ರಾಯಚೂರು: ಶಕ್ತಿನಗರದಲ್ಲಿರುವ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್‌ಟಿಪಿಎಸ್) ನಾಲ್ಕನೇ ಘಟಕದಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿ ಅಪಾರ ಹಾನಿ ಸಂಭವಿಸಿದೆ.
ವಿದ್ಯುತ್ ಪರಿವರ್ತಕದಲ್ಲಿ ಹೊತ್ತಿಕೊಂಡ ಬೆಂಕಿ ನೋಡನೋಡುತ್ತಿದ್ದಂತೆಯೇ ವಿಸ್ತರಿಸಿಕೊಂಡಿತು. ಘಟಕದಲ್ಲಿದ್ದ ಕಾರ್ಮಿಕರು ಬೆಂಕಿ ನಂದಿಸಲು ಎಲ್ಲ ರೀತಿಯ ಪ್ರಯತ್ನ ಮಾಡಿದರೂ ಬೆಂಕಿ ನಿಯಂತ್ರಣಕ್ಕೆ ಬರಲಿಲ್ಲ. ಪರಿವರ್ತಕ ಸುಟ್ಟು ಕರಕಲಾಗಿದ್ದು, ಉಳಿದ ಉಪಕರಣಗಳಿಗೂ ಹಾನಿಯಾಗಿದೆ ಎಂದು ಮೂಲಗಳು ತಿಳಿಸಿವೆ.
ಬೆಂಕಿ ಅವಘಡದಿಂದ ಎಷ್ಟು ನಷ್ಟವಾಗಿದೆ ಎನ್ನುವುದು ಸ್ಪಷ್ಟವಾಗಿಲ್ಲ. ಅಧಿಕಾರಿಗಳು ಇನ್ನೂ ಪರಿಶೀಲನೆ ಮಾಡುತ್ತಿದ್ದಾರೆ. ಸದ್ಯಕ್ಕೆ 210 ಮೆ.ವ್ಯಾ ವಿದ್ಯುತ್ ಉತ್ಪಾದಿಸುವ ಘಟಕವನ್ನು ಸ್ಥಗಿತಗೊಳಿಸಲಾಗಿದೆ.
ಆರ್‌ಟಿಪಿಎಸ್‌ನ ಎಂಟು ಘಟಕಗಳ ಪೈಕಿ ಒಂದು ಕಾರ್ಯನಿರ್ವಹಿಸುತ್ತಿಲ್ಲ. ಮೂರು ಘಟಕಗಳಲ್ಲಿ ಉತ್ಪಾದನೆ ಮಾಡುತ್ತಿಲ್ಲ. ಅಲ್ಲಿ ನಿರ್ವಹಣೆ ಕಾರ್ಯ ನಡೆದಿದೆ. ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ವೈಟಿಪಿಎಸ್) ಎರಡನೇ ಘಟಕವೂ ಉತ್ಪಾದನೆ ನಿಲ್ಲಿಸಿದ್ದು, ಕಲ್ಲಿದ್ದಲು ಆಧಾರಿತ ವಿದ್ಯುತ್ ಕೇಂದ್ರಗಳ ಉತ್ಪಾದನೆ ಕುಸಿದಿದೆ ಎಂದು ಮೂಲಗಳು ತಿಳಿಸಿವೆ.
ಬೆಂಕಿ ಅವಘಡ ಕುರಿತು ಪ್ರತಿಕ್ರಿಯೆ ಪಡೆಯಲು ಆರ್‌ಟಿಪಿಎಸ್ ವ್ಯವಸ್ಥಾಪಕ ನಿರ್ದೇಶಕರನ್ನು ಮೊಬೈಲ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.