ADVERTISEMENT

ಮಸ್ಕಿ |ಹಳೆಯ ನಿಲ್ದಾಣದಲ್ಲಿ ಬಸ್‌ಗಳ ನಿಲುಗಡೆಗೆ ಆಗ್ರಹ: ವ್ಯಾಪಾರಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2025, 2:54 IST
Last Updated 12 ಅಕ್ಟೋಬರ್ 2025, 2:54 IST
ಮಸ್ಕಿಯ ಹಳೆಯ ನಿಲ್ದಾಣದಲ್ಲಿ ಬಸ್ ನಿಲುಗಡೆ ಮುಂದುವರಿಸುವಂತೆ ಆಗ್ರಹಿಸಿ ಶನಿವಾರ ವ್ಯಾಪಾರಿಗಳು ಹಾಗೂ ಸ್ಥಳೀಯರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು
ಮಸ್ಕಿಯ ಹಳೆಯ ನಿಲ್ದಾಣದಲ್ಲಿ ಬಸ್ ನಿಲುಗಡೆ ಮುಂದುವರಿಸುವಂತೆ ಆಗ್ರಹಿಸಿ ಶನಿವಾರ ವ್ಯಾಪಾರಿಗಳು ಹಾಗೂ ಸ್ಥಳೀಯರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು   

ಮಸ್ಕಿ: ಪಟ್ಟಣದ ಹಳೆಯ ನಿಲ್ದಾಣದಲ್ಲಿ ಮೊದಲಿನಂತೆ ಸಾರಿಗೆ ಬಸ್ ನಿಲುಗಡೆ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿ ಶನಿವಾರ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ತಡೆದು ದಿಢೀರ್ ಪ್ರತಿಭಟನೆ ನಡೆಸಿದರು.

ಹಳೆಯ ನಿಲ್ದಾಣದಲ್ಲಿ ಹಲವಾರು ದಶಕಗಳಿಂದ ಬಸ್‌ಗಳನ್ನು ನಿಲ್ಲಿಸಲಾಗುತ್ತಿತ್ತು. ಇದೀಗ ಏಕಾಏಕಿ ಅಶೋಕ ವೃತ್ತಕ್ಕೆ ಬಸ್‌ ನಿಲ್ದಾಣ ಸ್ಥಳಾಂತರ ಮಾಡಲಾಗಿದೆ. ಇದರಿಂದ ಶಾಲಾ ಮಕ್ಕಳಿಗೆ, ಮಹಿಳೆಯರಿಗೆ, ವಯೋವೃದ್ಧರಿಗೆ ತೊಂದರೆಯಾಗುತ್ತಿದೆ. ತಾಲ್ಲೂಕು ಆಡಳಿತ ಹಾಗೂ ಸಾರಿಗೆ ಅಧಿಕಾರಿಗಳು ಕೂಡಲೇ ಹಳೆಯ ಬಸ್ ನಿಲ್ದಾಣದಲ್ಲಿ ಬಸ್‌ಗಳನ್ನು ನಿಲ್ಲಿಸಬೇಕು ಎಂದು ಮುಖಂಡ ಹನುಮಂತಪ್ಪ ವೆಂಕಟಾಪೂರ ಒತ್ತಾಯಿಸಿದರು.

ಮುಖಂಡ ಮಲ್ಲಯ್ಯ ಬಳ್ಳಾ, ಜೆ.ವೆಂಕಟೇಶ ನಾಯಕ, ಆರ್.ಕೆ. ನಾಯಕ, ಪುರಸಭೆ ಸದಸ್ಯ ಮಂಜುನಾಥ ಸೇರಿದಂತೆ ಅನೇಕ ವ್ಯಾಪಾರಿಗಳು, ಸ್ಥಳೀಯ ನಿವಾಸಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ADVERTISEMENT

ಹೆದ್ದಾರಿ ಮೇಲೆ ಪ್ರತಿಭಟನೆ ನಡೆಸಿದ್ದರಿಂದ ಕೆಲಕಾಲ ವಾಹನಗಳ ಸಂಚಾರ ಅಸ್ತವ್ಯಸ್ಥಗೊಂಡು ಸವಾರರು ಪರದಾಡುವಂತಾಯಿತು. ವಿಷಯ ತಿಳಿದು ಪ್ರತಿಭಟನೆ ಸ್ಥಳಕ್ಕೆ ಬಂದ ಸಿಪಿಐ ಬಾಲಚಂದ್ರ ಡಿ.ಲಕ್ಕಂ, ಪಿಎಸ್ಐ ಕೆ.ರಂಗಯ್ಯ ಪ್ರತಿಭಟನಕಾರರೊಂದಿಗೆ ಚರ್ಚಿಸಿದರು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.