ಮಾನ್ವಿ: ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಮುಂಗಾರು ಹಾಗೂ ಹಿಂಗಾರು ಜೋಳ ಖರೀದಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್ ತಾಲ್ಲೂಕು ಘಟಕದ ವತಿಯಿಂದ ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಬೆಳಿಗ್ಗೆ ಪಟ್ಟಣದ ಬಸವ ವೃತ್ತದಲ್ಲಿ ಜಮಾಯಿಸಿದ ಜೆಡಿಎಸ್ ಕಾರ್ಯಕರ್ತರು ಧರಣಿ ನಡೆಸಿದರು.
ಖರೀದಿ ಕೇಂದ್ರಗಳಲ್ಲಿ ಪ್ರತಿ ಎಕರೆಗೆ 20 ಕ್ವಿಂಟಲ್ ಮಾತ್ರ ಜೋಳ ಖರೀದಿ ಪ್ರಕ್ರಿಯೆ ಆರಂಭಿಸಿದ್ದ ಅಧಿಕಾರಿಗಳು ಕೆಲವೇ ದಿನಗಳಲ್ಲಿ ದಿಢೀರನೆ ಜೋಳ ಖರೀದಿ ಪ್ರಕ್ರಿಯೆ ಸ್ಥಗಿತಗೊಳಿಸಿದ್ದಾರೆ. ಜೋಳ ಮಾರಾಟಕ್ಕೆ ನೋಂದಾಯಿಸಿದ್ದ ಎಲ್ಲಾ ರೈತರಿಂದ ಜೋಳ ಖರೀದಿಸದೆ ಅಧಿಕಾರಿಗಳು ಅನ್ಯಾಯ ಮಾಡಿದ್ದಾರೆ ಎಂದು ಧರಣಿನಿರತರು ದೂರಿದರು.
ಮಾನ್ವಿ ಮತ್ತು ಸಿರವಾರ ತಾಲ್ಲೂಕುಗಳ ನೂರಾರು ರೈತರು ಕಳೆದ ನಾಲ್ಕು ತಿಂಗಳುಗಳಿಂದ ಜೋಳ ಮಾರಾಟ ಮಾಡದೆ ಆರ್ಥಿಕವಾಗಿ ನಷ್ಟ ಅನುಭವಿಸುವಂತಾಗಿದೆ. ಇಂಥ ಸಂದರ್ಭಗಳಲ್ಲಿ ಬ್ಯಾಂಕ್ ಅಧಿಕಾರಿಗಳು ರೈತರಿಗೆ ಸಾಲ ವಸೂಲಿ ನೋಟಿಸ್ ನೀಡುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ರೈತರ ಜೋಳ ಖರೀದಿಗೆ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ಒಂದು ವಾರದ ಒಳಗೆ ಜೋಳ ಮಾರಾಟ ಮಾಡಿದ ಎಲ್ಲಾ ರೈತರ ಖಾತೆಗಳಿಗೆ ಹಣ ಜಮಾ ಮಾಡಬೇಕು. ಪ್ರತಿ ವರ್ಷ ರೈತರು ರಾಶಿ ಮಾಡುವ ಮೊದಲು ಸರ್ಕಾರ ಜೋಳ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ರೈತರು ಬೆಳೆದ ಎಲ್ಲಾ ಬೆಳೆಗಳಿಗೆ ಎಂ.ಎಸ್.ಸ್ವಾಮಿನಾಥನ್ ವರದಿಯ ಶಿಫಾರಸುಗಳ ಅನ್ವಯ ವೈಜ್ಞಾನಿಕ ಬೆಲೆ ನಿಗದಿಗೊಳಿಸಬೇಕು ಎಂದು ಧರಣಿನಿರತರು ಒತ್ತಾಯಿಸಿದರು.
ರಸ್ತೆಯಲ್ಲಿ ಮಲಗಿ ಪ್ರತಿಭಟನೆ: ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ಕೆಲಹೊತ್ತು ರಾಜ್ಯ ಹೆದ್ದಾರಿಯಲ್ಲಿ ಮಲಗಿ ಪ್ರತಿಭಟನೆ ನಡೆಸಿದರು.
ನಂತರ ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿದರು.
ಮುಖ್ಯಮಂತ್ರಿಗೆ ಬರೆದ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಸಲ್ಲಿಸಲಾಯಿತು.
ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಜೆಡಿಎಸ್ ಪಕ್ಷದ ತಾಲ್ಲೂಕು ಅಧ್ಯಕ್ಷ ಈರಣ್ಣ ಮರ್ಲಟ್ಟಿ, ಮುಖಂಡರಾದ ರಾಜಾ ರಾಮಚಂದ್ರ ನಾಯಕ, ಮಲ್ಲಿಕಾರ್ಜುನ ಪಾಟೀಲ, ಶೌಕತ್ ಅಲಿ, ಪಿ.ರವಿಕುಮಾರ, ಎಸ್.ವೆಂಕೋಬ, ಶಿವರಾಜ ನಾಯಕ ಚಾಗಭಾವಿ, ಮೌನೇಶ ಹರೆಟನೂರು, ಬಸನಗೌಡ ಉಟಕನೂರು, ಬಿ.ಸಂತೋಷ ಹೂಗಾರ, ಮೌನೇಶ ನಾಯಕ, ಸುಭಾನ್ ಬೇಗ್, ಮ್ಯಾಕಲ್ ಮೌನೇಶ ನಾಯಕ, ಅಯ್ಯಪ್ಪ ನಾಯಕ ಪೋತ್ನಾಳ, ಲಕ್ಷ್ಮಣ ಯಾದವ ಹಾಗೂ ಶಿವಶಂಕ್ರಯ್ಯ ಸ್ವಾಮಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.