
ಮಸ್ಕಿ: ‘ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ದ್ವೇಷ ಭಾಷಣ ವಿಧೇಯಕವು ಸಂವಿಧಾನಕ್ಕೆ ವಿರುದ್ಧವಾಗಿದ್ದು, ಇದನ್ನು ತಕ್ಷಣ ಹಿಂಪಡೆಯಬೇಕು’ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಆಗ್ರಹಿಸಿದರು.
ಪಟ್ಟಣ ಡಾ. ಅಂಬೇಡ್ಕರ್ ಪ್ರತಿಮೆ ಮುಂದೆ ಗುರುವಾರ ಬಿಜೆಪಿ ಮಂಡಲದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಧೇಯಕ ವಿರೋಧಿ ಪ್ರತಿಭಟನೆಯಲ್ಲಿ ಮಾತನಾಡಿದ ಅವರು,‘ಈ ಕಾಯ್ದೆ ಮೂಲಕ ಸರ್ಕಾರ ಪ್ರತಿಪಕ್ಷಗಳು, ಮಾಧ್ಯಮಗಳು ಹಾಗೂ ಜನಸಾಮಾನ್ಯರ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ’ ಎಂದು ಆರೋಪಿಸಿದರು.
‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಅತ್ಯಂತ ಮಹತ್ವದ ಹಕ್ಕಾಗಿದ್ದು, ಅದನ್ನೇ ಕುಗ್ಗಿಸುವ ಉದ್ದೇಶದಿಂದ ಈ ವಿಧೇಯಕ ತರಲಾಗಿದೆ ಎಂದರು. ಸರ್ಕಾರದ ವಿರುದ್ಧ ಟೀಕೆ ಮಾಡಿದವರನ್ನು ಬೆದರಿಸಲು ಹಾಗೂ ಮೌನಗೊಳಿಸಲು ಇಂತಹ ಕಾನೂನುಗಳನ್ನು ದುರುಪಯೋಗ ಮಾಡಲಾಗುತ್ತಿದೆ ಎಂದು ಹೇಳಿದರು. ಇದು ಕೇವಲ ಒಂದು ಪಕ್ಷದ ವಿರುದ್ಧವಲ್ಲ, ಪ್ರಜಾಪ್ರಭುತ್ವದ ಮೂಲ ಮೌಲ್ಯಗಳ ಮೇಲಿನ ದಾಳಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಪುರಸಭೆ ಅಧ್ಯಕ್ಷ ಸುರೇಶ ಹರಸೂರು ಮಾತನಾಡಿ,‘ಸಂವಿಧಾನ ಬದ್ಧ ಹಕ್ಕುಗಳನ್ನು ರಕ್ಷಿಸಲು ಎಲ್ಲರೂ ಒಗ್ಗಟ್ಟಾಗಿ ಹೋರಾಟ ನಡೆಸಬೇಕು’ ಎಂದು ಕರೆ ನೀಡಿದರು.
ಬಿಜೆಪಿ ಮಂಡಲ ಅಧ್ಯಕ್ಷ ಶರಣಯ್ಯ ಸೊಪ್ಪಿಮಠ, ಸದಸ್ಯ ಮೌನೇಶ ಮುರಾರಿ ಕೂಡ ಸರ್ಕಾರದ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು.
ಮುಖಂಡರಾದ ಮಲ್ಲಪ್ಪ ಅಂಕಶದೊಡ್ಡಿ, ಪ್ರಸನ್ನ ಪಾಟೀಲ, ಬಸವರಾಜ ಡೊಣಮರಡಿ ವಕೀಲ, ಅಮರೇಶ ದೀನಸಮುದ್ರ, ಮೌನೇಶ ನಾಯಕ, ಜೆ. ವೆಂಕಟೇಶ ನಾಯಕ, ಶರಣಬಸವ ವಕೀಲ, ನಾಗರಾಜ ಯಂಬಲದ, ಮಂಡಲ ಕಾರ್ಯದರ್ಶಿ ರಮೇಶ, ಬಸವರಾಜ, ಸೂಗಣ್ಣ ಬಾಳೇಕಾಯಿ, ಸೇರಿದಂತೆ ಅನೇಕ ಬಿಜೆಪಿ ಕಾರ್ಯಕರ್ತರು, ಪಕ್ಷದ ಪುರಸಭೆ ಸದಸದ್ಯರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.