
ಧಾನ್ಯಗಳಿಂದ ಪಂಚ ಗ್ಯಾರಂಟಿ ಯೋಜನೆ ಬಿಂಬಿಸಿರುವುದು (ಸಾಂಕೇತಿಕ ಚಿತ್ರ)
ರಾಯಚೂರು: ‘ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಸಕಾಲದಲ್ಲಿ ಹಣ ಜಮೆ ಮಾಡಲು ಉಂಟಾಗುವ ತಾಂತ್ರಿಕ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ನಿಗಾ ವಹಿಸಬೇಕು’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಲಬುರಗಿ ವಿಭಾಗದ ಉಪಾಧ್ಯಕ್ಷ ಎಸ್.ಆರ್.ಮೆಹರೋಜ್ ಖಾನ್ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಜಲ ನಿರ್ಮಲ ಸಭಾಂಗಣದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆ ಅನುಷ್ಠಾನ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,‘ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳ ಪ್ರಗತಿಯ ಬಗ್ಗೆ ಅಧಿಕಾರಿಗಳು ಕಾಳಜಿ ವಹಿಸಬೇಕು’ ಎಂದರು.
‘ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಮತ್ತು ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಮಾರ್ಗಗಳ ಹೊಂದಾಣಿಕೆ ಮಾಡಲಾಗುತ್ತಿದೆ. ಹೆಚ್ಚಿನ ಸೇವೆ ಒದಗಿಸಲು ಬಸ್‌ಗಳ ಅವಶ್ಯಕತೆಯಿದೆ ಎಂದು ಶಕ್ತಿ ಯೋಜನೆಯ ಅನುಷ್ಠಾನಾಧಿಕಾರಿ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಾಣಧಿಕಾರಿ ಎಂ.ಎಸ್.ಚಂದ್ರಶೇಖರ, ಮನವಿ ಮಾಡಿದರು.
‘ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 3,52,582 ಗ್ರಾಹಕರ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸಲಾಗಿದೆ’ ಎಂದು ಜೆಸ್ಕಾಂ ಅಧಿಕಾರಿಗಳು ತಿಳಿಸಿದರು.
ಜಿಲ್ಲೆಯಲ್ಲಿ 1,58,435 ನಿರುದ್ಯೋಗಿ ಯುವಕರು ಯುವನಿಧಿ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಪಾಮಯ್ಯ ಮುರಾರಿ, ಉಪಾಧ್ಯಕ್ಷ ನಾಗೇಂದ್ರಪ್ಪ ಮಠಮಾರಿ, ತಾಲ್ಲೂಕು ಅಧ್ಯಕ್ಷ ಪವನ್ ಕಿಶೋರ್ ಪಾಟೀಲ್, ಗಫೂರ್ ಖಾನ್, ಹನುಮಂತಪ್ಪ ಜಾಲಿಬೆಂಚಿ, ಶೇಖರಗೌಡ ತುರುವಿಹಾಳ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಸಿಡಾಕ್ ಜಂಟಿ ನಿರ್ದೇಶಕ ಜಿ.ಯು.ಹುಡೇದ್, ನವೀನ್‌ಕುಮಾರ್, ನಜೀರ್ ಅಹ್ಮದ್ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.