ADVERTISEMENT

ರಾಯಚೂರು: ತ್ಯಾಜ್ಯ ಸಂಗ್ರಹ ವಾಹನಗಳಿಗೆ ಚಾಲನೆ

ಸ್ವಚ್ಚ ಭಾರತ: ಸಮಗ್ರ ಅನುಷ್ಠಾನಕ್ಕೆ ಸಚಿವರ ಸಲಹೆ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2021, 4:44 IST
Last Updated 9 ಆಗಸ್ಟ್ 2021, 4:44 IST
ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಗ್ರಂಥಾಲಯ ಆವರಣದಲ್ಲಿ ಘನತ್ಯಾಜ್ಯ ಸಂಗ್ರಹ ವಾಹನಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು
ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಗ್ರಂಥಾಲಯ ಆವರಣದಲ್ಲಿ ಘನತ್ಯಾಜ್ಯ ಸಂಗ್ರಹ ವಾಹನಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು   

ರಾಯಚೂರು: ‘ಗ್ರಾಮೀಣ ಭಾಗದಲ್ಲಿ ಕಸದ ಸಮಸ್ಯೆ ಉಲ್ಬಣಗೊಂಡಿದೆ. ಕಸ ವಿಲೇವಾರಿಗೆ ಸ್ವಚ್ಚ ಭಾರತ್ ಮಿಷನ್ ಯೋಜನೆ ಜಾರಿಗೊಳಿಸಿದ್ದು, ಅಧಿಕಾರಿಗಳು ಸಮಗ್ರವಾಗಿ ಅನುಷ್ಠಾನಗೊಳಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಸೂಚನೆ ನೀಡಿದರು.

ನಗರದ ಕೃಷಿ ವಿಶ್ವವಿದ್ಯಾಲಯದ ಗ್ರಂಥಾಲಯ ಆವರಣದಲ್ಲಿ ಜಿಲ್ಲಾ ಪಂಚಾಯಿತಿ ವತಿಯಿಂದ ಖರೀದಿಸಲಾದ 37 ಘನತ್ಯಾಜ್ಯ ಸಂಗ್ರಹ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದರು.

ಸ್ವಚ್ಛ ಭಾರತ ಮಿಷನ್‍ ಅಡಿ ₹2 ಕೋಟಿ ವೆಚ್ಚದಲ್ಲಿ 37 ಸ್ವಚ್ಛತಾ ವಾಹನ ಖರೀದಿಸಿ ಗ್ರಾಮ ಪಂಚಾಯಿತಿಗಳಿಗೆ ವಿತರಣೆ ಮಾಡಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.ಜಿ.ಪಂ ಸಿಇಒ ಹಾಗೂ ಎಲ್ಲ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಆದೇಶ ಮಾಡಿ ಪ್ರತಿಯೊಬ್ಬರೂ ಇದನ್ನು ಉಪಯೋಗಿಸಿಕೊಳ್ಳಬೇಕು ಎಂದರು.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಸ್ವಚ್ಚ ಭಾರತ ಸಂಕಲ್ಪದೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸ್ವಚ್ಚತಾ ವಾಹನ ವಿತರಿಸಲಾಗುತ್ತಿದೆ. ಸ್ವಚ್ಚತಾ ಸಿಬ್ಬಂದಿ, ಚಾಲಕರು, ಡೀಸೆಲ್ ವೆಚ್ಚವನ್ನು ಆಯಾ ಗ್ರಾಮ ಪಂಚಾಯಿತಿಯ ತೆರಿಗೆ ಸಂಗ್ರಹಣೆಯಿಂದ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ಅವರು ಹೇಳಿದರು.

ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ಶಾಶ್ವತ ಪರಿಹಾರದ ಕುರಿತು ನಿರ್ಧರಿಸಲಾಗುವುದು. ಈ ಬಗ್ಗೆ ಎಲ್ಲ ಮಾಹಿತಿ ಪಡೆದು ತ್ವರಿತವಾಗಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಜಿ.ಪಂ ಸಿಇಒ ಶೇಖ್‌ ತನ್ವೀರ್‌ ಆಸೀಫ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ. ಆರ್ ದುರುಗೇಶ, ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ಹಾಗೂ ಜಿಲ್ಲಾ ಪಂಚಾಯಿತಿ ಯೋಜನೆ ನಿರ್ದೇಶಕ ಶಶಿಕಾಂತ ಶಿವಪೂರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.