ADVERTISEMENT

ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ನ್ಯಾ.ಬೈಲೂರು ಶಂಕರರಾಮಾ ಕರೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2020, 14:13 IST
Last Updated 25 ಜನವರಿ 2020, 14:13 IST
ರಾಯಚೂರಿನಲ್ಲಿ ಶನಿವಾರ ಏರ್ಪಡಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಬೈಲೂರು ಶಂಕರರಾಮಾ ಅವರು ಹೊಸದಾಗಿ ಮತಪಟ್ಟಿಗೆ ಸೇರ್ಪಡೆಯಾದ ಯುವಕರಿಗೆ ಸಾಂಕೇತಿಕವಾಗಿ ಎಪಿಕ್‌ ಕಾರ್ಡ್‌ ವಿತರಿಸಿದರು
ರಾಯಚೂರಿನಲ್ಲಿ ಶನಿವಾರ ಏರ್ಪಡಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಬೈಲೂರು ಶಂಕರರಾಮಾ ಅವರು ಹೊಸದಾಗಿ ಮತಪಟ್ಟಿಗೆ ಸೇರ್ಪಡೆಯಾದ ಯುವಕರಿಗೆ ಸಾಂಕೇತಿಕವಾಗಿ ಎಪಿಕ್‌ ಕಾರ್ಡ್‌ ವಿತರಿಸಿದರು   

ರಾಯಚೂರು:ದೇಶದಲ್ಲಿ ಸುಭದ್ರ ಪ್ರಜಾಪ್ರಭುತ್ವ ಅಸ್ತಿತ್ವಕ್ಕೆ ಬರಲು ಪ್ರತಿಯೊಬ್ಬರೂ ಮತದಾನದ ಮಹತ್ವವನ್ನು ಅರಿತುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬೈಲೂರು ಶಂಕರರಾಮಾ ಕರೆ ನೀಡಿದರು.

ನಗರದ ಪಂಡಿತ್‌ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಡಳಿತದಿಂದ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬರೂ ಮತದಾನದ ಮಹತ್ವವನ್ನು ಅರಿತಾಗ ಮಾತ್ರ ದೇಶದಲ್ಲಿ ಸುಭದ್ರ ಸರ್ಕಾರ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶವನ್ನು ಮುನ್ನಡೆಸಬೇಕಾದರೆ ಜನರಿಂದ ನೇರವಾಗಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅಧಿಕಾರವನ್ನು ಭಾರತ ಸಂವಿಧಾನದಲ್ಲಿ ಅವಕಾಶ ನೀಡಿದೆ. ಮತದಾನ ನಮ್ಮ ಹಕ್ಕು. ಚುನಾವಣೆಯಲ್ಲಿ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಹೇಳಿದರು.

ADVERTISEMENT

18 ವರ್ಷ ತುಂಬಿದ ಯುವಕ-ಯುವತಿಯರು ಚುನಾವಣೆಯಲ್ಲಿ ತಪ್ಪದೇ ಮತ ಚಲಾಯಿಸಬೇಕು. ಇತ್ತೀಚಿನ ದಿನಗಳಲ್ಲಿ ಯುವಕರು ಮತದಾನದಿಂದ ದೂರ ಉಳಿಯುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಮತದಾನ ‘ನಮ್ಮ ಹಕ್ಕು ಹಾಗೂ ನಮ್ಮ ಕರ್ತವ್ಯ’ ಎನ್ನುವುದನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.

ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ನಿರ್ಭಯವಾಗಿ ಹಾಗೂ ನಿಷ್ಪಕ್ಷಪಾತವಾಗಿ ಮತ ಚಲಾಯಿಸಬೇಕು. ಮತದಾನ ಎಲ್ಲ ದಾನಕ್ಕಿಂತ ಅತ್ಯಂತ ಶ್ರೇಷ್ಠವಾದದ್ದು. ದೇಶದ ಆಂತರಿಕ ಮತ್ತು ಬಾಹ್ಯಾಕಾಶಕ್ಕೆ ಮತದಾನ ಅತ್ಯಗತ್ಯವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಆರ್ ವೆಂಕಟೇಶ್ ಕುಮಾರ್, ವಿದ್ಯಾರ್ಥಿ ಮತ್ತು ಯುವಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ.ನಗರ ಪ್ರದೇಶಗಳಲ್ಲಿ ಮತ ಹಾಕುವವರ ಸಂಖ್ಯೆ ಕಡಿಮೆಯಿದ್ದು, ಕೇವಲ ಶೇ 50ರಷ್ಟು ಮಾತ್ರ ಆಗುತ್ತಿದೆ. ಮತದಾನ ದಿನದಂದು ಸರ್ಕಾರಿ ಮತ್ತು ಖಾಸಗಿ ಕಂಪನಿಗಳಿಗೆ ರಜೆ ಘೋಷಿಸಿದ್ದರು ಸಹ ಮತ ಹಾಕದೇ ಕಾಲಹರಣ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಮತದಾನ ಪ್ರಮಾಣ ಪ್ರತಿಶತ ಹೆಚ್ಚಾಗಿರುತ್ತದೆ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ ಪ್ರತಿಜ್ಞಾವಿಧಿ ಭೋಧಿಸಿದರು. ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾದ ಮತದಾರರಿಗೆ ಎಪಿಕ್ ಕಾರ್ಡ್ ವಿತರಿಸಲಾಯಿತು.

ನ್ಯಾಯಾಧೀಶ ಕೆ.ಆರ್.ನಾಗರಾಜ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು, ರಾಯಚೂರು ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ತಹಶೀಲ್ದಾರ್‌ ಡಾ.ಹಂಪಣ್ಣ ಸಜ್ಜನ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗೋನಾಳ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನಿ, ಮಹೇಂದ್ರ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.