ADVERTISEMENT

ರಾಯಚೂರು ಕುಷ್ಠ ರೋಗ ಮುಕ್ತವಾಗಲಿ

ಸಿಇಒ ನೂರ್‌ ಜಹಾರ್‌ ಖಾನಂ ಅಧ್ಯಕ್ಷತೆಯಲ್ಲಿ ಕುಷ್ಠರೋಗ ಪತ್ತೆ ಆಂದೋಲನ ಸಭೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 14:00 IST
Last Updated 2 ಆಗಸ್ಟ್ 2022, 14:00 IST
ರಾಯಚೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ಸಿದ್ಧತೆ ಸಭೆಯಲ್ಲಿ ಕುಷ್ಠರೋಗದ ಕುರಿತು ಜಾಗೃತಿ ಮೂಡಿಸುವ ಭಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು. 
ರಾಯಚೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ಸಿದ್ಧತೆ ಸಭೆಯಲ್ಲಿ ಕುಷ್ಠರೋಗದ ಕುರಿತು ಜಾಗೃತಿ ಮೂಡಿಸುವ ಭಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು.    

ರಾಯಚೂರು: ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಅಂಗವಾಗಿ ಜಿಲ್ಲೆಯಾದ್ಯಂತ ಸೆಪ್ಟೆಂಬರ್‌ 12 ರಿಂದ 29ರವರೆಗೆ ಹಮ್ಮಿಕೊಂಡಿರುವ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ಯಶಸ್ವಿಗೊಳಿಸಬೇಕು. ಈ ಮೂಲಕ ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಶ್ರಮಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೂರಜಹಾನ್ ಖಾನಂ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸಿ ಸಾರ್ವಜನಿಕರಿಗೆ ತಿಳಿವಳಿಕೆ ನೀಡಬೇಕು. ಶಾಲಾ-ಕಾಲೇಜುಗಳಲ್ಲಿ ಸ್ಪರ್ಶ ಕುಷ್ಠರೋಗ ಕುರಿತು ಜಾಗೃತಿ ಮೂಡಿಸಬೇಕು. ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಆಂದೋಲನ ಅವಧಿಯಲ್ಲಿ ಮನೆ-ಮನೆಗೆ ಭೇಟಿ ನೀಡಿ, ರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ರೋಗಿಗಳನ್ನು ಪತ್ತೆಹಚ್ಚಿ ಅವರಿಗೆ ಚಿಕಿತ್ಸೆ ಕೊಡಿಸಬೇಕು ಎಂದರು.

ADVERTISEMENT

ಮತದಾರರ ಪಟ್ಟಿಯಲ್ಲಿ ನೋಂದಾಯಿಸಿ: ಕುಷ್ಠ ರೋಗಿಗಳು, ಕುಷ್ಠ ರೋಗ ಅಸ್ಪತ್ರೆ ವಾರ್ಡ್‌ಗಳಲ್ಲಿ ಮತ್ತು ಕುಷ್ಠ ರೋಗ ಕಾಲೋನಿಗಳಲ್ಲಿ ವಾಸಿಸುತ್ತಿರುವ ಹಾಗೂ ಈ ರೋಗದಿಂದ ಗುಣಮುಖರಾದವರ ಹೆಸರು ಮತದಾರರ ಪಟ್ಟಿಯಲ್ಲಿ ಕೈಬಿಟ್ಟಿದ್ದರೆ, ಅಂತಹವರನ್ನು ಆದ್ಯತೆ ಮೇರೆಗೆ ಮತದಾರರ ಪಟ್ಟಿಯಲ್ಲಿ ನೋಂದಾಯಿಸಬೇಕು.. ಇವರು ವಾಸ ಇರುವ ಸ್ಥಳಗಳಿಗೆ ಮನೆ ಮನೆ ಭೇಟಿ ನೀಡಿ ವಿಶೇಷ ಆಂದೋಲನದಂತೆ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.

ಈ ಕಾರ್ಯದ ಪ್ರತಿ ಹಂತದ ಚಿತ್ರ ವಿಡಿಯೋ ಚಿತ್ರಿಕರಣ ಮಾಡುವುದು, ಮನೆ ಮನೆ ಭೇಟಿ ನೀಡಿ, ಜನರೊಂದಿಗೆ ಸಂಭಾಷಣೆ, ಚುನಾವಣಾ ಮಾಹಿತಿ ನೀಡುವ ಮತ್ತು ಇನ್ನಿತರೆ ಹಂತಗಳ ಬಗ್ಗೆ ದಾಖಲೀಕರಿಸಲಾದ ಚಿತ್ರ ವಿಡಿಯೋ ಮತ್ತು ಅದರ ಟಿಪ್ಪಣಿಗಳನ್ನು ಹಾಗೂ ಸಂಬಂಧಿಸಿದ ದಾಖಲೆಗಳನ್ನು ಸಂಬಂಧಿಸಿದ ಕಚೇರಿಗೆ ಕಳುಸಿಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯ ಅಧಿಕಾರಿ ಡಾ.ಯಶೋದಾ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 4,44,566 ಮನೆಗಳಿದ್ದು, ಕುಷ್ಠರೋಗ ಪತ್ತೆಗಾಗಿ ಒಟ್ಟು 2,221ತಂಡಗಳನ್ನು ರಚಿಸಲಾಗಿದೆ. ಪ್ರತಿಯೊಂದು ತಂಡದಲ್ಲಿ ಒಬ್ಬ ಆಶಾ ಕಾರ್ಯಕರ್ತೆ, ಮತ್ತೂಬ್ಬರು ಸ್ವಯಂಸೇವಕರು ಇರುತ್ತಾರೆ. ಪ್ರತಿ ಐದು ತಂಡಕ್ಕೆ ಒಬ್ಬರು ಮೇಲ್ವಿಚಾರಕರಂತೆ ಒಟ್ಟು 440 ಮೇಲ್ವಿಚಾರಕರು ಇರುತ್ತಾರೆ ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೃಷಭೇಂದ್ರಯ್ಯ ಸ್ವಾಮಿ, ಮಾಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವೆಂಕಟಪ್ಪ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ನಂದಿತಾ, ದೇವದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಇಂದಿರಾ, ದೇವದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬನದೇಶ್ವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.