ADVERTISEMENT

ರಸಗೊಬ್ಬರದ ಕೃತಕ ಅಭಾವ- ಕ್ರಮ ಕೈಗೊಳ್ಳಬೇಕು; ಶಾಸಕ ಬಸನಗೌಡ ದದ್ದಲ

ವಿಶೇಷ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಬಸನಗೌಡ ದದ್ದಲ ಸೂಚನೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2021, 12:32 IST
Last Updated 19 ಆಗಸ್ಟ್ 2021, 12:32 IST
ಮಾನ್ವಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಶಾಸಕ ಬಸನಗೌಡ ದದ್ದಲ ಅಧ್ಯಕ್ಷತೆಯಲ್ಲಿ ವಿಶೇಷ ಪ್ರಗತಿ ಪರಿಶೀಲನಾ ಸಭೆ ನಡೆಯಿತು
ಮಾನ್ವಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಶಾಸಕ ಬಸನಗೌಡ ದದ್ದಲ ಅಧ್ಯಕ್ಷತೆಯಲ್ಲಿ ವಿಶೇಷ ಪ್ರಗತಿ ಪರಿಶೀಲನಾ ಸಭೆ ನಡೆಯಿತು   

ಮಾನ್ವಿ: ‘ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಿ ರೈತರಿಗೆ ವಂಚಿಸುವುದನ್ನು ತಡೆಯಲು ಕೃಷಿ ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ಶಾಸಕ ಬಸನಗೌಡ ದದ್ದಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಗುರುವಾರ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾನ್ವಿ ತಾಲ್ಲೂಕಿನ ಗ್ರಾಮಗಳಲ್ಲಿ ಸರ್ಕಾರದ ಯೋಜನೆಗಳ ಅನುಷ್ಠಾನದ ಕುರಿತು ವಿಶೇಷ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

‘ಸಹಕಾರ ಸಂಘಗಳು ಹಾಗೂ ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಸಮರ್ಪಕವಾಗಿ ನಿಗದಿತ ದರದಲ್ಲಿ ರಸಗೊಬ್ಬರ ಪೂರೈಸಲು ವ್ಯವಸ್ಥೆ ಮಾಡಬೇಕು’ ಎಂದು ಹೇಳಿದರು.

ADVERTISEMENT

ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆ ನಿರೀಕ್ಷಿತ ಪ್ರಮಾಣದಲ್ಲಿ ನಡೆಯದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ರೈತರಿಗೆ ಬೆಳೆ ಸಮೀಕ್ಷೆಯ ಮಹತ್ವ ಹಾಗೂ ವಿಧಾನದ ಕುರಿತು ತಿಳಿವಳಿಕೆ ಮೂಡಿಸಬೇಕು’ ಎಂದು ಸಲಹೆ ನೀಡಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ ಮಾತನಾಡಿ, ‘ತಾಲ್ಲೂಕಿನಲ್ಲಿ ಕೋವಿಡ್ ಲಸಿಕೆ ಕುರಿತು ಜನಜಾಗೃತಿ ಮೂಡಿಸಿದ್ದು, ಗ್ರಾಮೀಣ ಭಾಗದ ಜನರಿಗೆ ಲಸಿಕೆ ಹಾಕಲಾಗುತ್ತಿದೆ. ಮೂರನೇ ಅಲೆ ನಿಯಂತ್ರಣಕ್ಕಾಗಿ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದರು.

ಶಾಸಕ ಬಸನಗೌಡ ದದ್ದಲ ಮಾತನಾಡಿ, ‘ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಜಿಲ್ಲೆಯ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಹಾಗೂ ಅಗತ್ಯ ಸಲಕರಣೆಗಳನ್ನು ಪೂರೈಸಲು ₹ 30 ಕೋಟಿ ಮಂಜೂರಾಗಿದೆ. ಮಾನ್ವಿ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ತಾಲ್ಲೂಕಿನ ಆರೋಗ್ಯ ಕೇಂದ್ರಗಳು ಹಾಗೂ ಉಪಕೇಂದ್ರಗಳಲ್ಲಿ ಅವಶ್ಯವಿರುವ ಸಲಕರಣೆಗಳ ಕುರಿತು ಬೇಡಿಕೆ ಪಟ್ಟಿ ಸಲ್ಲಿಸಬೇಕು’ ಎಂದು ಸಲಹೆ ನೀಡಿದರು.

ತುಂಗಭದ್ರಾ ನದಿಪಾತ್ರದಲ್ಲಿನ ದದ್ದಲ ಸೇರಿ ಇತರ ಸ್ಥಳಾಂತರಗೊಂಡ ಗ್ರಾಮಗಳಲ್ಲಿ ಹೆಚ್ಚುವರಿ ಅಂಗನವಾಡಿ ಕೇಂದ್ರಗಳ ಆರಂಭಕ್ಕೆ ಸಮೀಕ್ಷೆ ನಡೆಸಲು ಸೂಚಿಸಿದರು.

ಸಭೆಗೆ ತಪ್ಪು ಮಾಹಿತಿ ನೀಡಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಭದ್ರಾ ದೇವಿ ಅವರ ಕಾರ್ಯವೈಖರಿ ಬಗ್ಗೆ ಶಾಸಕರು ತರಾಟೆಗೆ ತೆಗೆದುಕೊಂಡರು.

ತಾಲ್ಲೂಕಿನ ಕುರ್ಡಿ ಗ್ರಾಮದಲ್ಲಿ ಹೊಸದಾಗಿ ಸರ್ಕಾರಿ ಪಿಯು ಕಾಲೇಜು, ಸುಂಕೇಶ್ವರ ಹಾಗೂ ಸಾದಾಪುರ ಗ್ರಾಮಗಳಲ್ಲಿ ಪ್ರೌಢಶಾಲೆಗಳ ಮಂಜೂರಾತಿಗೆ ಪ್ರಸ್ತಾವ ಸಲ್ಲಿಸಲು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗುಡಾಳ ಅವರಿಗೆ ಆದೇಶ ನೀಡಿದರು.

ಕ್ಷೇತ್ರ ವ್ಯಾಪ್ತಿಯಲ್ಲಿ ಮೇಲ್ದರ್ಜೆಗೇರಿಸಬೇಕಾದ ರಸ್ತೆಗಳು ಹಾಗೂ ಸೇತುವೆಗಳ ನಿರ್ಮಾಣದ ಕುರಿತು ವರದಿ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಬಸನಗೌಡ ದದ್ದಲ ಸಲಹೆ ನೀಡಿದರು.

ಇತರ ಇಲಾಖೆಗಳ ಅಧಿಕಾರಿಗಳು ಪ್ರಗತಿ ವರದಿ ಮಂಡಿಸಿದರು. ತಾಲ್ಲೂಕು ಪಂಚಾಯಿತಿ ಇಒ ಸ್ಟೆಲ್ಲಾ ವರ್ಗೀಸ್, ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.

***

ಕೋವಿಡ್ ನಿಯಂತ್ರಣಕ್ಕಾಗಿ ನರೇಗಾ ಕಾಮಗಾರಿಗಳ ಸ್ಥಳದಲ್ಲಿ ಜನಜಾಗೃತಿ ಹಾಗೂ ಕೂಲಿಕಾರ್ಮಿಕರಿಗೆ ಕೋವಿಡ್ ಲಸಿಕೆ ಹಾಕಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.

- ಬಸನಗೌಡ ದದ್ದಲ, ಶಾಸಕ, ರಾಯಚೂರು ಗ್ರಾಮೀಣ ಕ್ಷೇತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.