಿ ತಿಂಗಳು ನಡೆಸಿ, ಕೈಗೊಂಡ ನಿರ್ಣಯಗಳ ಬಗ್ಗೆ ಕೇಂದ್ರ ಸರಕಾರದ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ವೆಬ್ ಸೈಟಿನಲ್ಲಿ 48 ಗಂಟೆಯೊಳಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ರಸ್ತೆ ಸುರಕ್ಷತಾ ನಿಯಮಗಳ ಜಾಗೃತಿಯಲ್ಲಿ ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಇತರೆ ಇಲಾಖೆಗಳು ಹೆಚ್ಚಿನ ಜವಾಬ್ದಾರಿ ವಹಿಸಬೇಕು. ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ನೀಡುವ ಪ್ರದರ್ಶನ ಫಲಕಗಳನ್ನು ಹಾಗೂ ಅಗತ್ಯವಿರುವ ಕಡೆಗಳಲ್ಲಿ ಸೂಚನಾ ಫಲಕ, ಅಳವಡಿಸಬೇಕು. ನಿರಂತರ ಅರಿವಿನ ಚಟುವಟಿಕೆಗಳು ನಡೆಯಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ.ಅವರು ಮಾತನಾಡಿ, ಶಾಲಾ ಅವಧಿಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳನ್ನು ಹೆಚ್ಚುವರಿಯಾಗಿ ಓಡಿಸುವ ಬಗ್ಗೆಯೂ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿ ವಿನಯಾ ಕೋಟೇಕರ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಚನ್ನಬಸಪ್ಪ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುರೇಂದ್ರ ಬಾಬು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.