ಸಿಂಧನೂರು: ‘ಆರೋಗ್ಯ ಆವಿಷ್ಕಾರ ಯೋಜನೆಯಡಿ ಕಲ್ಯಾಣ ಕರ್ನಾಟಕ ಭಾಗಕ್ಕೆ ₹850 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಶೇ 70ರಷ್ಟು ಕೆಲಸಗಳು ಟೆಂಡರ್ ಪ್ರಕ್ರಿಯೆ ಮುಗಿದು ಪ್ರಗತಿಯಲ್ಲಿವೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಇಲ್ಲಿಯ ಸತ್ಯಗಾರ್ಡನ್‍ನಲ್ಲಿ ಸಿಂಧನೂರು ದಸರಾ ಉತ್ಸವದ ಅಂಗವಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಹಾಗೂ ತಾಲ್ಲೂಕು ಪಂಚಾಯಿತಿ ಕಚೇರಿ ಕಟ್ಟಡ ಉದ್ಘಾಟನೆ, ಜಿಲ್ಲಾ ಆಸ್ಪತ್ರೆ ಕಟ್ಟಡ, ಜಿಟಿಟಿಸಿ ಕಟ್ಟಡ ಹಾಗೂ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
‘ಆರೋಗ್ಯ ಇಲಾಖೆಗೆ ಕೆಕೆಆರ್‌ಡಿಬಿಯಿಂದ ₹350 ಕೋಟಿ ಹಾಗೂ ರಾಜ್ಯ ಸರ್ಕಾರ ₹500 ಕೋಟಿ ಅನುದಾನ ನೀಡಿದೆ. ಈ ಭಾಗದಲ್ಲಿ ಅಗತ್ಯವಿರುವ ಕಡೆಗಳಲ್ಲಿ ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ’ ಎಂದರು.
‘ಜಿಲ್ಲೆಗೆ 8 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಂಜೂರು ಮಾಡಲಾಗಿದೆ. 5 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗಿದೆ. ರಾಯಚೂರು ನಗರಕ್ಕೂ ಸಮುದಾಯ ಆರೋಗ್ಯ ಕೇಂದ್ರ ಮಂಜೂರು ಮಾಡಲಾಗಿದೆ. ಲಿಂಗಸೂಗೂರಿನಲ್ಲಿ ₹21 ಕೋಟಿ ವೆಚ್ಚದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಸ್ಥಾಪನೆಗೆ ಮಂಜೂರಾತಿ ದೊರೆತಿದೆ. ಸಿಂಧನೂರಿನಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಕಟ್ಟಡ ಪೂರ್ಣಗೊಂಡಿದೆ. ಇಲ್ಲಿನ ತಾಲ್ಲೂಕು ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗಿದೆ’ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ,‘ರಾಜ್ಯದಲ್ಲಿ 33 ಜಿಟಿಟಿಸಿ ಕೇಂದ್ರಗಳಿದ್ದವು. ತಾವು ಸಚಿವರಾದ ನಂತರ 5 ಹೊಸ ಕೇಂದ್ರಗಳಿಗೆ ಮಂಜೂರಾತಿ ನೀಡಲಾಗಿದ್ದು, ಅದರಲ್ಲಿ ಸಿಂಧನೂರು ಮತ್ತು ರಾಯಚೂರು ಗ್ರಾಮೀಣವೂ ಇದೆ. ಒಟ್ಟು 33 ಕೇಂದ್ರಗಳಲ್ಲಿ 2,500 ವಿದ್ಯಾರ್ಥಿಗಳು ಮಾತ್ರ ಇದ್ದರು. ಇದಕ್ಕೆ ವಿಶೇಷ ಆದ್ಯತೆ ನೀಡಿ ಪ್ರಚಾರ ನೀಡಿದ್ದರಿಂದ ಪ್ರಸ್ತುತ ರಾಜ್ಯದಲ್ಲಿ 6 ಸಾವಿರ ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದಾರೆ’ ಎಂದರು.
‘ಹೊಸದಾಗಿ ಮಲ್ಟಿ ಸ್ಕಿಲ್ ಡೆವಲಪ್‍ಮೆಂಟ್ ಕೇಂದ್ರವನ್ನು ಕಲಬುರಗಿ, ಕೊಪ್ಪಳದ ತಳಕಲ್, ಮೈಸೂರಿನಲ್ಲಿ ಸ್ಥಾಪಿಸಲು ಮಂಜೂರಾತಿ ನೀಡಲಾಗಿದೆ’ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಹಂಪನಗೌ ಬಾದರ್ಲಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಮಾತನಾಡಿದರು.
ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ, ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ, ಶರಣಗೌಡ ಪಾಟೀಲ ಬಯ್ಯಾಪುರ, ನಗರಸಭೆ ಅಧ್ಯಕ್ಷೆ ಮಂಜುಳಾ ಪ್ರಭುರಾಜ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪಾಮಯ್ಯ ಮುರಾರಿ, ಸಿಂಧನೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುಗೌಡ ಬಾದರ್ಲಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸವರಾಜ ಪಾಟೀಲ ಇಟಗಿ, ಜಿಲ್ಲಾಧಿಕಾರಿ ನಿತೀಶ್ ಕೆ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಈಶ್ವರಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರಬಾಬು, ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಉಪಕುಲಪತಿ ವಿಜಯಾ ಬಿ.ಕೋರಿಶೆಟ್ಟಿ, ತಹಶೀಲ್ದಾರ್ ಅರುಣ್ ಎಚ್.ದೇಸಾಯಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ನಗರಸಭೆ ಪೌರಾಯುಕ್ತ ಪಾಂಡುರಂಗ ಇಟಗಿ ಉಪಸ್ಥಿತರಿದ್ದರು.
ವೀರೇಶ ಸಾಲಿಮಠ ನಾಡಗೀತೆ ಹಾಡಿದರು. ಎಸ್.ಶಿವರಾಜ ನಿರೂಪಿಸಿದರು.
ಅತಿವೃಷ್ಟಿಯಿಂದ ಕಲಬುರಗಿ ಬೀದರ್ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬೆಳೆ ಹಾನಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಯಲ್ಲಿ ವೀಕ್ಷಣೆ ಮಾಡಿದ್ದಾರೆ. ಶೀಘ್ರ ಕೃಷಿ ಮತ್ತು ಕಂದಾಯ ಅಧಿಕಾರಿಗಳು ಬೆಳೆಹಾನಿ ಮತ್ತು ಜೀವಹಾನಿ ಸರ್ವೆ ಮುಗಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆಡಾ.ಶರಣಪ್ರಕಾಶ ಪಾಟೀಲ ಜಿಲ್ಲಾ ಉಸ್ತುವಾರಿ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.