
ರಾಯಚೂರು: ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಅನ್ಯ ಜಿಲ್ಲೆಯವರಿಗೆ ನೀಡಿದ್ದರಿಂದ ಸ್ಥಳೀಯರಿಗೆ ಅನ್ಯಾಯವಾಗಿದೆ. ಇನ್ನೂ ಬದಲಾವಣೆಗೆ ಅವಕಾಶವಿದ್ದು ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ದೇವಣ್ಣನಾಯಕ ಒತ್ತಾಯಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘1975ರಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ನಾನೂ ಟಿಕೆಟ್ ಆಕಾಂಕ್ಷಿಯಾಗಿ ಹೈಕಮಾಂಡ್ ನಾಯಕರಲ್ಲಿ ಮನವಿ ಮಾಡಿಕೊಂಡಿರುವೆ. ಈ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರದಲ್ಲಿ ಸಂಚರಿಸಿ ಸುಪ್ರೀಂ ಕೋರ್ಟ್ ವಕೀಲನಾದ್ದರಿಂದ ವಕೀಲರ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಜಾತಿ, ಮತ ಭೇದವಿಲ್ಲದೇ ಅನೇಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ಪಕ್ಷದಲ್ಲಿ ಮಾಜಿ ಐಎಎಸ್ ಅಧಿಕಾರಿ ಜಿ.ಕುಮಾರ ನಾಯಕ ಅವರಿಗೆ ಟಿಕೆಟ್ ನೀಡಿದ್ದು ಗೊತ್ತಾಗಿದೆ. ಯಾವ ಮಾನದಂಡದ ಆಧಾರದ ಮೇಲೆ ಟಿಕೆಟ್ ನೀಡಿದ್ದಾರೆ ಎಂದು ಗೊತ್ತಾಗುತ್ತಿಲ್ಲ. ಕುಮಾರ ನಾಯಕ ಅವರು ಕಾರ್ಯಕರ್ತರಿಗೆ, ಇಲ್ಲಿನ ಮತದಾರರಿಗೆ ಪರಿಚಯವಿಲ್ಲ. ಪಕ್ಷದ ನಾಯಕರು ತಮ್ಮ ನಿರ್ಧಾರ ಮರುಪರಿಶೀಲಿಸಬೇಕು’ ಎಂದರು.
‘ಮುಂದೆಯೂ ಪಕ್ಷದ ತೆಗೆದುಕೊಳ್ಳುವ ನಿರ್ಧಾರಕ್ಕೆ ಗೌರವಿಸುವೆ. ಪಕ್ಷೇತರನಾಗಿ ಸ್ಪರ್ಧಿಸುವ ಆಲೋಚನೆಯಿಲ್ಲ. ಸ್ಥಳೀಯರಿಗೆ ನೀಡಬೇಕು ಎನ್ನುವುದಷ್ಟೇ ನನ್ನ ಅಭಿಪ್ರಾಯ’ ಎಂದು ಸ್ಪಷ್ಟಪಡಿಸಿದರು.
ಬಸವರಾಜಪ್ಪಗೌಡ, ಶರಣಪ್ಪ ನೆಲಹಾಳ, ಎಂ.ವೀರನಗೌಡ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.