ADVERTISEMENT

ರಾಯಚೂರು: ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಉಪನ್ಯಾಸಕರ ಪ್ರತಿಭಟನೆ

ಮುಖ್ಯಮಂತ್ರಿಗೆ ಮನವಿಪತ್ರ ರವಾನೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2025, 6:06 IST
Last Updated 8 ನವೆಂಬರ್ 2025, 6:06 IST
ರಾಯಚೂರಿನ ಜಿಲ್ಲಾಡಳಿತ ಭವನದ ಎದುರು ಶುಕ್ರವಾರ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಉಪನ್ಯಾಸಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು
ರಾಯಚೂರಿನ ಜಿಲ್ಲಾಡಳಿತ ಭವನದ ಎದುರು ಶುಕ್ರವಾರ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಉಪನ್ಯಾಸಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು   

ರಾಯಚೂರು: ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಉಪನ್ಯಾಸಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಲ್ಲಿಯ ಜಿಲ್ಲಾಡಳಿತ ಭವನದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಹಾಗೂ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆಯ ಸುತ್ತೋಲೆಯನ್ನು ಹಿಂದಕ್ಕೆ ಪಡೆಯಬೇಕು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಸ್ತುತ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಪ್ರಸ್ತಾವವನ್ನು ಶಿಕ್ಷಣ ಸಚಿವರು ತಿರಸ್ಕರಿಸಬೇಕು ಎಂದು ಒತ್ತಾಯಿಸಿದರು.

2024- 25ನೇ ಸಾಲಿನ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಹಾಗೂ ಸಂಭಾವನೆ ಬಾಕಿ ₹10,135 ಕೋಟಿ ಕೂಡಲೇ ಬಿಡುಗಡೆ ಮಾಡಿ ವಿತರಿಸಬೇಕು. ಸರ್ಕಾರಿ, ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳು ಮತ್ತು ಪ್ರಾಂಶುಪಾಲರ ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿ ಮಾಡಬೇಕು ಎಂದು ಮನವಿ ಮಾಡಿದರು.

ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳಿಗೆ ಮೂಲ ಸೌಕರ್ಯ ಒದಗಿಸಬೇಕು. ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕೇತರ ಮತ್ತು ಗ್ರೂಪ್ ಡಿ ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಉಪ ನಿರ್ದೇಶಕರ ಕಚೇರಿಯನ್ನು ಬಲವರ್ಧನೆಗೊಳಿಸಲು ಇಬ್ಬರು ಹಿರಿಯ ಪ್ರಾಂಶುಪಾಲರನ್ನು ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ನಿಯೋಜಿಸಿ ಆ ಮುಖಾಂತರ ಇಲಾಖೆಯ ಪರೀಕ್ಷೆ ಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿರುವ ಪರೀಕ್ಷಾ ವಿಭಾಗವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಈ ಹಿಂದೆ ಇದ್ದಂತೆ ವರ್ಗಾಯಿಸಬೇಕು ಎಂದು ಆಗ್ರಹಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಪರೀಕ್ಷೆ ಮತ್ತು ಶೈಕ್ಷಣಿಕ ಸುಧಾರಣೆಗಳನ್ನು ತರಲು ಅಕಾಡೆಮಿಕ್ ಕೌನ್ಸಿಲ್ ಸಮಿತಿಯನ್ನು ಉನ್ನತ ಶಿಕ್ಷಣ ಇಲಾಖೆಯಲ್ಲಿರುವಂತೆ ರಚಿಸಬೇಕು. ಕೆಪಿಎಸ್ ಶಾಲೆಗಳ ಆಡಳಿತಾತ್ಮಕ ಮತ್ತು ಆರ್ಥಿಕ ಜವಾಬ್ದಾರಿಯನ್ನು ಆ ಕಾಲೇಜಿನ ಪ್ರಾಂಶುಪಾಲರಿಗೆ ನೀಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಪ್ರಸ್ತುತ ಇರುವ ವಿದ್ಯಾರ್ಥಿ ಮತ್ತು ಉಪನ್ಯಾಸಕರ ಅನುಪಾತದಲ್ಲಿ ಮಾರ್ಪಾಟು ಮಾಡಬೇಕು. ಸರ್ಕಾರಿ ನೌಕರರಿಗೆ ನೀಡುತ್ತಿರುವ ನಗದು ರಹಿತ ಚಿಕಿತ್ಸೆಯನ್ನು ಅನುದಾನಿತ ಕಾಲೇಜಿನ ಉಪನ್ಯಾಸಕರಿಗೆ ಮತ್ತು ಬೋಧಕೇತರ ಕುಟುಂಬ ವರ್ಗಕ್ಕೆ ಅನ್ವಯವಾಗುವಂತೆ ವಿಸ್ತರಿಸಬೇಕು ಎಂದು ಎಂದು ಮನವಿ ಮಾಡಿದರು.

ಏಪ್ರಿಲ್ 1, 2006ರ ನಂತರ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಿಗೆ ಆಯ್ಕೆಯಾಗಿರುವ ಉಪನ್ಯಾಸಕರಿಗೆ ನಿಶ್ಚಿತ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಅಧ್ಯಕ್ಷ ನರಸಪ್ಪ ಭಂಡಾರಿ, ಕಾರ್ಯಾಧ್ಯಕ್ಷ ಗೋವರ್ಧನ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಶರಣಪ್ಪ ಪಾಟೀಲ, ಖಜಾಂಚಿ ಮಂಜುನಾಥ ಐಲಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿಪತ್ರ ಸಲ್ಲಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.