ADVERTISEMENT

ಮಾದಿಗ ಸಮಾಜಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಹನುಮಂತಪ್ಪ ಮನ್ನಾಪೂರು

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2023, 7:51 IST
Last Updated 23 ಏಪ್ರಿಲ್ 2023, 7:51 IST
ಹನುಮಂತ ಮನ್ನಾಪೂರು
ಹನುಮಂತ ಮನ್ನಾಪೂರು   

ದೇವದುರ್ಗ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಮಾದಿಗ ಸಮಾಜವನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಹನುಮಂತಪ್ಪ ಮನ್ನಾಪೂರು ಆರೋಪಿಸಿದರು.

ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ 36 ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳ ಪೈಕಿ ಛಲವಾದಿ ಜನಾಂಗಕ್ಕೆ 19, ಲಂಬಾಣಿ ಸಮಾಜಕ್ಕೆ 5,ಭೋವಿ ಸಮಾಜಕ್ಕೆ 4 ಮತ್ತು ಮಾದಿಗ ಸಮಾಜಕ್ಕೆ ಕೇವಲ 8 ಸೀಟು ನೀಡುವ ಮೂಲಕ ಪರಿಶಿಷ್ಟ ಜಾತಿಯ ರಾಜ್ಯದ ಬಹುದೊಡ್ಡ ಸಮುದಾಯವಾದ ಮಾದಿಗ ಸಮಾಜಕ್ಕೆ ಕಾಂಗ್ರೆಸ್ ಪಕ್ಷ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.

‘ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 8 ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳಿದ್ದು, ಒಂದು ಕ್ಷೇತ್ರದಲ್ಲಿಯೂ ನಮ್ಮ ಸಮಾಜಕ್ಕೆ ಟಿಕೆಟ್ ನೀಡದೇ ಇರುವುದು ದುರಾದೃಷ್ಟವೇ ಸರಿ. ನಮ್ಮನ್ನು ಕೇವಲ ಚುನಾವಣೆ ಸಂದರ್ಭದಲ್ಲಿ ಬಳಕೆ ಮಾಡಿಕೊಳ್ಳುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾದಿಗ ಸಮಾಜವನ್ನು ರಾಜಕೀಯವಾಗಿ ತುಳಿಯುತ್ತಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದರು.

ADVERTISEMENT

ರಾಜ್ಯದಲ್ಲಿನ ಮಾದಿಗ ಸಮಾಜದ ಜನರು ಎಲ್ಲಾ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬಾರದು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.