
ಸಿಂಧನೂರು: ‘18 ವರ್ಷದೊಳಗಿನ ಅಪ್ರಾಪ್ತ ಮಕ್ಕಳು ವಾಹನ ಚಾಲನೆ ಮಾಡುವುದು ಶಿಕ್ಷಾರ್ಹ ಅಪರಾಧ. ಆದ್ದರಿಂದ ಪಾಲಕರು ಈ ಬಗ್ಗೆ ಎಚ್ಚರ ವಹಿಸಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಸಲಹೆ ನೀಡಿದರು.
ನಗರದ ಪಿಡಬ್ಲ್ಯೂಡಿ ಕ್ಯಾಂಪಿನಲ್ಲಿರುವ ಸಂಚಾರ ಪೊಲೀಸ್ ಠಾಣೆಯ ಆವರಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ, ಸಿಂಧನೂರು ಉಪವಿಭಾಗ, ನಗರ ಮತ್ತು ಸಂಚಾರ ಪೊಲೀಸ್ ಠಾಣೆಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಹಾಗೂ ಸಂಚಾರ ನಿಯಮಗಳ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.
‘ಬೈಕ್, ಕಾರು, ಮೊಬೈಲ್ ಸಾರ್ವಜನಿಕರಿಗೆ ಅನುಕೂಲಕರವಾಗಿರಬೇಕು ಹೊರತು ದುಷ್ಪರಿಣಾಮ ಬೀರುವಂತೆ ಇರಬಾದರು. ಅಪ್ರಾಪ್ತ ಮಕ್ಕಳು, ವಿದ್ಯಾರ್ಥಿ-ಯುವಜನರು ಅತಿಹೆಚ್ಚು ಮೊಬೈಲ್ ಬಳಕೆ ಮಾಡುತ್ತಿರುವುದು ದುರದೃಷ್ಟಕರ ಸಂಗತಿ. ಇದರಿಂದ ಕಣ್ಣು ಮತ್ತು ಮೆದುಳಿಗೆ ತೀವ್ರ ತೊಂದರೆಯಾಗುತ್ತಿದೆ’ ಎಂದರು.
‘ಅಪ್ರಾಪ್ತ ಮಕ್ಕಳು ಬೈಕ್ ಚಲಾಯಿಸಿದರೆ ಶಿಕ್ಷೆ ವಿಧಿಸುವುದು ಅನಿವಾರ್ಯ. ಜೊತೆಗೆ ಇನ್ಸೂರೆನ್ಸ್ ಬರುವುದಿಲ್ಲ. ₹25 ಸಾವಿರ ದಂಡ ವಿಧಿಸಲಾಗುತ್ತದೆ. ಇದರಿಂದ ಅವರ ವಿದ್ಯಾಭ್ಯಾಸಕ್ಕೂ ತೊಂದರೆಯಾಗುತ್ತದೆ. 18 ವರ್ಷದ ನಂತರ ವಾಹನ ಚಾಲನಾ ಪರವಾನಿಗೆ, ಇನ್ಸೂರೆನ್ಸ್, ವಾಹನಗಳ ನೊಂದಣಿ ದಾಖಲಾತಿಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಶಾಲಾ-ಕಾಲೇಜು, ಆಸ್ಪತ್ರೆ, ಹಂಸ್‍ಗಳ ಮಾರ್ಗಸೂಚಿಗಳನ್ನು ಪಾಲಿಸಬೇಕು’ ಎಂದು ಹೇಳಿದರು.
ಡಿವೈಎಸ್‍ಪಿ ಚಂದ್ರಶೇಖರ ಜಿ.,‘ನಗರದಲ್ಲಿ ಗಾಂಜಾ, ಮಟ್ಕಾ, ಇಸ್ಪೀಟ್, ಮರಳು ಅಕ್ರಮ ಸಾಕಾಣಿಕೆ ನಿಯಂತ್ರಣಕ್ಕಾಗಿ ಕಠಿಣ ಕ್ರಮ ಕೈಗೊಳ್ಳಲಾಗಿದೆ. 18 ವರ್ಷದೊಳಗಿನ ಮಕ್ಕಳು ವಾಹನ ಚಲಾವಣೆ ಮಾಡುವುದನ್ನು ತಡೆಹಿಡಿಯುವ ನಿಟ್ಟಿನಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ 150ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಬದಲಿಗೆ ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರಿಗೆ ಹಾಗೂ ಸಾರ್ವಜನಿಕರಿಗೆ ಸಂಚಾರ ನಿಯಮಗಳ ಕರಪತ್ರವನ್ನು ನೀಡಿ ಜಾಗೃತಿ ಮೂಡಿಸಲಾಯಿತು. ಶಹರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ವೀರಾರೆಡ್ಡಿ, ಸಂಚಾರ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಚಂದ್ರಶೇಖರ ಹಿರೇಮಠ, ಎಎಸ್‍ಐ ವೀರೇಶ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.