
ರಾಯಚೂರು: ‘ಸರ್ಕಾರಿ ಶಾಲೆಗಳು ಸಂವಿಧಾನದ ತೊಟ್ಟಿಲು ಇದ್ದಂತೆ. ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳದಿದ್ದರೆ ಸಂವಿಧಾನವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ. ಸಂವಿಧಾನದ ಆಶಯ ಈಡೇರಿಸಿಕೊಳ್ಳಲು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಉಳಿಸಿಕೊಳ್ಳುವುದು ಅತ್ಯವಶ್ಯವಾಗಿದೆ’ ಎಂದು ಶಿಕ್ಷಣ ತಜ್ಞ ನಿರಂಜನ ಆರಾಧ್ಯ ಹೇಳಿದರು.
ಇಲ್ಲಿಯ ನವೋದಯ ಶಿಕ್ಷಣ ಸಂಸ್ಥೆಯ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ವೇದಿಕೆ, ಭಾರತ ಜ್ಞಾನ ವಿಜ್ಞಾನ ಸಮಿತಿ, ರಾಜ್ಯ ಮಹಿಳಾ ಒಕ್ಕೂಟ ಹಾಗೂ ಶಿಕ್ಷಣ ಹಕ್ಕಿಗಾಗಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸಂಘಟನೆಗಳ ಆಶ್ರಯದಲ್ಲಿ ನಡೆದ ‘ನಮ್ಮ ಶಾಲೆ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಅವರು ಕೆಪಿಎಸ್ ಶಾಲೆಗಳ ಸ್ಥಿತಿಗತಿ ಕುರಿತು ಅವಲೋಕನ ಮಂಡಿಸಿದರು.
‘ಸಾರ್ವಜನಿಕ ಶಿಕ್ಷಣದಲ್ಲಿ ಇರುವ ಕನಿಷ್ಠ ಸೌಲಭ್ಯಗಳನ್ನು ಬಲಪಡಿಸುವ ಬದಲಿಗೆ ಇರುವುದನ್ನೇ ಕಸಿಯುವ ಕೆಲಸ ನಡೆಯುತ್ತಿದೆ. ಶಿಕ್ಷಣವನ್ನು ಸಾಮಾಜಿಕ ಒಳಿತಿನ ಸಾಧನವೆಂದು ಪರಿಗಣಿಸುವ ಮನೋಭಾವ ಕುಂದಿದ್ದು, ಸರ್ಕಾರಿ ಶಾಲೆಗಳ ವಿಲೀನ ಪ್ರಕ್ರಿಯೆ ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾಗಿದೆ’ ಎಂದು ಅವರು ಅಭಿಪ್ರಾಯಪಟ್ಟರು.
‘ಕಾರ್ಪೊರೇಟ್ ಶಾಲೆಗಳನ್ನು ಮಾದರಿಯಾಗಿ ನೋಡುವುದು ಅಪಾಯಕಾರಿ ಬೆಳವಣಿಗೆಯಾಗಿದೆ’ ಎಂದು ಎಚ್ಚರಿಸಿದರು.
‘1950ರಿಂದ 1990ರ ದಶಕದವರೆಗೆ ಶಿಕ್ಷಣ ಕ್ಷೇತ್ರ ಅಭಿವೃದ್ಧಿಯ ಹಾದಿಯಲ್ಲಿ ಸಾಗಿತ್ತು. ಆದರೆ 1990ರ ನಂತರದ ಆರ್ಥಿಕ ಹಾಗೂ ನೀತಿ ಬದಲಾವಣೆಗಳಿಂದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಹದಗೆಟ್ಟಿದೆ. ಇದರಿಂದ ಸರ್ಕಾರಿ ಶಾಲೆಗಳ ಮೇಲಿನ ನಂಬಿಕೆ ಕುಸಿದು, ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳು ಹೆಚ್ಚಿನ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ’ ಎಂದು ಹೇಳಿದರು.
‘ಎಲ್ಲ ಶಾಲೆಗಳನ್ನು ಮುಚ್ಚಿ ಒಂದೇ ಶಾಲೆ ಮಾಡುವ ಸರ್ಕಾರದ ನಿರ್ಧಾರ ಎಷ್ಟರ ಮಟ್ಟಿಗೆ ಸಮಂಜಸ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಸರ್ಕಾರಿ ಶಾಲೆಗಳಲ್ಲಿ ದೊರೆಯುವ ಬುನಾದಿ ಹಾಗೂ ಮೌಲ್ಯಾಧಾರಿತ ಶಿಕ್ಷಣ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಿಗುವುದಿಲ್ಲ. ಮ್ಯಾಗ್ನೇಟ್ ಶಾಲೆಗಳ ಪರಿಕಲ್ಪನೆ ಬಡವರ ಶಿಕ್ಷಣ ಹಕ್ಕನ್ನು ಕಸಿಯುವ ಹುನ್ನಾರವಾಗಿದ್ದು, ಇದರ ಹಿಂದೆ ಕಾರ್ಪೊರೇಟ್ ಪ್ರಭಾವ ಕಾಣಿಸುತ್ತಿದೆ’ ಎಂದು ಆರೋಪಿಸಿದರು.
ಸರ್ಕಾರ ಶಾಲೆಗಳ ವಿಲೀನ ಪ್ರಕ್ರಿಯೆ ಕೈಬಿಟ್ಟು ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಸಂದರ್ಭದಲ್ಲಿ ಟಿಇಟಿ ವಿನಾಯಿತಿ ನೀಡುವ ಮೂಲಕ ಸ್ಥಳೀಯ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಬೇಕು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.