ADVERTISEMENT

‘ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ’: ಶಾಸಕ ಬಸನಗೌಡ ತುರ್ವಿಹಾಳ

​ಪ್ರಜಾವಾಣಿ ವಾರ್ತೆ
Published 28 ಮೇ 2025, 12:50 IST
Last Updated 28 ಮೇ 2025, 12:50 IST
ಮಸ್ಕಿಯ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಪದಾಧಿಕಾರಿಗಳ ಹಾಗೂ ಮುಖಂಡರ ಸಭೆಯಲ್ಲಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಮಾತನಾಡಿದರು
ಮಸ್ಕಿಯ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಪದಾಧಿಕಾರಿಗಳ ಹಾಗೂ ಮುಖಂಡರ ಸಭೆಯಲ್ಲಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಮಾತನಾಡಿದರು   

ಮಸ್ಕಿ: ‘ಶೀಘ್ರದಲ್ಲಿಯೇ ಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕಾಗಿದ್ದರಿಂದ ಪಕ್ಷದ ಕಾರ್ಯಕರ್ತರು ಈಗಿನಿಂದಲೇ ಸಿದ್ಧರಾಗಬೇಕು’ ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

ಪಟ್ಟಣದ ಬಸವೇಶ್ವರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಪಕ್ಷದ ಮುಖಂಡರ ಹಾಗೂ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದರು.

‘ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಸರ್ಕಾರದ ಐದು ಜನಪರ ಗ್ಯಾರಂಟಿ ಯೋಜನೆಗಳ ಲಾಭ ಎಲ್ಲಾ ಜನರೂ ಪಡೆದುಕೊಂಡಿದ್ದಾರೆ. ಸರ್ಕಾರದ ಎರಡು ವರ್ಷಗಳ ಸಾಧನೆಗಳನ್ನು ಜನ ಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮಾಡಬೇಕು’ ಎಂದರು.

ADVERTISEMENT

‘ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ. ಯಾವುದೇ ಕ್ಷಣದಲ್ಲಿ ಚುನಾವಣೆ ಎದುರಾಗಬಹುದು’ ಎಂದರು.

‘ಪಕ್ಷದ ಸಂಘಟನೆ ದೃಷ್ಟಿಯಿಂದ ತಾಲ್ಲೂಕಿನ ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಸಭೆ ನಡೆಸುವ ಮೂಲಕ ಪಕ್ಷ ಸಂಘಟಿಸಲಾಗುವುದು’ ಎಂದು ಹೇಳಿದರು.

ಪಕ್ಷದ ನಗರ ಬ್ಲಾಕ್ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ ಮಾತನಾಡಿ,‘ ಕಾಂಗ್ರೆಸ್ ಪಕ್ಷ ಕಾರ್ಯಕರ್ತರ ಪಕ್ಷವಾಗಿದೆ. ಪ್ರತಿಯೊಬ್ಬರೂ ಶಿಸ್ತಿನ ಸಿಪಾಯಿಗಳಂತೆ ಕೆಲಸ ಮಾಡಿದಾಗ ಮಾತ್ರ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿ ಸ್ಥಾನಗಳನ್ನು ಗೆಲ್ಲಲು ಸಾಧ್ಯ’ ಎಂದರು.

ಗ್ರಾಮೀಣ ಬ್ಲಾಕ್ ಘಟಕದ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಮೈಬೂಸಾಬ ಮುದ್ದಾಪೂರ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೃಷ್ಣ ಡಿ.ಚಿಗರಿ, ನಿರುಪಾದೆಪ್ಪ ವಕೀಲ, ಆದನಗೌಡ ದಳಪತಿ, ಮಲ್ಲಯ್ಯ ಮುರಾರಿ, ಬಸವಂತಪ್ಪ ಮಟ್ಟೂರು, ಅಜಯ ನಾಡಗೌಡ, ನಾಗಭೂಷಣ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.