ADVERTISEMENT

ಸುಳ್ಳು ಪ್ರಕರಣ ದಾಖಲು ಆರೋಪ: ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2026, 4:35 IST
Last Updated 19 ಫೆಬ್ರುವರಿ 2026, 4:35 IST
ರಾಯಚೂರಿನ ಪೊಲೀಸ್‌ ಮುಖ್ಯಾಲಯಕ್ಕೆ ಮೆರವಣಿಗೆಯಲ್ಲಿ ಬಂದ ಜೆಡಿಎಸ್‌ ಜಿಲ್ಲಾ ಘಟಕದ ಕಾರ್ಯಕರ್ತರು
ರಾಯಚೂರಿನ ಪೊಲೀಸ್‌ ಮುಖ್ಯಾಲಯಕ್ಕೆ ಮೆರವಣಿಗೆಯಲ್ಲಿ ಬಂದ ಜೆಡಿಎಸ್‌ ಜಿಲ್ಲಾ ಘಟಕದ ಕಾರ್ಯಕರ್ತರು   

ರಾಯಚೂರು: ಜೆಡಿಎಸ್ ಮುಖಂಡರ ವಿರುದ್ಧ ಸುಳ್ಳು ಹಾಗೂ ರಾಜಕೀಯ ಪ್ರೇರಿತ ಪ್ರಕರಣ ದಾಖಲು ಮಾಡುತ್ತಿರುವ ಕಾಂಗ್ರೆಸ್ ಮುಖಂಡರ ತಂಡದ ವಿರುದ್ಧ ಹಾಗೂ ಪೊಲೀಸ್
ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜೆಡಿಎಸ್‌ ಜಿಲ್ಲಾ ಘಟಕದ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಗಂಜ್ ವೃತ್ತದಲ್ಲಿ ಕನಕದಾಸರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಕಾಂಗ್ರೆಸ್‌ ಮುಖಂಡರ ವಿರುದ್ಧ ಘೋಷಣೆಗಳನ್ನು ಕೂಗುತ್ತ ಮೆರವಣಿಗೆಯಲ್ಲಿ ಹೊರಟು ಜಿಲ್ಲಾ ಪೊಲೀಸ್‌ ಮುಖ್ಯಾಲಯದ ಕಚೇರಿ ಆವರಣಕ್ಕೆ ಬಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಅವರಿಗೆ ಮನವಿಪತ್ರ ಸಲ್ಲಿಸಿದರು.

ಜಿಲ್ಲೆಯಲ್ಲಿ ಜೆಡಿಎಸ್‌ ಮುಖಂಡರು ಮತ್ತು ಶಾಸಕರ ವಿರುದ್ಧ ಸುಳ್ಳು ದೂರು ದಾಖಲಿಸುವ ಪ್ರವೃತ್ತಿ ಹೆಚ್ಚುತ್ತಿದೆ. ಸುಳ್ಳು ದೂರುಗಳನ್ನು ದಾಖಲಿಸಲು ಕಾಂಗ್ರೆಸ್ ಮುಖಂಡರ ತಂಡ ಪೊಲೀಸರ ಮೇಲೆ ಒತ್ತಡ ಹಾಕುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಸುಳ್ಳು ಪ್ರಕರಣ ದಾಖಲು ಮಾಡಲು ಪೊಲೀಸರ ಮೇಲೆ ಒತ್ತಡ ಹಾಕುತ್ತಿರುವ ಕಾಂಗ್ರೆಸ್ ಮುಖಂಡರ ವಿರುದ್ದ ಕ್ರಮ ಕೈಗೊಳ್ಳಬೇಕು. ನಗರಸಭೆ ಮಾಜಿ ಸದಸ್ಯ ಬಿ.ತಿಮ್ಮಾರೆಡ್ಡಿ ವಿರುದ್ಧ ಸುಳ್ಳು ಪ್ರಕರಣವನ್ನು ಜಿ.ತಿಮ್ಮಾರೆಡ್ಡಿ ಪೋಲಿಸರ ಜೊತೆಗೆ ವ್ಯವಹರಿಸಿ ಪ್ರಕರಣ ದಾಖಲಿಸುತ್ತಿರುವ ಆರೋಪಗಳು ಕೇಳಿ ಬಂದಿವೆ. ಬರುವ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅವರ ಮೇಲೆ ಒತ್ತಡ ಹಾಕಲಾಗುತ್ತಿದೆ ಎಂದು ದೂರಿದರು.

ಜೆಡಿಎಸ್ ಮುಖಂಡರ ಮೇಲೆ ದಾಖಲಾದ ಸುಳ್ಳು ಪ್ರಕರಣ ರದ್ದುಗೊಳಿಸಬೇಕು, ಕುಮ್ಮಕ್ಕು ನೀಡುವ ವಾರ್ಡ್ ನಂ.7ರ ಕಾಂಗ್ರೆಸ್ ಮುಖಂಡ ಜಿ.ತಿಮ್ಮಾರೆಡ್ಡಿ ಮೇಲೆ ಸೂಕ್ತ ಕ್ರಮ ವಹಿಸಬೇಕು. ಸುಳ್ಳು ಪ್ರಕರಣ ದಾಖಲು ಮಾಡುತ್ತಿರುವ ಕಾಂಗ್ರೆಸ್ ಮುಖಂಡರ ಮೇಲೆ ಕ್ರಮ ಕೈಗೊಳ್ಳಬೇಕು. ಜಾತಿ ನಿಂದನೆ ಕಾಯ್ದೆ ದುರ್ಬಳಕೆ ಮಾಡಿಕೊಳ್ಳುತ್ತಿರುವವ ವಿರುದ್ಧ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ವಿರೂಪಾಕ್ಷಿ, ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಮಹಾಂತೇಶ ಪಾಟೀಲ ಅತ್ತನೂರು, ಜಿಲ್ಲಾ ಕಾರ್ಯಾಧ್ಯಕ್ಷ ಎನ್. ಶಿವಶಂಕರ ವಕೀಲ, ರಾಮನಗೌಡ ಏಗನೂರು, ಸಣ್ಣ ನರಸಿಂಹ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ನರಸಪ್ಪ ಜಂಬುನಾಥ ಯಾದವ್, ಎಸ್ ರಾಜು, ಈರಣ್ಣ ಯಾದವ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.