ರಾಯಚೂರು: ‘ಮೇಲ್ದರ್ಜೆಗೇರಿಸಿದ ಜಿಲ್ಲಾ ಮುಖ್ಯ ರಸ್ತೆಗಳ ವಿಸ್ತರಣೆಗೆ ಅನುದಾನ ಕೊಡಲಾಗುವುದು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು.
ಇಲ್ಲಿಯ ನೂತನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳ ಆರ್ಥಿಕ ಮತ್ತು ಭೌತಿಕ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
‘ವಿಧಾನಸಭಾ ಕ್ಷೇತ್ರಗಳ ಶಾಸಕರು ತಮ್ಮ ಕ್ಷೇತ್ರಗಳಲ್ಲಿನ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್‌ಗಳ ಜತೆ ಪ್ರತಿ ತಿಂಗಳು ಸಭೆ ನಡೆಸಿ ರಸ್ತೆ ನಿರ್ಮಾಣ, ದುರಸ್ತಿ, ನಿರ್ವಹಣೆಯ ಬಗ್ಗೆ ಪರಿಶೀಲಿಸಬೇಕು’ ಎಂದು ಸಲಹೆ ನೀಡಿದರು.
‘ದೇಶದ ಸಮಗ್ರ ಅಭಿವೃದ್ಧಿ ಸುಗಮ ಸಂಚಾರದ ವ್ಯವಸ್ಥೆಯನ್ನು ಸಹ ಅವಲಂಬಿಸಿರುತ್ತದೆ. ಈ ನಿಟ್ಟಿನಲ್ಲಿ ರಸ್ತೆ ನಿರ್ವಹಣೆಗೆ ಬೇಕಾಗುವಷ್ಟು ಅನುದಾನ ನೀಡಲಾಗುವುದು’ ಎಂದು ತಿಳಿಸಿದರು.
‘ರಾಯಚೂರು ಜಿಲ್ಲೆಯ ಮಹತ್ವದ ಬೆಳಗಾವಿ-ರಾಯಚೂರು ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ವೇಗ ಹೆಚ್ಚಿಸಬೇಕು. ಅದಕ್ಕೆ ಬೇಕಾಗುವ ಯಂತ್ರೋಪಕರಣಗಳ, ಮಾನವ ಸಂಪನ್ಮೂಲದ ವ್ಯವಸ್ಥೆ ಮಾಡಿಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಬೇಕು’ ಎಂದು ಸಚಿವರು ಸೂಚಿಸಿದರು.
ಸಣ್ಣ ನೀರಾವರಿ, ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಮಾತನಾಡಿ, ‘ಜಿಲ್ಲೆಯಲ್ಲಿನ ವಿವಿಧ ಹೆದ್ದಾರಿಗಳ ನಿರ್ಮಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದೆ. ಇದರಿಂದ ದೂಳು ಹೆಚ್ಚಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಕಾಮಗಾರಿ ಬೇಗ ಮುಗಿಸಲು ಪ್ರಯತ್ನಿಸಬೇಕು’ ಎಂದು ತಿಳಿಸಿದರು.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮಾತನಾಡಿ, ‘ಸಿರಗುಪ್ಪ-ಬಳ್ಳಾರಿ ರಸ್ತೆ ಧಡೇಸುಗೂರು ಬಳಿ ಹದಗೆಟ್ಟಿದೆ. ಬೀದರ್, ಕಲಬುರಗಿ, ಯಾದಗಿರಿ, ಸುರಪುರ, ಶಹಾಪುರ, ಜೇವರ್ಗಿ, ಲಿಂಗಸುಗೂರು, ಮಸ್ಕಿಯಿಂದ ಬೆಂಗಳೂರಿಗೆ ಹೊರಡುವ ಎಲ್ಲ ಬಸ್‌ಗಳು ಇದೇ ಮಾರ್ಗವಾಗಿ ಸಂಚರಿಸುತ್ತವೆ. ಕಾಮಗಾರಿ ಬೇಗ ಮುಗಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಮನವಿ ಮಾಡಿದರು.
ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ, ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ ಮಾತನಾಡಿದರು.
ಸಂಸದ ಜಿ ಕುಮಾರ ನಾಯಕ, ಮಾನ್ವಿ ಶಾಸಕ ಹಂಪಯ್ಯ ನಾಯಕ, ಜಿಲ್ಲಾಧಿಕಾರಿ ನಿತೀಶ ಕೆ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ವೆಂಕಟೇಶ ಗಲಗ, ರಾಘವೇಂದ್ರ ಕುಲಕರ್ಣಿ, ಅಸ್ಲಂ ಪ್ರಕಾಶ, ಹೊನ್ನೇಶ ಹಾಗೂ ಶಿವಾಜಿ ಉಪಸ್ಥಿತರಿದ್ದರು.
ಜಿಲ್ಲಾ ಕೇಂದ್ರದ ರಸ್ತೆಗಳು ಸುಧಾರಣೆಯಾದರಷ್ಟೇ ಸಾಲದು. ತಾಲ್ಲೂಕಿನ ಎಲ್ಲ ಹೋಬಳಿ ಹಾಗೂ ಗ್ರಾಮಗಳ ರಸ್ತೆಗಳೂ ಸುಧಾರಣೆಯಾಗಬೇಕುಸತೀಶ ಜಾರಕಿಹೊಳಿ, ಲೋಕೋಪಯೋಗಿ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.