
ರಾಯಚೂರು: ‘ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಸರ್ಕಾರಿ ನೌಕರರು ಕೆಲಸ ಮಧ್ಯೆಯೇ ಕ್ರೀಡಾಚಟುಟಿಕೆಗಳಲ್ಲಿ ಭಾಗವಹಿಸಿ, ಮಾನಸಿಕ ಮತ್ತು ದೈಹಿಕ ಸದೃಢತೆ ಸಾಧಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕುಮಾರ್ ಕಾಂದೂ ಹೇಳಿದರು.
ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಯುವಜನಸೇವಾ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಸರ್ಕಾರಿ ನೌಕರರು ಮುಖ್ಯವಾಗಿ ಜನಸಾಮಾನ್ಯರ ನಿರೀಕ್ಷೆಯಂತೆ ಕೆಲಸ ನಿರ್ವಹಿಸಬೇಕು. ಕುಟುಂಬ ನಿರ್ವಹಣೆ ಜತೆ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸರ್ಕಾರಿ ಅಧಿಕಾರಿಗಳು, ನೌಕರರು ಕಾಲಕ್ಕೆ ತಕ್ಕಂತೆ ಕಾರ್ಯ ಶೈಲಿಯನ್ನು ಮಾರ್ಪಾಡು ಮಾಡಿಕೊಳ್ಳಬೇಕು’ ಎಂದರು.
ಸರ್ಕಾರಿ ನೌಕರರ ಸಂಘದ ಕಲಬುರಗಿ ವಿಭಾಗೀಯ ಉಪಾಧ್ಯಕ್ಷ ಕೃಷ್ಣ ಶಾವಂತಗೇರಿ ಮಾತನಾಡಿ, ‘ರಾಜ್ಯಾದ್ಯಂತ ನೌಕರರಿಗಾಗಿಯೇ ಕ್ರೀಡಾಕೂಟಗಳನ್ನು ಏರ್ಪಡಿಸಿ ನೌಕರರು ಪ್ರತಿ ನಿತ್ಯದ ಜಂಜಾಟಗಳಿಂದ ಹೊರಬರುವಂತೆ ಮಾಡಲಾಗುತ್ತಿದೆ’ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಶರಣಬಸವರಾಜ ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ವಿಜಯಶಂಕರ, ತಾಲ್ಲೂಕು ಪಂಚಾಯಿತಿ ಇಒ ಚಂದ್ರಶೇಖರ ಪವಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಸುರೇಂದ್ರ ಬಾಬು, ಆಯುಷ್ ಇಲಾಖೆಯ ಡಾ.ಶಂಕರಗೌಡ, ಯುವಜನಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಈರೇಶ ನಾಯಕ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.