ಮಾನ್ವಿ: ‘ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಮಹನೀಯರ ಕನಸು ನನಸಾಗಬೇಕಾದರೆ ದೇಶದ ಸಮಗ್ರ ಅಭಿವೃದ್ಧಿ ಅಗತ್ಯ’ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.
ಪಟ್ಟಣದ ಬಾಲಕರ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಭಾನುವಾರ ತಾಲ್ಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಕಳೆದ ಮೂರು ವರ್ಷಗಳಲ್ಲಿ ಮಾನ್ವಿ ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗೆಳಿಗೆ ಚಾಲನೆ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿಯತ್ತ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹಿಂದುಳಿದ ಪ್ರದೇಶ ಎನ್ನುವ ಹಣೆಪಟ್ಟಿ ಸಂಪೂರ್ಣವಾಗಿ ಕಳಚಲಿದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ತಹಶೀಲ್ದಾರ್ ಸಂತೋಷರಾಣಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಕೊರೊನಾ ವಾರಿಯರ್ಸ್‍ಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ನಂತರ ಶಾಸಕರ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ಮಂಜೂರಾದ ಎರಡು ಆಂಬುಲೆನ್ಸ್‌ಗಳು ಮತ್ತು ಸ್ವಚ್ಛ ಭಾರತ ಮಿಷನ್ ಯೋಜನೆ ಅಡಿಯಲ್ಲಿ ಗ್ರಾಮ ಪಂಚಾಯಿತಿಗಳಿಗೆ ಮಂಜೂರಾದ ಕಸ ವಿಲೇವಾರಿ ವಾಹನಗಳ ಸೇವೆಗೆ ಶಾಸಕ ರಾಜಾ ವೆಂಕಟಪ್ಪ ನಾಯಕ ಚಾಲನೆ ನೀಡಿದರು.
ಪುರಸಭೆ ಅಧ್ಯಕ್ಷೆ ಸೂಫಿಯಾ ಬೇಗಂ, ಉಪಾಧ್ಯಕ್ಷ ಶುಕಮುನಿ, ಪುರಸಭೆಯ ವಿಪಕ್ಷ ನಾಯಕ ರಾಜಾ ಮಹೇಂದ್ರ ನಾಯಕ, ಸದಸ್ಯರಾದ ಶರಣಪ್ಪ ಮೇದಾ, ಸೈಯದ್ ತನ್ವೀರುಲ್ ಹಸನ್, ಇಬ್ರಾಹಿಂ ಖುರೇಷಿ, ಬಾಷಾಸಾಬ್, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗುಡಾಳ, ಸಿಡಿಪಿಒ ಸುಭದ್ರಾ ದೇವಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸ್ಟೆಲ್ಲಾ ವರ್ಗೀಸ್, ಪಿಐ ಮಹಾದೇವಪ್ಪ ಪಂಚಮುಖಿ, ಎಎಸ್‍ಐ ವೀರನಗೌಡ, ಕೃಷಿ ಅಧಿಕಾರಿ ಹುಸೇನ್ ಸಾಹೇಬ್, ಮುಖಂಡರಾದ ರಾಜಾ ರಾಮಚಂದ್ರ ನಾಯಕ, ಶಿವರಾಜ ನಾಯಕ ಹಾಗೂ ಹನುಮಂತ ಭೋವಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.