ADVERTISEMENT

ಬೆಳೆ ಹಾನಿಗೆ ತಕ್ಷಣ ಪರಿಹಾರ : ಮುಖ್ಯಮಂತ್ರಿ ಯಡಿಯೂರಪ್ಪ

ರಾಯಚೂರು, ವಿಜಯಪುರ, ಬಾಗಲಕೋಟೆಯಲ್ಲಿ ಬಿಎಸ್‌ವೈ ಸಮೀಕ್ಷೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2019, 20:15 IST
Last Updated 5 ಆಗಸ್ಟ್ 2019, 20:15 IST
ರಾಯಚೂರು ಜಿಲ್ಲೆಯಲ್ಲಿ ಕೃಷ್ಣಾ ನದಿಯ ಪ್ರವಾಹ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೋಮವಾರ ಹೆಲಿಕಾಪ್ಟರ್‌ ಮೂಲಕ ವೀಕ್ಷಿಸಿದರು
ರಾಯಚೂರು ಜಿಲ್ಲೆಯಲ್ಲಿ ಕೃಷ್ಣಾ ನದಿಯ ಪ್ರವಾಹ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೋಮವಾರ ಹೆಲಿಕಾಪ್ಟರ್‌ ಮೂಲಕ ವೀಕ್ಷಿಸಿದರು   

ರಾಯಚೂರು: ‘ಕೃಷ್ಣಾ ನದಿತೀರದ ಐದು ಜಿಲ್ಲೆಗಳಲ್ಲಿ ಪ್ರವಾಹದಿಂದ ಹಾನಿಉಂಟಾಗಿದೆ. ಜಮೀನುಗಳಲ್ಲಿ ನೀರು ನಿಂತಿದೆ. ಬೆಳೆ ಹಾನಿ ಆಗಿದ್ದಲ್ಲಿ ತಕ್ಷಣವೇ ಪರಿಹಾರ ನೀಡಲಾಗುವುದು’ ಎಂದುಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಸೋಮವಾರ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಗೂ ಮುನ್ನ ಅವರು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ರಾಯಚೂರು ಜಿಲ್ಲೆಯಲ್ಲಿ ಪ್ರವಾಹ ಪೀಡಿತ 51 ಗ್ರಾಮಗಳನ್ನು ಸ್ಥಳಾಂತರಿಸಲು 2009ರಲ್ಲಿಯೇ ಕ್ರಮ ಕೈಗೊಳ್ಳಲಾಗಿತ್ತು. 1,138 ಮನೆಗಳ ನಿರ್ಮಾಣಕ್ಕೆ ಆದೇಶಿಸಲಾಗಿತ್ತು. ಅದರಲ್ಲಿ ಅರ್ಧಕ್ಕಿಂತಲೂ ಹೆಚ್ಚು ಮನೆಗಳ ನಿರ್ಮಾಣ ಬಾಕಿ ಇವೆ’ ಎಂದರು.

ADVERTISEMENT

ಪ್ರವಾವ ಸಂತ್ರಸ್ತರಿಗೆ ಈಗಾಗಲೇ ನಿರ್ಮಾಣ ಮಾಡಿರುವ ಪುನರ್ವಸತಿ ಕೇಂದ್ರಗಳಲ್ಲಿ ಮೂಲಸೌಕರ್ಯಗಳನ್ನು ಕಲ್ಪಿಸಲು ಅನುದಾನ ಒದಗಿಸಲಾಗುವುದು’ ಎಂದು ಭರವಸೆ ನೀಡಿದರು.

15 ದಿನಗಳಲ್ಲಿ ಶಾಸಕರ ಸಭೆ

(ವಿಜಯಪುರ/ಬಳ್ಳಾರಿ ವರದಿ): ಪ್ರವಾಹ ಪೀಡಿತ ಜಿಲ್ಲೆಗಳಾದ ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಸೋಮವಾರ ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರದ ಮೊರೆ ಹೋಗುವುದಾಗಿ ಹೇಳಿದರು.

ಸಮೀಕ್ಷೆ ಬಳಿಕ ವಿಜಯಪುರದಲ್ಲಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಅಧಿಕಾರಿಗಳ ಸಭೆ ನಡೆಸಿದ ಅವರು ಸಮರೋಪಾದಿಯಲ್ಲಿ ಪರಿಹಾರ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳುವಂತೆ ಸೂಚಿಸಿದರು.

‘ಮಹಾರಾಷ್ಟ್ರದಲ್ಲಿ ಬೀಳುತ್ತಿರುವ ಮಳೆಯಿಂದಾಗಿ ವಿವಿಧೆಡೆ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳಿಗೆ ಸೂಚಿಸಿದ್ದು, ಕೆಲಸಗಳು ಆಗುತ್ತಿವೆ. ಮುಂದಿನ 15 ದಿನಗಳ ಒಳಗೆ ಪ್ರವಾಹ ಪೀಡಿತ ಜಿಲ್ಲೆಗಳ ಶಾಸಕರ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಲಾಗುವುದು’ ಎಂದು ಹೇಳಿದರು.

‘ಅಗತ್ಯ ಇರುವೆಡೆ ಗ್ರಾಮಗಳ ಸ್ಥಳಾಂತರಕ್ಕೂ ಸೂಚಿಸಲಾಗಿದೆ. ರಾಜ್ಯದಲ್ಲಿ ಒಂದೆಡೆ ನೆರೆ, ಮತ್ತೊಂದೆಡೆ ಬರಗಾಲ ಆವರಿಸಿ ವಿಪರ್ಯಾಸದ ಸನ್ನಿವೇಶ ನಿರ್ಮಾಣವಾಗಿದೆ. ಬಯಲು ಸೀಮೆ ಮತ್ತು ಮಲೆನಾಡಿನ ಶಿವಮೊಗ್ಗ ಭಾಗದಲ್ಲಿ ಮಳೆಯೇ ಇಲ್ಲ. ಈ ಎರಡೂ ಸನ್ನಿವೇಶಗಳನ್ನು ನಿರ್ವಹಿಸಲು ಸರ್ಕಾರ ಬದ್ದವಾಗಿದೆ’ ಎಂದರು.

‘ಸದ್ಯದಲ್ಲೇ ನವದೆಹಲಿಯಲ್ಲಿ ಪ್ರಧಾನಿ ಅವರನ್ನು ಭೇಟಿ ಮಾಡಿ, ಹೆಚ್ಚಿನ ಪರಿಹಾರಕ್ಕೆ ಬೇಡಿಕೆ ಸಲ್ಲಿಸಲಾಗುವುದು. ಪ್ರಕೃತಿ ವಿಕೋಪ ನಿಧಿಯಲ್ಲಿ ಹಣದ ಕೊರತೆ ಇಲ್ಲ. ಜಿಲ್ಲಾಧಿಕಾರಿ ಬಳಿ ₹10ರಿಂದ ₹15 ಕೋಟಿ ಇದೆ. ಅಗತ್ಯ ಬಿದ್ದರೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.