ADVERTISEMENT

ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡಿ

ಮಾನ್ವಿ: ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಸೂಚನೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2019, 13:14 IST
Last Updated 18 ಜನವರಿ 2019, 13:14 IST
ಮಾನ್ವಿಯಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿದರು
ಮಾನ್ವಿಯಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿದರು   

ಮಾನ್ವಿ: ‘ತಾಲ್ಲೂಕಿನಲ್ಲಿ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಯೋಜನೆಗಳ ಸಭೆ (ಕೆಡಿ.)ಯಲ್ಲಿ ಅವರು ಮಾತನಾಡಿದರು.

‘ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಈಗಾಗಲೇ 100ಕ್ಕೂ ಅಧಿಕ ಕೊಳವೆಬಾವಿಗಳನ್ನು ಕೊರೆಯಿಸಲಾಗಿದೆ. ಪೈಪ್ ಲೈನ್‌ ಮೂಲಕ ಕುಡಿಯುವ ನೀರು ಪೂರೈಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾಮಗಾರಿಗಳನ್ನು ಕೈಗೊಳ್ಳಬೇಕು. ಎಲ್ಲಾ ಕೆರೆಗಳನ್ನು ತುಂಬಿಸಬೇಕು. ಜಾನುವಾರುಗಳಿಗೆ ಮೇವು ಸಂಗ್ರಹಕ್ಕೆ ಹೆಚ್ಚು ಒತ್ತು ನೀಡಬೇಕು’ ಎಂದು ಸೂಚಿಸಿದರು.

ADVERTISEMENT

‘ವಿದ್ಯುತ್‌ ಪರಿವರ್ತಕ ಹಾಗೂ ಕಂಬಗಳ ಅಗತ್ಯತೆ ಕುರಿತು ಜೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದರೆ ಸೂಕ್ತ ಕ್ರಮಕ್ಕೆ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು. ಮಾನ್ವಿಯಲ್ಲಿ 220ಕೆವಿ ವಿದ್ಯುತ್‌ ಉಪಕೇಂದ್ರ ಮಂಜೂರಿಗೆ ಪ್ರಸ್ತಾವನೆ ಸಿದ್ಧಪಡಿಸಿದರೆ, ಸರ್ಕಾರದಿಂದ ಮಂಜೂರು ಮಾಡಿಸಲಾಗುವುದು’ ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಸಿರವಾರ ವಿಭಾಗದ ಜೆಸ್ಕಾಂ ಅಧಿಕಾರಿ ಸಿದ್ದಯ್ಯ ಮಾತನಾಡಿ,‘ ಕುರುಕುಂದಾ ಗ್ರಾಮದಲ್ಲಿ 110ಕೆವಿ ವಿದ್ಯುತ್‌ ಉಪಕೇಂದ್ರ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ’ ಎಂದರು.

ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ಅಧಿಕಾರಿ ಶಿವಮ್ಮ ಮಾತನಾಡಿ,‘ ತಾಲ್ಲೂಕಿನಲ್ಲಿ ಒಟ್ಟು ಪರಿಶಿಷ್ಟ ವರ್ಗದ ವಿದ್ಯಾರ್ಥಿ ನಿಲಯಗಳಿದ್ದು, 2 ಕಟ್ಟಡಗಳ ನಿರ್ಮಾಣಕ್ಕೆ ಮಂಜೂರಾತಿ ದೊರಕಿದ್ದು ನಿವೇಶನಗಳ ಅಗತ್ಯವಿದೆ. ಮಾನ್ವಿ ಪಟ್ಟಣದಲ್ಲಿ ಮಹರ್ಷಿ ವಾಲ್ಮೀಕಿ ಭವನ ನಿರ್ಮಾಣದ ನಿವೇಶನ ಕುರಿತು ಆಕ್ಷೇಪ ವ್ಯಕ್ತವಾಗಿದೆ’ ಎಂದರು.

ಮಹರ್ಷಿ ವಾಲ್ಮೀಕಿ ಭವನ ನಿರ್ಮಾಣದ ಜಾಗ ಪರಿಶೀಲನೆ ನಡೆಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಶಾಸಕರು ತಿಳಿಸಿದರು.

ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಟಿ.ಜಿ.ವೀರನಾಯಕ ಮಾತನಾಡಿ,‘ ಆರ್‌ಐಡಿಎಫ್‌ ಯೋಜನೆ ಅಡಿಯಲ್ಲಿ ತಾಲ್ಲೂಕಿನ ಅತ್ತನೂರು ಗ್ರಾಮದ ಪಶು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗಿದ್ದು ಕಟ್ಟಡ ನಿರ್ಮಾಣಕ್ಕೆ ಮಂಜೂರಾತಿ ದೊರಕಿದೆ’ ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗುಡಿಹಾಳ ಮಾತನಾಡಿ,‘ ತಾಲ್ಲೂಕಿನ ಒಟ್ಟು 276 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 1,564 ಮಂಜೂರಾದ ಹುದ್ದೆಗಳಲ್ಲಿ 542 ಹುದ್ದೆಗಳು ಖಾಲಿ ಇವೆ. ಒಟ್ಟು 38 ಸರ್ಕಾರಿ ಪ್ರೌಢಶಾಲೆಗಳ ಪೈಕಿ 364 ಮಂಜೂರಾದ ಹುದ್ದೆಗಳಲ್ಲಿ 87 ಹುದ್ದೆಗಳು ಖಾಲಿ ಇವೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಒಟ್ಟು 475 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಮಾನ್ವಿ ಹಾಗೂ ಸಿರವಾರ ತಾಲ್ಲೂಕುಗಳ ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲಿ ಕೊಠಡಿಗಳ ನಿರ್ಮಾಣ ಮತ್ತು ಮೂಲ ಸೌಕರ್ಯ ಒದಗಿಸಲು ₹ 50ಕೋಟಿ ವೆಚ್ಚದ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸಲಾಗಿದೆ ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಮಹಾಂತೇಶ ಪಾಟೀಲ್‌ ಅತ್ತನೂರು ಮಾತನಾಡಿ,‘ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಅಧಿಕಾರಿಗಳು ಯೋಜನೆಗಳು ಮತ್ತು ಸವಲತ್ತುಗಳ ಬಗ್ಗೆ ಪ್ರಚಾರ ಕಾರ್ಯ ಹಮ್ಮಿಕೊಳ್ಳಬೇಕು. ಜನತೆಗೆ ತಿಳಿವಳಿಕೆ ಮೂಡಿಸಲು ಮೊದಲ ಆದ್ಯತೆ ನೀಡಬೇಕು’ ಎಂದು ಸಲಹೆ ನೀಡಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರಯ್ಯ , ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಸುರೇಶ ನಾಯಕ, ಕೃಷಿ ಇಲಾಖೆಯ ಅಧಿಕಾರಿ ನಿಯಾಜ್‌ ಅಹ್ಮದ್‌ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾವಾರು ಪ್ರಗತಿ ವರದಿ ಮಂಡಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಕಿರಿಲಿಂಗಪ್ಪ ಕವಿತಾಳ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಮಲ್ಲನಗೌಡ ಖರಾಬದಿನ್ನಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶಶಿಕಾಂತ ಶಿವಪುರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.