ADVERTISEMENT

ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲು ಬದ್ಧ: ಬೋಸರಾಜು

ಜಿಲ್ಲಾ, ತಾಲ್ಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2025, 2:29 IST
Last Updated 7 ಸೆಪ್ಟೆಂಬರ್ 2025, 2:29 IST
ರಾಯಚೂರಿನಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಾವಿತ್ರಿಬಾಯಿ ಫುಲೆ ಹಾಗೂ ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಭಾವಚಿತ್ರಕ್ಕೆ ಸಚಿವ ಎನ್.ಎಸ್.ಬೋಸರಾಜು ಪೂಜೆ ಸಲ್ಲಿಸಿದರು
ರಾಯಚೂರಿನಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಾವಿತ್ರಿಬಾಯಿ ಫುಲೆ ಹಾಗೂ ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಭಾವಚಿತ್ರಕ್ಕೆ ಸಚಿವ ಎನ್.ಎಸ್.ಬೋಸರಾಜು ಪೂಜೆ ಸಲ್ಲಿಸಿದರು   

ರಾಯಚೂರು: ‘ಕಲ್ಯಾಣ ಕರ್ನಾಟಕದ ಶಾಲೆಗಳು ಮೂಲಸೌಕರ್ಯದ ಸಮಸ್ಯೆ ಎದುರಿಸುತ್ತಿರುವುದನ್ನು ಸರ್ಕಾರದ ಗಮನಕ್ಕೆ ತರಲಾಗಿದ್ದು, ಹಂತ ಹಂತವಾಗಿ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲಾಗುವುದು’ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದರು.

ಇಲ್ಲಿಯ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಯಚೂರು ಮಹಾನಗರ ಪಾಲಿಕೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಏರ್ಪಡಿಸಿದ್ದ

2025-26ನೇ ಸಾಲಿನ ರಾಯಚೂರು ಜಿಲ್ಲಾ ಹಾಗೂ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ADVERTISEMENT


‘ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವ ದಿಸೆಯಲ್ಲಿ ಸಂಚಿವ ಸಂಪುಟದಲ್ಲಿ ಚರ್ಚಿಸಲಾಗಿದೆ. ಸಮಸ್ಯೆ ಬಗೆಹರಿಸಲು ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ‘ ಎಂದು ತಿಳಿಸಿದರು.

‘ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಪ್ರತಿವರ್ಷ ₹5000 ಕೋಟಿ ರೂಪಾಯಿಗಳನ್ನುನೀಡುತ್ತದೆ. ಇದಲ್ಲಿ ಶಿಕ್ಷಣಕ್ಕೆ ₹ 1250 ಕೋಟಿ ಶಿಕ್ಷಣಕ್ಕೆ ವಿನಿಯೋಗಿಸಲಾಗುತ್ತಿದೆ. ಈ ಅನುದಾನ ಬಳಸಿಕೊಂಡು ಶೈಕ್ಷಣಿಕ ಕ್ಷೇತ್ರದಲ್ಲಿನ ಸಮಸ್ಯೆಗಳನ್ನು ನಿವಾರಿಸಲು ಪ್ರಯತ್ನಿಸಲಾಗುತ್ತಿದೆ’ ಎಂದು ಹೇಳಿದರು.


‘ಸರ್ವಪಲ್ಲಿ ರಾಧಕೃಷ್ಣನ್ ನಾಡು ಕಂಡ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದಾರೆ. ಅವರ ಆಚಾರ, ವಿಚಾರ ಮತ್ತು ಅವರ ಸಂದೇಶಗಳನ್ನು ಪಾಲಿಸುವ ಮೂಲಕ ಮಕ್ಕಳ ಉತ್ತಮ ಭವಿಷ್ಯ ರೂಪಿಸಬೇಕಿದೆ. ಮೂಲಸೌಲಭ್ಯಗಳ ಕೊರತೆಯ ನಡುವೆಯೂ ಶಿಕ್ಷಕರು ನಿಷ್ಠೆಯಿಂದ ಕರ್ತವ್ಯ ನಿಭಾಯಿಸುತ್ತಿರುವುದು ಪ್ರಶಂಶನೀಯ‘ ಎಂದು ಹೇಳಿದರು.

ನಗರ ಕ್ಷೇತ್ರದ ಶಾಸಕ ಡಾ.ಶಿವರಾಜ ಎಸ್. ಪಾಟೀಲ ಮಾತನಾಡಿ, ‘ಶಿಕ್ಷಕರು ಕಣ್ಣಿಗೆ ಕಾಣುವ ದೇವರಿದ್ದಂತೆ. ಸರ್ಕಾರ ಶಿಕ್ಷರ ಕಾರ್ಯಭಾರದ ಹೊರೆಯನ್ನು ಕಡಿಮೆ ಮಾಡಬೇಕು. ಅಂದಾಗ ಮಾತ್ರ ಶಿಕ್ಷಕರಿಂದ ಗುಣಮಟ್ಟದ ಬೋಧನೆ ಹಾಗೂ ಮಕ್ಕಳ ಕಲಿಕೆ ನಿರೀಕ್ಷೆ ಮಾಡಬಹುದಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಗುರುಭವನ ನಿರ್ಮಾಣಕ್ಕಾಗಿ ಈಗಾಗಲೇ ಅನುದಾನ ಮೀಸಲಿರಿಸಲಾಗಿದೆ. ಜಾಗದ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಲಾಗುತ್ತಿದೆ’ ಎಂದು ಹೇಳಿದರು.

ಸಾಹಿತಿ ರಮೇಶಬಾಬು ಯಾಳಗಿ ಉಪನ್ಯಾಸ ನೀಡಿ, ‘ಗುರು ಇಲ್ಲದೆ ಗುರಿ ತಲುಪುವುದು ಬಹಳ ಕಷ್ಟ. ಭರವಸೆಯನ್ನು ಹೆಚ್ಚಿಸುವ, ಕನಸನ್ನು ಸಾಕಾರಗೊಳಿಸುವ, ಕಲಿಕಾ ಶಕ್ತಿಯನ್ನು ಹೆಚ್ಚಿಸುವ ಸೂತ್ರಧಾರನೇ ಉತ್ತಮ ಶಿಕ್ಷಕ‘ ಎಂದು ಬಣ್ಣಿಸಿದರು.

‘ದೇಶದ ಪ್ರಗತಿಯಲ್ಲಿ ಶಿಕ್ಷಣಕ್ಕೆ ಎಷ್ಟು ಮಹತ್ವವಿದೆಯೋ ಅಷ್ಟೇ ಮಹತ್ವ ಶಿಕ್ಷಕರಿಗೂ ಇದೆ. ಶಿಕ್ಷಣ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಶಿಕ್ಷಕರು ಸರಿಯಾಗಿ ಅರಿತು ಬೋಧನೆ ಮಾಡಬೇಕು’ ಎಂದರು.

ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ

ಶಾಲಾ ಶಿಕ್ಷಣ ಇಲಾಖೆಯಿಂದ 2025-26ನೇ ಸಾಲಿನ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಶಿಕ್ಷಕರಿಗೆ ಪ್ರದಾನ ಮಾಡಲಾಯಿತು.

ಮಹಾನಗರ ಪಾಲಿಕೆಯ ಮೇಯರ್ ನರಸಮ್ಮ ಮಾಡಗಿರಿ, ಶಾಲಾ ಶಿಕ್ಷಣ ಇಲಾಖೆಯ ಆಡಳಿತ ವಿಭಾಗದ ಉಪ ನಿರ್ದೇಶಕ ಕೆ.ಡಿ.ಬಡಿಗೇರ, ರಾಯಚೂರು ಒಕ್ಕುಲುತನ ಹುಟ್ಟುವಳಿ ಮಾರಾಟ ಮತ್ತು ಸಹಕಾರ ಸಂಘದ ಅಧ್ಯಕ್ಷ ಜಯಂತರಾವ್ ಪತಂಗೆ, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯ ಚನ್ನಬಸವ, ಮುಖಂಡ ಶಿವಮೂರ್ತಿ, ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೊಸಗಿ ಉಪಸ್ಥಿತರಿದ್ದರು.

ರಾಯಚೂರಿನಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ‍ಪ್ರದಾನ ಮಾಡಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.