ADVERTISEMENT

ಎಲ್ಲೆಡೆ ಕೋವಿಡ್ ಪರೀಕ್ಷೆ ಹೆಚ್ಚಿಸಿ: ಜಿಲ್ಲಾಧಿಕಾರಿ ವೆಂಕಟೇಶಕುಮಾರ ಸೂಚನೆ

ವಿಡಿಯೊ ಸಂವಾದದಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟೇಶಕುಮಾರ ಸೂಚನೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 2:31 IST
Last Updated 25 ಸೆಪ್ಟೆಂಬರ್ 2020, 2:31 IST
ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ವಿಡಿಯೊ ಸಂವಾದ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ವೆಂಕಟೇಶ ‌ಕುಮಾರ ಮಾತನಾಡಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು
ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ವಿಡಿಯೊ ಸಂವಾದ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ವೆಂಕಟೇಶ ‌ಕುಮಾರ ಮಾತನಾಡಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು   

ರಾಯಚೂರು: ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಸಂತೆ, ಎಪಿಎಂಸಿ ಹಾಗೂ ಮಾರುಕಟ್ಟೆ ಮತ್ತಿತರೆಡೆ ಆರೋಗ್ಯ ಇಲಾಖೆಯ ತಂಡ ಮೊಬೈಲ್ ಪರೀಕ್ಷಾ ಘಟಕಗಳ ಮೂಲಕ ಕೋವಿಡ್‌ ಪರೀಕ್ಷೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಗುರುವಾರ ನಗರದ ಜಿಲ್ಲಾಡಳಿತ ಕಚೇರಿಯ ವಿಡಿಯೊ ಕಾನ್ಪರೆನ್ಸ್ ಕೊಠಡಿಯಲ್ಲಿ ಜಿಲ್ಲೆಯ ತಹಶೀಲ್ದಾರರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ ಮಾತನಾಡಿದರು.

ಕೊರೊನಾ ಪರೀಕ್ಷಿಸಿಕೊಳ್ಳಲು ಜನರು ಮುಂದೆ ಬರುತ್ತಿಲ್ಲ ಎಂದು‌ ಗೊತ್ತಾಗಿದೆ. ಜನದಟ್ಟಣೆ ಹೆಚ್ಚಾಗಿರುವ ಸಾರ್ವಜನಿಕ ಪ್ರದೇಶಗಳಲ್ಲಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಸಂತೆ, ಎಪಿಎಂಸಿ ಹಾಗೂ ಮಾರುಕಟ್ಟೆ ಮತ್ತಿತರೆಡೆ ಆರೋಗ್ಯ ಇಲಾಖೆಯ ಸಿಬ್ಬಂದಿ ತೆರಳಿ ಮೊಬೈಲ್ ಪರೀಕ್ಷಾ ಘಟಕಗಳ ಮೂಲಕ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದರು.

ADVERTISEMENT

ವಿವಿಧ ಜನಸಮುದಾಯಗಳ ಜನರು ಹೆಚ್ಚಿರುವ ಪ್ರದೇಶಗಳಲ್ಲಿಯೂ ಕೋವಿಡ್‌ ತಪಾಸಣೆ ನಡೆಸಬೇಕು ಎಂದರು.

ಕೋವಿಡ್-19 ಹರಡದಂತೆ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು ಹಾಗೂ ಅಂತರ ಕಾಯ್ದುಕೊಳ್ಳಬೇಕು ಇದನ್ನು ಪಾಲಿಸದಿದ್ದಲ್ಲಿ ಪೊಲೀಸರು ದಂಡ ವಿಧಿಸಬೇಕು. ಮೊದಲ ಬಾರಿಗೆ ಎಚ್ಚರಿಕೆ ನೀಡಬೇಕು. ಆನಂತರ ಸಾಂಸ್ಥಿಕ ಕ್ವಾರಂಟೈನ್‍ಗೆ ಒಳಪಡಿಸಬೇಕು.‌ ಇದಕ್ಕೂ ಸಹಕರಿಸದಿದ್ದಲ್ಲಿ ಅಂಥವರ ವಿರುದ್ಧ ಎಫ್‍ಐಆರ್ ದಾಖಲಿಸಬೇಕು. ಈ ಪ್ರಗತಿಯ ಕುರಿತು ಪ್ರತಿ ಎರಡು ದಿನಗಳಿಗೊಮ್ಮೆ ಸಭೆ ನಡೆಸಲಾಗುವುದು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಬೇಕು. ಪ್ರತಿದಿನ ಕನಿಷ್ಠ 500 ಪ್ರಕರಣಗಳನ್ನು ದಾಖಲಿಸಿಕೊಂಡು ಕಂಟ್ರೋಲ್ ರೂಂಗೆ ವರದಿ ಮಾಡಬೇಕು ಎಂದು ಪೊಲೀಸರಿಗೆ ಸೂಚಿಸಿದರು.

ಮಾಸ್ಕ್ ಹಾಕಿಕೊಳ್ಳುವ ಕುರಿತು ಜಾಗೃತಿ ಮೂಡಿಸಬೇಕು.‌ ಮುಂದಿನ ದಿನಗಳಲ್ಲಿ ಕೋವಿಡ್ ಪ್ರಕರಣಗಳು ಮತ್ತಷ್ಟು ಹೆಚ್ಚಾಗುವ ವಿಚಾರ‌ ಗಂಭೀರವಾಗಿದ್ದು ಅಧಿಕಾರಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು. ಇದರಿಂದಾಗಿ ಕೋವಿಡ್-19 ಸಾವಿನ ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎಂದರು.

ಕ್ವಾರಂಟೈನ್ ನಿಯಮ ಉಲ್ಲಂಘಿಸಿದವರ ವಿರುದ್ಧ ಎಫ್‍ಐಆರ್ ದಾಖಲಿಸಗಬೇಕು. ಎಲ್ಲರಿಗೂ ಮಾಸ್ಕ್ ದೊರೆಯುವಂತಾಗಬೇಕು. ನಿಯಮ‌ ಉಲ್ಲಂಘನೆ ಮಾಡಿ‌ದ್ದಲ್ಲಿ ದಂಡ ವಿಧಿಸಲು ಪೊಲೀಸರೊಂದಿಗೆ ಅಧಿಕಾರಿಯನ್ನು ನಿಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಸೇರಿದಂತೆ ಪೊಲೀಸ್, ಕಂದಾಯ, ಆರೋಗ್ಯ ಇಲಾಖೆಯ ಅಧಿಕಾರಿಗಳು ವಿಡಿಯೊ ಸಂವಾದದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.