ADVERTISEMENT

ಮಸ್ಕಿ| ಗ್ರಾಮಗಳಿಗೆ ತೆರಳಿ ನೈಜತೆ ಅರಿತು ವರದಿ ತಯಾರಿಸಿ: ಬಸನಗೌಡ ತುರ್ವಿಹಾಳ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2025, 6:31 IST
Last Updated 25 ನವೆಂಬರ್ 2025, 6:31 IST
ಮಸ್ಕಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ತಾಲ್ಲೂಕು ಯೋಜನೆ ಹಾಗೂ ಅಭಿವೃದ್ಧಿ ಸಮಿತಿ ಸಭೆಯನ್ನು ಉದ್ದೇಶಿಸಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಮಾತನಾಡಿದರು
ಮಸ್ಕಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ತಾಲ್ಲೂಕು ಯೋಜನೆ ಹಾಗೂ ಅಭಿವೃದ್ಧಿ ಸಮಿತಿ ಸಭೆಯನ್ನು ಉದ್ದೇಶಿಸಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಮಾತನಾಡಿದರು   

ಮಸ್ಕಿ: ತಾಲ್ಲೂಕಿನ ಗ್ರಾಮಗಳ ನಿಜಸ್ಥಿತಿ ತಿಳಿದುಕೊಂಡು ಸಮಗ್ರ ಅಭಿವೃದ್ಧಿ ವರದಿ ಸಿದ್ಧಪಡಿಸಬೇಕು ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್‌. ಬಸನಗೌಡ ತುರ್ವಿಹಾಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಸೋಮವಾರ ನಡೆದ ತಾಲ್ಲೂಕು ಯೋಜನೆ ಹಾಗೂ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಮನೆಯಲ್ಲೇ ಕುಳಿತು ವರದಿ ತಯಾರಿಸುವ ದಿನಗಳು ಮುಗಿದಿವೆ. ಪ್ರತಿಗ್ರಾಮಕ್ಕೆ ತೆರಳಿ ಜನರ ಸಮಸ್ಯೆಗಳು, ಮೂಲಸೌಕರ್ಯಗಳ ನಿಜ ಸ್ಥಿತಿ ಪರಿಶೀಲಿಸಿ, ಸಮಗ್ರ ವರದಿ ನೀಡುವುದು ಅಧಿಕಾರಿಗಳ ಕರ್ತವ್ಯವಾಗಿದೆ. ಶಾಲೆಗಳ ಮೂಲಸೌಕರ್ಯ, ಕುಡಿಯುವ ನೀರು, ಚರಂಡಿಗಳು, ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯ ಒದಗಿಸಲು ನೈಜ ಮಾಹಿತಿ ಸ್ಥಳದಲ್ಲಿ ಪರಿಶೀಲಿಸಿ ಸಂಗ್ರಹಿಸಬೇಕು ಎಂದು ಪಿಡಿಒಗಳಿಗೆ ಸೂಚಿಸಿದರು.

ADVERTISEMENT

ಜೆಸ್ಕಾಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸೇರಿದಂತೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಮಗ್ರ ವರದಿ ಸಿದ್ದಪಡಿಸಬೇಕು. ಸಾಮಾನ್ಯ ಸಮಸ್ಯೆಗಳ ಜೊತೆಗೆ ಗ್ರಾಮೀಣಾಭಿವೃದ್ಧಿಯನ್ನು ವೇಗಗೊಳಿಸುವಲ್ಲಿ ಅಧಿಕಾರಿಗಳ ತುರ್ತು ಪಾಲ್ಗೊಳ್ಳುವಿಕೆ ಅಗತ್ಯವಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಟಿ.ರೋಣಿ, ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ, ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಯಾದವ ಇದ್ದರು. ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸರ್ಕಾರ ಹೊಸದಾಗಿ ಸಮಿತಿ ರಚಿಸಿದೆ. ಜಿಲ್ಲೆಯಲ್ಲಿ ಮಸ್ಕಿ ತಾಲ್ಲೂಕು ಪ್ರಥಮ ಸಭೆಯಾಗಿದೆ. ಅಧಿಕಾರಿಗಳು ಸಮಗ್ರ ವರದಿ ಸಿದ್ದಪಡಿಸಿ ಜಿಲ್ಲಾ ಪಂಚಾಯಿತಿಗೆ ಸಲ್ಲಿಸಬೇಕು
ಟಿ.ರೋಣಿ ಯೋಜನಾಧಿಕಾರಿ ಜಿಲ್ಲಾ ಪಂಚಾಯಿತಿ ರಾಯಚೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.