
ಹಟ್ಟಿ ಚಿನ್ನದ ಗಣಿ: ಪಟ್ಟಣದಲ್ಲಿ ರಸ್ತೆ ಅಗೆದು ಜಲಧಾರೆ ಯೋಜನೆಯ ಪೈಪ್ ಹಾಕಲಾಗಿದೆ. ಕಾಮಗಾರಿ ನಂತರ ಸರಿಯಾದ ರೀತಿಯಲ್ಲಿ ರಸ್ತೆ ದುರಸ್ತಿ ಮಾಡದ ಪರಿಣಾಮ ಲಾರಿ ಸೇರಿದಂತೆ ಭಾರಿ ವಾಹನಗಳು ಸಿಕ್ಕಿ ಹಾಕಿಕೊಳ್ಳುತ್ತಿವೆ. ಇದರಿಂದ ಜನರು ಸಮಸ್ಯೆ ಎದುರಿಸುತ್ತಿದ್ದಾರೆ.
ಪಾಮನಕಲ್ಲೂರು ಕ್ರಾಸ್‌ನಿಂದ ಕಾಕಾನಗರದವರೆಗೆ ಮುಖ್ಯ ರಸ್ತೆಯ ಪಕ್ಕದಲ್ಲಿ ಅಗೆದ ಭಾಗಕ್ಕೆ ಮಣ್ಣು ಹಾಕಿ ಮುಚ್ಚಲಾಗಿದೆ. ವಾಹನಗಳ ಗಾಲಿಗಳು ಮಣ್ಣಿನಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಿದ್ದು, ವಾಹನ ಸವಾರರು ಜೀವ ಭಯ ದಲ್ಲಿದ್ದಾರೆ.
ಕಾಮಗಾರಿ ಮುಗಿದ ಬಳಿಕ ರಸ್ತೆಯನ್ನು ಅರೆಬರೆಯಾಗಿ ದುರಸ್ತಿ ಮಾಡಿದ ಕಾರಣ ಈಗ ಕುಸಿಯಲಾರಂಭಿಸಿದೆ. ಪಟ್ಟಣ ಪಂಚಾಯಿತಿ ಆಡಳಿತ ಕಾಮಗಾರಿಯ ಮೇಲ್ವಿಚಾರಣೆ ಮಾಡದೆ ನಿರ್ಲಕ್ಷ್ಯ ವಹಿಸಿದ್ದೆ ಇದಕ್ಕೆ ಕಾರಣ ಎನ್ನುತ್ತಾರೆ ಸಾರ್ವಜನಿಕರು.
ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಸಾರ್ವಜನಿಕರ ಜೊತೆಗೂಡಿ ಹೋರಾಟ ನಡೆಸಲಾಗುವುದು ಎಂದು ಡಿವೈಎಫ್‌ಐ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.