ಮಾನ್ವಿ: ವಿದ್ಯುತ್ ಕಂಬದ ಮೇಲೆ ಹತ್ತಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದ ವ್ಯಕ್ತಿ ಏಕಾಏಕಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಘಟನೆ ತಾಲ್ಲೂಕಿನ ಹಿರೇಕೊಟ್ಟೆಕಲ್ ಗ್ರಾಮದಲ್ಲಿ ಬುಧವಾರ ನಡೆದಿದೆ.
ಮಹಮ್ಮದ್ ರಫಿ(45) ಮೃತರು. ‘ಗ್ರಾಮದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಡಚಣೆಯಾಗಿದ್ದು, ದುರಸ್ತಿ ಕಾರ್ಯಕ್ಕೆ ಜೆಸ್ಕಾಂ ಸಿಬ್ಬಂದಿ ತಾನು ಕಂಬದ ಮೇಲೆ ಹತ್ತದೆ ಖಾಸಗಿ ಎಲೆಕ್ಟ್ರಿಷಿಯನ್ ಮಹಮ್ಮದ್ ರಫಿ ಅವರನ್ನು ಕಂಬದ ಮೇಲೆ ಹತ್ತಿಸಿದ್ದರು. ದುರಸ್ತಿ ಕೆಲಸ ನಿರ್ವಹಿಸುವಾಗ ವಿದ್ಯುತ್ ಸ್ಪರ್ಶಿಸಿ ಘಟನೆ ಸಂಭವಿಸಿದೆ’ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ನಂತರ ಗ್ರಾಮಸ್ಥರು ಹಾಗೂ ಮೃತ ವ್ಯಕ್ತಿಯ ಕುಟುಂಬದ ಸದಸ್ಯರು ಮಾನ್ವಿ ಪಟ್ಟಣದ ಜೆಸ್ಕಾಂ ಉಪ ವಿಭಾಗ ಕಚೇರಿಗೆ ಆಗಮಿಸಿ ಜನಸೇವಾ ಫೌಂಡೇಶನ್ ಅಧ್ಯಕ್ಷ ಜಾವೀದ್ ಖಾನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಮೃತ ವ್ಯಕ್ತಿಯ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿ ಜೆಸ್ಕಾಂ ಇಇ ಚಂದ್ರಶೇಖರ ದೇಸಾಯಿ ಅವರಿಗೆ ಮನವಿ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.