
ರಾಯಚೂರು: ‘ಬಿಜೆಪಿ ನಾಯಕರಿಗೆ ಕರ್ನಾಟಕ ರಾಜ್ಯದ ಬಗ್ಗೆ ಕಾಳಜಿ, ಬದ್ಧತೆ ಇದ್ದರೆ ಕೃಷ್ಣಾ ಮೇಲ್ದಂಡೆ ಯೋಜನೆ, ಮೇಕೆದಾಟು, ಮಹದಾಯಿ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ’ ಎಂದು ಜಲ ಸಂಪನ್ಮೂಲ ಇಲಾಖೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸವಾಲು ಹಾಕಿದರು.
ಬುಧವಾರ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪಂಚಮುಖಿ ಗಾಣದಾಳ ಗ್ರಾಮದಲ್ಲಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
‘ಬಿಜೆಪಿ ನಾಯಕರೇ, ನೀವು ನಿಗದಿ ಮಾಡುವ ಸಮಯಕ್ಕೆ ನಾನು ಬರುತ್ತೇನೆ. ನಾನು ಈಗಾಗಲೇ ಸುಮಾರು 10 ಬಾರಿ ಕೇಂದ್ರ ಸಚಿವರು ಹಾಗೂ ಪ್ರಧಾನಿಗಳ ಮುಂದೆ ಗೋಗರೆದಿದ್ದೇನೆ. ಆದರೂ ಅವರು ಸಹಾಯ ಮಾಡಿಲ್ಲ. ಕೇಂದ್ರ ಬಜೆಟ್‌ನಲ್ಲಿ ಘೋಷಿಸಿದ ₹5,300 ಕೋಟಿಯನ್ನು ಇದುವರೆಗೂ ಕೊಟ್ಟಿಲ್ಲ. ಬಿಜೆಪಿ ಹಾಗೂ ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ’ ಎಂದು ಅವರು ಕಿಡಿಕಾರಿದರು.
‘ನಮ್ಮ ದೇಶದಲ್ಲಿ ರಾಮನ ತಂದೆ ದಶರಥ ಮಹಾರಾಜನಿಗಿಂತ ರಾಮನ ಭಂಟ ಹನುಮಂತನ ದೇವಾಲಯಗಳು ಎಲ್ಲಾ ಕಡೆ ಇವೆ. ಆಂಜನೇಯ ಸಮಾಜ ಸೇವಕ, ತ್ಯಾಗಿ. ಯಾರು ಸೇವೆ ಮಾಡುತ್ತಾರೋ ಸಮಾಜ ಅವರನ್ನು ಗುರುತಿಸುತ್ತದೆ. ಇದಕ್ಕೆ ಪಂಚಮುಖಿ ಆಂಜನೇಯನೇ ಸಾಕ್ಷಿ. ಹೀಗಾಗಿ ಜನರ ಮಧ್ಯೆ ನಿಷ್ಪಕ್ಷಪಾತವಾಗಿ, ಸೇವಾ ಮನೋಭಾವದಲ್ಲಿ ಕೆಲಸ ಮಾಡಿದರೆ ಸಮಾಜ ನಮ್ಮನ್ನು ಗುರುತುಸುತ್ತದೆ’ ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.
‘ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕಾರಣಕ್ಕೆ ಕಾರ್ಯಕರ್ತರಿಗೆ ಗ್ಯಾರಂಟಿ ಸಮಿತಿ ಸೇರಿದಂತೆ ಅನೇಕ ನಿಗಮ ಮಂಡಳಿಯಲ್ಲಿ ಅಧಿಕಾರ ನೀಡಲಾಗಿದೆ. ಯಾರು ನಿಸ್ವಾರ್ಥದಿಂದ ದುಡಿಯುತ್ತಾರೋ ಅವರನ್ನು ಪಕ್ಷ ಸಮಾಜ ಗೌರವಿಸುತ್ತದೆ. ನಿಮಗೆ ಯಾವುದೇ ಹುದ್ದೆ ಸಿಕ್ಕಿರಲಿ ಅದನ್ನು ಸಣ್ಣದು, ಚಿಕ್ಕದು ಎಂದು ಭಾವಿಸಬೇಡಿ. ರಾಜಕಾರಣದಲ್ಲಿ ಯಾರು ಯಾವ ಮಟ್ಟಕ್ಕೆ ಬೇಕಾದರೂ ಬೆಳೆಯಬಹುದು’ ಎಂದು ಸಲಹೆ ನೀಡಿದ ಅವರು, ‘ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ನಕಲು ಮಾಡುತ್ತಿದೆ’ ಎಂದು ದೂರಿದರು.
‘ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಅದಕ್ಕೆ ಪ್ರತಿ ವರ್ಷ ₹20 ಸಾವಿರ ಕೋಟಿ ನೀಡುತ್ತಿದ್ದೇವೆ. ಎಲ್ಲ ಯೋಜನೆಗಳ ಕಲ್ಯಾಣ ಯೋಜನೆಗಳು ಸೇರಿಸಿದರೆ ಪ್ರತಿ ವರ್ಷ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಣವನ್ನು ಜನರ ಜೇಬಿಗೆ ಹಾಕುತ್ತಿದೆ. ಬಡವರಿಗೆ ಸಹಾಯ ಮಾಡುವ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ’ ಎಂದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಎ.ವಸಂತಕುಮಾರ, ಸಣ್ಣ ನೀರಾವರಿ, ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ಸಚಿವ ಎನ್.ಎಸ್.ಬೋಸರಾಜು, ಶಾಸಕ ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ, ಸಂಸದ ಜಿ ಕುಮಾರ ನಾಯಕ, ಶಾಸಕರಾದ ಜಿ.ಹಂಪಯ್ಯ ನಾಯಕ, ಬಸನಗೌಡ ತುರ್ವಿಹಾಳ, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಸವರಾಜ ಪಾಟೀಲ ಇಟಗಿ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
‘ಗುಂಪುಗಾರಿಕೆಯ ರಾಜಕಾರಣ ಮಾಡಿಲ್ಲ’ ‘
ವ್ಯಕ್ತಿಗಿಂತ ಪಕ್ಷ ಮುಖ್ಯ ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆ ಮಾಡಬೇಕು. ನಾನು ಎಂದಿಗೂ ಗುಂಪುಗಾರಿಕೆಯ ರಾಜಕಾರಣ ಮಾಡಿಲ್ಲ. ಮಾಡಿದ್ದರೆ ಏನೇನೋ ಮಾಡಬಹುದಿತ್ತು. ಕಾಂಗ್ರೆಸ್ ಪಕ್ಷ ಇದ್ದರೆ ನಾವು–ನೀವು ಇರುತ್ತೇವೆ. ಪಕ್ಷದಿಂದಾಗಿ ನಾನು ಉಪಮುಖ್ಯಮಂತ್ರಿಯಾಗಿರುವುದು ದದ್ದಲ್ ಅವರು ಶಾಸಕ ಹಾಗೂ ನಿಗಮದ ಅಧ್ಯಕ್ಷರಾಗಿರುವುದು. ಬೋಸರಾಜು ಅವರು ಶಾಸಕರಲ್ಲದಿದ್ದರೂ ಅವರನ್ನು ಸಚಿವರಾನ್ನಾಗಿ ಮಾಡಲಾಗಿದೆ. ಬೋಸರಾಜು 45 ವರ್ಷಗಳಿಂದ ಪಕ್ಷಕ್ಕೆ ದುಡಿದಿದ್ದಾರೆ. ತೆಲಂಗಾಣದಲ್ಲಿ ದುಡಿದಿದ್ದಾರೆ. ಹಗಲು ರಾತ್ರಿ ಪಕ್ಷ ಸಂಘಟನೆ ಮಾಡಿದ್ದಾರೆ’ ಎಂದರು.
‘ಎಲ್ಲ ಗೇಟ್‌ಗಳ ಬದಲಾವಣೆಗೆ ಆದೇಶ’
‘ತುಂಗಭದ್ರಾ ಅಣೆಕಟ್ಟೆಯ ಎಲ್ಲಾ ಗೇಟ್‌ಗಳ ಬದಲಾವಣೆಗೆ ಆದೇಶ ನೀಡಿದ್ದೇವೆ. ಅಣೆಕಟ್ಟು ವಿಚಾರವಾಗಿ ಆಂಧ್ರ ಸಿಎಂ ಜೊತೆ ಚರ್ಚೆ ಮಾಡಲು ಮೂರು ಬಾರಿ ಪ್ರಯತ್ನ ಮಾಡಿದೆ. ಆದರೆ ಅವರು ಸಮಯ ನೀಡಲಿಲ್ಲ. ಹೂಳು ತುಂಬಿರುವ ಪರಿಣಾಮ 30 ಟಿಎಂಸಿ ನೀರು ವ್ಯರ್ಥವಾಗುತ್ತಿದೆ. ಇದನ್ನು ಬಳಸಿಕೊಳ್ಳಲು ಪರ್ಯಾಯ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದೇವೆ. ಆದರೆ ಆಂಧ್ರ ಪ್ರದೇಶ ಸಹಕಾರ ನೀಡುತ್ತಿಲ್ಲ’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಬೇಸರ ವ್ಯಕ್ತಪಡಿಸಿದರು.
‘ಒಂದೇ ಗುಂಪು ಅದು ಕಾಂಗ್ರೆಸ್ ಗುಂಪು’
‘ಕಾರ್ಯಕರ್ತರಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇರಬಾರದು. ಯಾವ ಗುಂಪೂ ಇರಬಾರದು. ಇಲ್ಲಿ ಕೇವಲ ಒಂದೇ ಗುಂಪು ಅದು ಕಾಂಗ್ರೆಸ್ ಗುಂಪು. ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಇರಬೇಕು. 2028ಕ್ಕೆ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಅದಕ್ಕೆ ನೀವು ಸಿದ್ಧತೆ ಮಾಡಿಕೊಳ್ಳಬೇಕು. ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಅನೇಕ ಜನರು ಪ್ರಯತ್ನಿಸುತ್ತಿದ್ದಾರೆ. ಪಕ್ಷದ ಸಿದ್ಧಾಂತ ನಾಯಕತ್ವದ ಮೇಲೆ ನಂಬಿಕೆ ಇಟ್ಟು ಬರುವ ಎಲ್ಲರನ್ನು ಸೇರಿಸಿಕೊಳ್ಳಿ’ ಎಂದು ಅವರು ಹೇಳಿದರು.
ಮಂತ್ರಾಲಯಕ್ಕೆ ಭೇಟಿ
ಬುಧವಾರ ಬೆಳಿಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಪತ್ನಿ ಸಮೇತ ರಾಯಚೂರು ಸಮೀಪದ ಮಂತ್ರಾಲಯಕ್ಕೆ ಭೇಟಿ ನೀಡಿ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು. ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ಡಿ.ಕೆ.ಶಿವಕುಮಾರ ಅವರನ್ನು ಸನ್ಮಾನಿಸಿ ಆಶೀರ್ವದಿಸಿದರು. ನಂತರ ಅವರು ರಾಯಚೂರು ತಾಲ್ಲೂಕಿನ ಗಾಣದಾಳ ಗ್ರಾಮದ ಸುಪ್ರಸಿದ್ಧ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಸಚಿವ ಎನ್.ಎಸ್.ಬೋಸರಾಜು ಸಂಸದ ಜಿ ಕುಮಾರ ನಾಯಕ ಶಾಸಕರಾದ ಬಸನಗೌಡ ದದ್ದಲ ಆರ್ ಬಸನಗೌಡ ತುರವಿಹಾಳ ಜಿ.ಹಂಪಯ್ಯ ನಾಯಕ ವಿಧಾನ ಪರಿಷತ್ ಸದಸ್ತರಾದ ಎ ವಸಂತಕುಮಾರ ಹಾಗೂ ಬಸನಗೌಡ ಬಾದರ್ಲಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.