ಲಿಂಗಸುಗೂರು: ‘ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ಮಧ್ಯೆಯೂ ಕೋವಿಡ್ ಐಸೋಲೇಷನ್ ವಾರ್ಡ್‍ನ್ನು ಇರುವ ಸೌಲಭ್ಯ ಸದ್ಬಳಕೆ ಮಾಡಿಕೊಂಡು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುತ್ತಿದ್ದಾರೆ’ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಹರ್ಷ ವ್ಯಕ್ತಪಡಿಸಿದರು.
ಶುಕ್ರವಾರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ನಂತರ ಮಾತನಾಡಿದ ಅವರು, ‘ನೂರು ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಲ್ಲಿ ಕನಿಷ್ಠ 50 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಬಳಕೆ ಮಾಡಬೇಕು. ಈಗಾಗಲೆ 32 ರೋಗಿಗಳು ದಾಖಲಾಗಿದ್ದು ಆಮ್ಲಜನಕ ಸೌಲಭ್ಯ ಕೂಡ ಕಲ್ಪಿಸಿದ್ದಾರೆ. ತಜ್ಞರ ಕೊರತೆಯಿಂದ ವೆಂಟಿಲೇಟರ್ ಬಳಕೆ ಆಗುತ್ತಿಲ್ಲ. ಸ್ಟಾಫ್ ನರ್ಸ್, ವೈದ್ಯರಿಗೆ ತರಬೇತಿ ನೀಡಿ ಮೂರು ದಿನದಲ್ಲಿ ವೆಂಟಿಲೇಟರ್ ಬಳಕೆ ಆರಂಭಿಸಲಾಗುವುದು’ ಎಂದರು.
‘ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬೇಕಾಗುವ ಔಷಧಿಗಳ ಕೊರತೆ ಇಲ್ಲ. ತಜ್ಞ ವೈದ್ಯರು, ಸಿಬ್ಬಂದಿ ಕೊರತೆ ಇದ್ದು ಈಗಾಗಲೆ ನೇಮಕಾತಿಗೆ ಆದೇಶ ಹೊರಡಿಸಿದೆ. ಸ್ವಯಂಪ್ರೇರಿತರಾಗಿ ಮುಂದೆ ಬಂದಲ್ಲಿ ಸ್ಥಳದಲ್ಲಿಯೆ ಆದೇಶ ನೀಡಲಾಗುವುದು’ ಎಂದು ಹೇಳಿದರು.
‘ಕೋವಿಡ್ ಲಸಿಕೆ ಕೊರತೆ ಇದೆ. ಎರಡನೇ ಡೋಸ್ ಪಡೆಯುವ ಎಲ್ಲರಿಗೂ ಲಭ್ಯವಿದೆ. ಮೊದಲ ಡೋಸ್ ಪಡೆಯುವವರು ಕಡ್ಡಾಯವಾಗಿ ಆನ್‍ಲೈನ್ ನೋಂದಣಿ ಮಾಡಿಕೊಳ್ಳಬೇಕು’ ಎಂದರು.
‘ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಎಕ್ಸರೆ, ಸ್ಕ್ಯಾನಿಂಗ್ ಇತರ ವೈದ್ಯಕೀಯ ಪರೀಕ್ಷೆಗಳಿಗೆ ನಿಗದಿತ ದರಕ್ಕಿಂತ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದಾರೆ. ಇತರೆ ರೋಗಗಳಿಂದ ನರಳುತ್ತಿರುವ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿಲ್ಲ. ಬಹುತೇಕ ರೋಗಿಗಳು ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ ಎಂದು ಗಮನ ಸೆಳೆದಾಗ ಈ ಕುರಿತಂತೆ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಿ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು’ ಎಂದು ಭರವಸೆ ನೀಡಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಮರೇಶ ಮಾಕಾಪುರ, ಆಸ್ಪತ್ರೆ ಮುಖ್ಯವೈದ್ಯ (ಪ್ರಭಾರಿ) ಡಾ. ದಿಗಂಬರ ಹೆರೂರ. ಉಪವಿಭಾಗಾಧಿಕಾರಿ ರಾಜಶೇಖರ ಡಂಬಳ, ತಹಶೀಲ್ದಾರ್ ಚಾಮರಾಜ ಪಾಟೀಲ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿದೇವಿ, ಪುರಸಭೆ ಮುಖ್ಯಾಧಿಕಾರಿ ವಿಜಯಲಕ್ಷ್ಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಹೊಂಬಣ್ಣ ರಾಠೋಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.