ADVERTISEMENT

ರಾಯಚೂರು ಜಿಲ್ಲಾ ಉತ್ಸವ: ಒಂದು ಲಕ್ಷ ಜನ ಪಾಲ್ಗೊಳ್ಳುವ ನಿರೀಕ್ಷೆ:

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2026, 5:38 IST
Last Updated 4 ಫೆಬ್ರುವರಿ 2026, 5:38 IST
ರಾಯಚೂರು ಉತ್ಸವ
ರಾಯಚೂರು ಉತ್ಸವ   

ರಾಯಚೂರು: ‘ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ ಫೆ.5ರಿಂದ 7 ರವರೆಗೆ ನಡೆಯಲಿರುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮೂರು ದಿನಗಳ ಉತ್ಸವದಲ್ಲಿ ಒಂದು ಲಕ್ಷ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ’ ಎಂದು ಜಿಲ್ಲಾಧಿಕಾರಿ ನಿತೀಶ್‌ ತಿಳಿಸಿದರು.

‘ಮೊದಲ ದಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಉತ್ಸವಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಲಿದ್ದಾರೆ’ ಎಂದು ನಗರದಲ್ಲಿ ಮಂಗಳವಾರ ಮಾಧ್ಯಮ ಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಸಣ್ಣ ನೀರಾವರಿ ಸಚಿವ ಎನ್‌.ಎಸ್‌.ಬೋಸರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಕೃಷಿ ಸಚಿವ ಎನ್‌.ಚಲುವರಾಯ ಸ್ವಾಮಿ ಪಾಲ್ಗೊಳ್ಳುವರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ತಿಳಿಸಿದರು.

ADVERTISEMENT

‘ಸಂಸದರು, ಜಿಲ್ಲೆಯ ಶಾಸಕರು, ವಿಧಾನ ಪರಿಷತ್‌ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ’ ಎಂದರು.

ಫೆ.5ರಂದು ಬೆಳಿಗ್ಗೆ 9 ಗಂಟೆಗೆ ರಾಜ್ಯ ಸರ್ಕಾರಿ ನೌಕರರು ಬೈಕ್‌ ರ್‍ಯಾಲಿ ನಡೆಸಲಿದ್ದಾರೆ. 30 ಸ್ಥಳೀಯ ಕಲಾ ತಂಡಗಳ ಮೆರವಣಿಗೆ ಕನ್ನಡ ಸಂಘದ ಆವರಣದಿಂದ ಹೊರಟು, ತೀನ್ ಕಂದೀಲ್, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತದ ಮಾರ್ಗವಾಗಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣ ತಲುಪಲಿದೆ ಎಂದು ಹೇಳಿದರು.

ವಿಶ್ವವಿದ್ಯಾಲಯದ ಆಡಳಿತ ಭವನದ ನೆಲ ಮಳಿಗೆಯಲ್ಲಿ ಮತ್ಸ್ಯ ಮೇಳ ಏರ್ಪಡಿಸಲಾಗಿದೆ. ಕೃಷಿ ಮೇಳ ಹಾಗೂ ತೋಟಗಾರಿಕೆ ಮೇಳಗಳು ನಡೆಯಲಿವೆ. ಸಂಜೆ ವೇಳೆ ಸಿಡಿಮದ್ದು ಪ್ರದರ್ಶನ ಹಾಗೂ ಪ್ರಸಿದ್ಧ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲವೆ ಎಂದು ತಿಳಿಸಿದರು.

ಉತ್ಸವದ ಪ್ರಯುಕ್ತ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಮುಖ್ಯ ವೇದಿಕೆ ನಿರ್ಮಿಸಲಾಗಿದೆ. ವಿಶ್ವವಿದ್ಯಾಲಯದ ಪ್ರೇಕ್ಷಾಗೃಹ, ಜಿಲ್ಲಾ ರಂಗ ಮಂದಿರ, ಮಹಿಳಾ ಸಮಾಜ, ಮಾವಿನಕೆರೆ ಆವರಣದಲ್ಲಿ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಫೆ.6ರಂದು ಬೆಳಿಗ್ಗೆ 10 ಗಂಟೆಗೆ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಶ್ವಾನ ಪ್ರದರ್ಶನ, ರೈತರಿಂದ ರೈತರ ಕಾರ್ಯಕ್ರಮ, ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಮೇಳ, ಸ್ಥಳೀಯ ಕಲಾವಿದರಿಂದ ಸಂಗೀತ, ಸಂಜೆ 6.30ಕ್ಕೆ ಡಿಕೆಡಿ ತಂಡದಿಂದ ನೃತ್ಯ ಪ್ರದರ್ಶನ, ಅಳ್ವಾಸ್ ತಂಡದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾಜೇಶ ಕೃಷ್ಣನ್ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದರು.

ಫೆ.7ರಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಜಿಲ್ಲಾ ಗ್ಯಾರಂಟಿ ಮೇಳ, ಮಧ್ಯಾಹ್ನ 2 ಗಂಟೆಯಿಂದ ರೈತರಿಂದ ಕಾರ್ಯಕ್ರಮ, ಸ್ಥಳೀಯ ಕಲಾವಿದರಿಂದ ಸಂಗೀತ ಕಾರ್ಯಕ್ರಮ, ಸಂಜೆ 6 ಗಂಟೆಯಿಂದ ಸಮಾರೋಪ ಸಮಾರಂಭ ನಡೆಯಲಿದೆ. ಖ್ಯಾತ ಖಾಯಕ ವಿಜಯ ಪ್ರಕಾಶ್ ತಂಡದವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಸ್ವಚ್ಛತೆ, ಕುಡಿಯುವ ನೀರು, ಮೂಲ ಸೌಕರ್ಯ, ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ. ತಾಲ್ಲೂಕು ಕೇಂದ್ರಗಳಿಂದ ಸುಲಭವಾಗಿ ಬರಲು ಸಾಧ್ಯವಾಗುವಂತೆ ನೇರ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರಕುಮಾರ ಕಾಂದೂ ಮಾತನಾಡಿ, ‘ರಾಜ್ಯದ 12 ಜಿಲ್ಲೆಗಳ ಸ್ವ–ಸಹಾಯ ಸಂಘಗಳ ಸದಸ್ಯರು ಭಾಗವಹಿಸಲಿದ್ದಾರೆ. ನೆರೆಯ ತೆಲಂಗಾಣ, ಆಂಧ್ರಪ್ರದೇಶದ ಸ್ವ–ಸಹಾಯ ಗುಂಪುಗಳಿಗೂ ಅವಕಾಶ ಮಾಡಿಕೊಡಲಾಗಿದೆ. ಕಡಿಮೆ ದರದಲ್ಲಿ ಆಹಾರ ಸಾಮಗ್ರಿಗಳ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ’ ಎಂದು ಹೇಳಿದರು.

ಮಹಾನಗರ ಪಾಲಿಕೆ ಆಯುಕ್ತ ಜುಬಿನ್‌ ಮೊಹಾಪಾತ್ರ ಮಾತನಾಡಿ, ‘ಉತ್ಸವದ ಸ್ಥಳದಲ್ಲಿ 100 ಮೊಬೈಲ್‌ ಶೌಚಾಲಯಗಳನ್ನು ಅಳವಡಿಸಲಾಗಿದೆ. ಸಾರ್ವಜನಿಕರಿಗೆ ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ’ ಎಂದು ತಿಳಿಸಿದರು.