ADVERTISEMENT

ಮಾನ್ವಿ: ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ದುರ್ಬಳಕೆ ಆರೋಪ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2025, 16:04 IST
Last Updated 10 ಮಾರ್ಚ್ 2025, 16:04 IST
ಮಾನ್ವಿಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು
ಮಾನ್ವಿಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು   

ಮಾನ್ವಿ: ‘‌ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ದುರ್ಬಳಕೆ ಮಾಡಿದೆ’ ಎಂದು ಆರೋಪಿಸಿ ಜೆಡಿಎಸ್ ಪಕ್ಷದ ತಾಲ್ಲೂಕು ಘಟಕದಿಂದ ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಬಸವ ವೃತ್ತದಲ್ಲಿ ಜಮಾಯಿಸಿದ ಜೆಡಿಎಸ್ ಪಕ್ಷದ ನೂರಾರು ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧೋರಣೆ ವಿರುದ್ಧ ಘೋಷಣೆ ಕೂಗಿದರು. ಸುಮಾರು ಮೂರು ತಾಸು ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ, ‘ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಹಿತ ಕಾಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ಬಳಸುವ ಮೂಲಕ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ’ ಎಂದು ದೂರಿದರು.‌

ADVERTISEMENT

‘ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹಾಗೂ ಸಚಿವ ಎನ್.ಎಸ್.ಬೋಸರಾಜು ಜಿಲ್ಲೆಯ ಅಭಿವೃದ್ಧಿ ಕಡೆಗಣಿಸಿದ್ದಾರೆ. ಸಚಿವ ಬೋಸರಾಜು ಅಕ್ರಮವಾಗಿ ಮರಳು ಹಾಗೂ ಅಕ್ಕಿ ಸಾಗಣೆ ಮಾಡುವ ದಂಧೆಕೋರರು, ಗೂಂಡಾಗಿರಿ‌ ಮಾಡುವವರಿಗೆ ಬೆಂಬಲ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ತುಂಗಭದ್ರಾ ಎಡದಂಡೆ ನಾಲೆಯ ಅಸಮರ್ಪಕ ನಿರ್ವಹಣೆಯಿಂದ ತಾಲ್ಲೂಕಿನ ರೈತರು ಕಾಲುವೆ ನೀರಿನ ಸಮಸ್ಯೆ ಎದುರಿಸುವಂತಾಗಿದೆ. ತುಂಗಭದ್ರಾ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದರೂ ಕಾಲುವೆಯಲ್ಲಿ ನೀರು ಹರಿಯದೇ ಬೆಳೆಗಳು ಒಣಗುವಂತಾಗಿದೆ. ಏಪ್ರಿಲ್ 20ರವರೆಗೆ ಕಾಲುವೆಗಳಿಗೆ ನೀರು ಹರಿಸಬೇಕು’ ಎಂದು ಒತ್ತಾಯಿಸಿದರು.

ನಂತರ ಬಸವ ವೃತ್ತದಿಂದ ತಹಶೀಲ್ದಾರ್ ಕಚೇರಿ ವರೆಗೆ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಬಳಿಕ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು.

ಜೆಡಿಎಸ್ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಈರಣ್ಣ ಮರ್ಲಟ್ಟಿ, ಮುಖಂಡರಾದ ರಾಜಾ ರಾಮಚಂದ್ರ ನಾಯಕ, ಮಲ್ಲಿಕಾರ್ಜುನ ಪಾಟೀಲ, ಜೆ.ಎಚ್.ದೇವರಾಜ, ಸಾಜಿದ್ ಖಾದ್ರಿ, ಪಿ.ರವಿಕುಮಾರ, ಸುಬಾನ್ ಬೇಗ್, ಶರಣಪ್ಪ ಮೇದಾ, ಬಾಷಾಸಾಬ್, ಬಸವರಾಜ ಭಜಂತ್ರಿ, ಬಿ.ಮಲ್ಲಪ್ಪ ಹೂಗಾರ, ಚೆನ್ನಬಸಯ್ಯ ಸ್ವಾಮಿ, ಮೌನೇಶ ಹರೇಟನೂರ, ಎಸ್.ವೆಂಕೋಬ, ವಿಜಯ್ ನಾಯಕ, ಲಕ್ಷ್ಮಣ ಯಾದವ್, ಶಿವರಾಜ ನಾಯಕ ಚಾಗಬಾವಿ, ಮೌಲಾಸಾಬ್,  ಬಿ.ಸಂತೋಷ ಹೂಗಾರ, ವೀರೇಶ ಉಪ್ಪಾರ್, ಜಸ್ವಂತ್ ಸೇಠ್, ಮ್ಯಾಕಲ್ ಮೌನೇಶ ನಾಯಕ, ಬಸನಗೌಡ ಉಟಕನೂರು ಮತ್ತು ವಿವಿಧ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.