ಮಸ್ಕಿ: ‘ಅಕಾಲಿಕ ಮಳೆಯಿಂದ ಬೆಳೆ ಹಾನಿಯಾದ ಕುರಿತು ಜಂಟಿ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ವರದಿ ಆಧರಿಸಿ ಅರ್ಹ ರೈತರಿಗೆ ಪರಿಹಾರ ನೀಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.
ತಾಲ್ಲೂಕಿನ ಸಂತೆಕೆಲ್ಲೂರು ಹಾಗೂ ಗುಡದೂರು ಸಮೀಪ ಮಳೆಯಿಂದ ಹಾನಿಗೊಳಗಾದ ಬೆಳೆ ಹಾನಿ ಪರಿಶೀಲಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.
‘ಕಂದಾಯ ಹಾಗೂ ಕೃಷಿ ಇಲಾಖೆಯಿಂದ ಈಗಾಗಲೇ ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆ ಕೈಗೊಳ್ಳಲಾಗಿದೆ. ಸಮೀಕ್ಷೆ ವೇಳೆ ಅರ್ಹರನ್ನು ಕೈಬಿಡುವುದು, ಅನರ್ಹರನ್ನು ಸೇರಿಸುವುದು ಕಂಡು ಬಂದರೆ ಕ್ರಮ ಕೈಗೊಳ್ಳಲಾಗುವುದು’ ಎಂದರು.
‘ಜಂಟಿ ಸಮೀಕ್ಷೆಯ ನಂತರ ಪ್ರತಿ ಹೆಕ್ಟೇರ್‌ಗೆ ₹17 ಸಾವಿರದಂತೆ ರೈತರ ಖಾತೆಗೆ ಪರಿಹಾರ ಹಾಕಲಾಗುವುದು’ ಎಂದರು.
‘ರಾಜ್ಯ ಸರ್ಕಾರ ರೈತರ ಪರವಾಗಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ವೈಮಾನಿಕ ಸಮೀಕ್ಷೆ ನಡೆಸುವ ಮೂಲಕ ಈ ಭಾಗದ ರೈತರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ’ ಎಂದು ಹೇಳಿದರು.
ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ, ವಿಧಾನ ಪರಿಷತ್ ಸದಸ್ಯರಾದ ಶರಣಗೌಡ ಪಾಟೀಲ ಬಯ್ಯಾಪುರ, ಎ.ವಸಂತಕುಮಾರ, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ, ಉಪವಿಭಾಗಾಧಿಕಾರಿ ಬಸವಣ್ಣಪ್ಪ ಕಲಶೆಟ್ಟಿ, ತಹಶೀಲ್ದಾರ್ ಮಂಜುನಾಥ ಬೋಗಾವತಿ, ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಯಾದವ, ಲಿಂಗಸುಗೂರು ಡಿವೈಎಸ್‌ಪಿ ದತ್ತಾತ್ರೇಯ ಕಾರ್ನಡ್ ಸೇರಿದಂತೆ ತಾಲ್ಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.