ರಾಯಚೂರು: 'ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಬಡವರ ಏಳಿಗೆ ಮತ್ತು ಮಹಿಳೆಯರ ಸಬಲೀಕರಣ ಸಾಧ್ಯವಾಗಿದೆ. ರಾಜ್ಯದ ಅಭಿವೃದ್ಧಿ ಇಡೀ ದೇಶಕ್ಕೆ ಮಾದರಿಯಾಗಿದೆ' ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು.
ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಎಡದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಪ್ರಯುಕ್ತ ಶನಿವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಕಾರ್ಯಾಗಾರ, ಗ್ಯಾರಂಟಿ ಉತ್ಸವದಲ್ಲಿ ಅವರು ಮಾತನಾಡಿದರು.
'ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಗ್ಯಾರಂಟಿಗಳ ಮೂಲಕ ವಾರ್ಷಿಕವಾಗಿ ₹51 ಸಾವಿರ ಕೋಟಿ ನೇರವಾಗಿ ಜನರಿಗೆ ತಲುಪಿಸಲಾಗುತ್ತಿದೆ' ಎಂದು ಹೇಳಿದರು.
'ಎರಡೂವರೆ ವರ್ಷಗಳಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ₹1.5 ಲಕ್ಷ ಕೋಟಿ ನೀಡಲಾಗಿದೆ. ಶಕ್ತಿ ಯೋಜನೆ ಅಡಿ ಮಹಿಳೆಯರು 665 ಕೋಟಿ ಬಾರಿ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುವುದರ ಮೂಲಕ ಗಿನ್ನಿಸ್ ದಾಖಲೆ ಮಾಡಿದ್ದಾರೆ' ಎಂದರು.
'ರಾಯಚೂರು ಜಿಲ್ಲೆಯಲ್ಲಿ 11.38 ಕೋಟಿ ಬಾರಿ ಮಹಿಳೆಯರು ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇದಕ್ಕೆ ₹465 ಕೋಟಿ ಖರ್ಚು ಮಾಡಲಾಗಿದೆ ಗ್ಯಾರಂಟಿಗಳಿಂದ ಜನರ ಜೀವನ ಮಟ್ಟ ಸುಧಾರಿಸುತ್ತಿದೆ' ಎಂದು ಹೇಳಿದರು.
ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ, ಶಾಸಕ ಹಂಪನಗೌಡ ಬಾದರ್ಲಿ, ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರವಿಹಾಳ, ವಿಧಾನ ಪರಿಷತ್ ಸದಸ್ಯರಾದ ಬಸನಗೌಡ ಬಾದರ್ಲಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪ ಅಮರನಾಥ, ಜಿಲ್ಲಾಧ್ಯಕ್ಷ ಪಾಮಯ್ಯ ಮುರಾರಿ, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ತಾಲ್ಲೂಕು ಅಧ್ಯಕ್ಷ ಪವನ್ ಕಿಶೋರ್ ಪಾಟೀಲ, ಜಿಲ್ಲಾಧಿಕಾರಿ ಕೆ.ನಿತೀಶ್, ಜಿ.ಪಂ. ಸಿಇಒ ಈಶ್ವರಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಲು ಗಿರಿ, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ ಉಪಸ್ಥಿತರಿದ್ದರು.
ಊಟಕ್ಕೆ ಕಾದ ಫಲಾನುಭವಿಗಳು
ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಕಾರ್ಯಾಗಾರಕ್ಕೆ ಬಂದಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಎರಡು ಕಡೆ ಊಟದ ವ್ಯವಸ್ಥೆ ಮಾಡಲಾಗಿತ್ತು ಊಟ ಆರಂಭವಾಗಿದೆ ಎಂದು ತಿಳಿದು ಫಲಾನುಭವಿಗಳು, ಕಾರ್ಯಕ್ರಮ ನಡೆಯುತ್ತಿರುವಾಗಲೇ ಅಲ್ಲಿಂದ ಎದ್ದು ಹೋಗಿ ಊಟದ ಸ್ಮಾಲ್‌ಗಳ ಮುಂದೆ ಸರತಿ ಸಾಲಿನಲ್ಲಿ ನಿಂತರು. ಆಯೋಜಕರು ಕಾರ್ಯಕ್ರಮ ಮುಗಿದ ನಂತರವೇ ಊಟ ನೀಡುವುದಾಗಿ ಹೇಳಿದ್ದರಿಂದ ಒಂದು ತಾಸು ಕಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.