ADVERTISEMENT

ಚರಂಡಿಗಳಾಗಿ ಮಾರ್ಪಟ್ಟ ರಸ್ತೆಗಳು

ಸಾಂಕ್ರಾಮಿಕ ರೋಗ ಭೀತಿಯಲ್ಲಿ ಗ್ರಾಮಸ್ಥರು: ಶುದ್ಧ ಕುಡಿಯುವ ನೀರೂ ಮರೀಚಿಕೆ

​ಪ್ರಜಾವಾಣಿ ವಾರ್ತೆ
Published 31 ಮೇ 2025, 5:53 IST
Last Updated 31 ಮೇ 2025, 5:53 IST
ಜಾಲಹಳ್ಳಿ ಸಮೀಪದ ಚಿಂಚೋಡಿ ಗ್ರಾಮದಲ್ಲಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿರುವುದು
ಜಾಲಹಳ್ಳಿ ಸಮೀಪದ ಚಿಂಚೋಡಿ ಗ್ರಾಮದಲ್ಲಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿರುವುದು   

ಜಾಲಹಳ್ಳಿ: ಸಮೀಪದ ಚಿಂಚೋಡಿ ಗ್ರಾಮದಲ್ಲಿ ಸಮರ್ಪಕ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆಗಳೇ ಚರಂಡಿಗಳಾಗಿ ಪರಿವರ್ತಿತವಾಗಿವೆ. ಇದರಿಂದ ಗ್ರಾಮಸ್ಥರು ಬೇಸತ್ತು ಹೋಗಿದ್ದಾರೆ.

ಗ್ರಾಮದಲ್ಲಿಯೇ ಗ್ರಾಮ ಪಂಚಾಯಿತಿ ಕಚೇರಿ ಇದೆ.  ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮನೆಗಳಿವೆ. ಆದರೆ ಸೂಕ್ತ ಚರಂಡಿ ಇಲ್ಲದಿರುವುದರಿಂದ ಹೊಲಸು ನೀರು ರಸ್ತೆ ಮೇಲೆಯೇ ಹರಿಯುತ್ತದೆ. ಇದರಿಂದ ಎಲ್ಲೆಡೆ ದುರ್ವಾಸನೆ ಬೀರುತ್ತದೆ.

ಮಳೆಗಾಲ ಪ್ರಾರಂಭಗೊಂಡಿರುವುದರಿಂದ ಅವೈಜ್ಞಾನಿಕವಾಗಿ ನಿರ್ಮಿಸಿರುವ ಚರಂಡಿಗಳು ತುಂಬಿ ಹರಿಯುತ್ತಿವೆ. ಇದರಿಂದ ಪಾದಚಾರಿಗಳು, ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಈ ಕುರಿತು ಗ್ರಾ.ಪಂ ಅಧ್ಯಕ್ಷ, ಪಿಡಿಒಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾ.ಪಂ ಸದಸ್ಯ ತಿಮ್ಮಣ್ಣ ಪೊಲೀಸ್ ಪಾಟೀಲ ಅಸಮಾಧಾನ ವ್ಯಕ್ತಪಡಿಸುತ್ತಾರೆ.

ADVERTISEMENT

ಗ್ರಾಮದಲ್ಲಿ ₹15 ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಅದರೆ, ಒಂದು ವರ್ಷದಿಂದ ಸ್ಥಗಿತಗೊಂಡಿದೆ. ದುರಸ್ತಿಗೊಳಿಸಲು ಪಿಡಿಒ ಹಿಂದೇಟು ಹಾಕುತ್ತಿದ್ದಾರೆ ಎಂದು ಜನ ದೂರುತ್ತಾರೆ.

ಗ್ರಾಮದಲ್ಲಿಯೇ ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಇದೆ. ಇವುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಚರಂಡಿ ನೀರು ಹರಿಯುತ್ತಿರುವ ಕಾರಣ ರೋಗಿಗಳು ಮತ್ತು ಶಾಲಾ ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ. ಪಿಡಿಒ ಅವರು ಬರುವುದಿಲ್ಲ ಎಂದು ಗ್ರಾಮದ ನಿವಾಸಿ ಅಮರೇಶ ನಗನೂರು ಹೇಳಿದರು.

ಪಂಚಾಯಿತಿ ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಂಡು ಹೊಲಸು ನೀರು ಹಾಗೂ ಕಸ ಕಡ್ಡಿಯನ್ನು ಬೇರೆಡೆಗೆ ಸಾಗಿಸುವ ವ್ಯವಸ್ಥೆ ಮಾಡಬೇಕು ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.

ಮಾಹಿತಿ ಪಡೆಯಲು ‘ಪ್ರಜಾವಾಣಿ’ಯು ಪಿಡಿಒ ಚನ್ನಬಸವ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.