ADVERTISEMENT

ಬಸವ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2025, 16:27 IST
Last Updated 17 ಏಪ್ರಿಲ್ 2025, 16:27 IST

ರಾಯಚೂರು: ಜಿಲ್ಲಾಡಳಿತದಿಂದ ಏಪ್ರಿಲ್ 30ರಂದು ನಡೆಯಲಿರುವ ಬಸವ ಜಯಂತ್ಯುತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ನೂತನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಬಸವೇಶ್ವರ ಜಯಂತ್ಯುತ್ಸವದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಂದು ಬೆಳಿಗ್ಗೆ 9 ಗಂಟೆಗೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಸಂಜೆ ಮೆರವಣಿಗೆ ನಡೆಯಲಿದೆ. ಈ ಜಯಂತಿ ಕಾರ್ಯಕ್ರಮಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ತಪ್ಪದೇ ಹಾಜರಿರಬೇಕು. ಸಮಾಜದ ಮುಖಂಡರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ADVERTISEMENT

ವೀರಶೈವ ಕಲ್ಯಾಣ ಮಂಟಪದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತೆ ಕಾಪಾಡಲು ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಅಗತ್ಯ ಕ್ರಮವಹಿಸಬೇಕು. ಶಿಷ್ಟಾಚಾರ ಪ್ರಕಾರ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಗಣ್ಯರಿಗೆ ತಲುಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸರ್ಕಾರಿ, ಅರೆ ಸರಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಜಯಂತಿಯನ್ನು ಆಚರಣೆ ಮಾಡಬೇಕು ಎಂದು ಸೂಚನೆ ನೀಡಿದರು.

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಬಿ.ಬಡಿಗೇರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗೂರು, ರಾಯಚೂರು ಮಹಾನಗರ ಪಾಲಿಕೆಯ ಸಮುದಾಯ ಸಂಘಟನಾ ಅಧಿಕಾರಿ ಕೃಷ್ಣ ಕಟ್ಟಿಮನಿ, ವಾರ್ತಾ ಇಲಾಖೆಯ ಗವಿಸಿದ್ದಪ್ಪ ಹೊಸಮನಿ, ಸಮಾಜದ ಮುಖಂಡರಾದ ಚಂದ್ರಶೇಖರ ಪಾಟೀಲ, ಪರಮೇಶ್ವರ ಸಾಲಿಮಠ, ರಾಚನಗೌಡ, ಹರವಿ ನಾಗನಗೌಡ, ಅಶೋಕ ಪಾಟೀಲ ಅತ್ತನೂರ, ಶಿವಾನಂದ, ವೀರನಗೌಡ ಬಂಡಿ, ಎಂ.ಚನ್ನಬಸವ, ಜೆ.ಬಸವರಾಜ, ಮಲ್ಲಿಕಾರ್ಜುನ ಗುಡಿಮನಿ, ಎಸ್.ಜಿ.ಕಲ್ಲಯ್ಯಸ್ವಾಮಿ, ಆನಂದಕಮಾರ, ವಿಜಯಕುಮಾರ ಸಜ್ಜನ, ಪ್ರತಿಭಾ ಗೋನಾಳ, ಶಿವಯೋಗಿ ಪಾಟೀಲ ಸೇರಿದಂತೆ ವೀರಶೈವ ಲಿಂಗಾಯತ ಸಮಾಜ, ಜಾಗತಿಕ ಲಿಂಗಾಯತ ಮಹಾಸಭಾ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.